ಮಂಗಳವಾರ, ಆಗಸ್ಟ್ 20, 2019
27 °C
ಹಡಪದ ಅಪ್ಪಣ್ಣ ಜಯಂತಿಯಲ್ಲಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ

ಶಿಕ್ಷಣದಿಂದ ಮಕ್ಕಳ ಭವಿಷ್ಯ ಉಜ್ವಲ

Published:
Updated:
Prajavani

ಯಾದಗಿರಿ: ‘ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿದರೆ ಅವರ ಭವಿಷ್ಯ ಉಜ್ವಲವಾಗುತ್ತದೆ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ ಹೇಳಿದರು.

ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಮಂಗಳವಾರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಶಿವಶರಣ ಹಡಪದ ಅಪ್ಪಣ್ಣನವರ ಜಯಂತ್ಯುತ್ಸವ ಸಮಿತಿ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಶಿವಶರಣ ಹಡಪದ ಅಪ್ಪಣ್ಣನವರ ಜಯಂತ್ಯುತ್ಸವದಲ್ಲಿ ಅವರು ಮಾತನಾಡಿದರು.

‘ಶಿಕ್ಷಣ ಪಡೆಯುವುದು ಪ್ರತಿಯೊಬ್ಬರ ಹಕ್ಕು. ಮಕ್ಕಳ ಪಾಲನೆ-ಪೋಷಣೆ ಮಾಡುವುದು ಪೋಷಕರ ಕರ್ತವ್ಯವಾಗಿದೆ. ಒಂದು ಕುಟುಂಬ ಸುಶಿಕ್ಷಿತವಾಗಿರಲು ಅವರಲ್ಲಿ ಒಬ್ಬರಾದರೂ ಶಿಕ್ಷಣ ಪಡೆಯಬೇಕು‘ ಎಂದರು.

‘ವಚನ ಸಾಹಿತ್ಯ ಎಲ್ಲರ ಜೀವನಕ್ಕೆ ಬೆಳಕಾಗಿದೆ. 12ನೇ ಶತಮಾನ ಇತಿಹಾಸದಲ್ಲಿ ಶಾಶ್ವತವಾಗಿ ದಾಖಲಾಗಿದೆ. ಅಂದಿನ ಶರಣರು ವಚನಗಳು ಸರಳವಾಗಿ ಜನರಿಗೆ ತಿಳಿಯುವಂತೆ ರಚಿಸಿ, ಸಾಮಾಜಿಕ, ಆರ್ಥಿಕ, ಧಾರ್ಮಿಕ ವ್ಯವಸ್ಥೆಯಲ್ಲಿನ ಅಸಮಾನತೆ ತಿದ್ದುವ ಕೆಲಸ ಮಾಡಿದ್ದಾರೆ’ ಎಂದು ಹೇಳಿದರು.

ಶಿಕ್ಷಕ ಕಳಸಪ್ಪ ವಡಗೇರಾ ಉಪನ್ಯಾಸ ನೀಡಿ, ‘ಕ್ರಿ.ಶ. 1134ರಲ್ಲಿ ಜನಿಸಿದ ಅಪ್ಪಣ್ಣನವರು ಅನುಭವ ಮಂಟಪದ ಮೇಲುಸ್ತುವಾರಿಯಾಗಿ ಬಸವಣ್ಣನವರ ಕಾಯಕಕ್ಕೆ ಆಧಾರ ಸ್ತಂಭವಾಗಿದ್ದರು. ಬಸವಣ್ಣನವರ ಕಾರ್ಯಭಾರದಲ್ಲಿ ತಮ್ಮದೇ ಆದ ಸೇವೆ ಸಲ್ಲಿಸುವ ಮೂಲಕ ಹಡಪದ ಅಪ್ಪಣ್ಣನವರು ಪ್ರಸಿದ್ಧರಾಗಿದ್ದರು. ಬಸವಾದಿ ಶರಣರಿಗೆ ತಾಂಬೂಲ ಸೇವೆ ಮಾಡುತ್ತ, ವಚನಗಳನ್ನು ರಚಿಸಿ ಸಮಾಜಕ್ಕೆ ಕೊಡುಗೆಯಾಗಿ ನೀಡಿದ್ದಾರೆ’ ಎಂದರು.

ನಗರಸಭೆ ಪೌರಾಯುಕ್ತ ರಮೇಶ ಸುಣಗಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ, ಸಮಾಜದ ಜಿಲ್ಲಾಧ್ಯಕ್ಷ ಅಯ್ಯಣ್ಣ ಇಬ್ರಾಹಿಂಪುರ ಇದ್ದರು.

ಕಾರ್ಯಕ್ರಮಕ್ಕೂ ಮುಂಚೆ ನಗರದ ಸುಭಾಸ್ ವೃತ್ತದಿಂದ ಜಿಲ್ಲಾಡಳಿದ ಭವನದ ವರೆಗೆ ಹಡಪದ ಅಪ್ಪಣ್ಣನವರ ಭಾವಚಿತ್ರದ ಮೆರವಣಿಗೆ ನಡೆಯಿತು.

Post Comments (+)