ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮತದಾರರ ಹಕ್ಕು, ಆಕ್ಷೇಪಣೆ ಪರಿಶೀಲಿಸಿ’

ಅಂತಿಮ ಮತದಾರರ ಪಟ್ಟಿ ಸಿದ್ಧತೆ ಸಭೆಯಲ್ಲಿ ಡಾ.ರವಿಶಂಕರ್ ಸೂಚನೆ
Last Updated 6 ಫೆಬ್ರುವರಿ 2020, 15:45 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳ ಕರಡು ಮತದಾರರ ಪಟ್ಟಿ ಪ್ರಕಟ ಮಾಡಿದ ನಂತರ ಕಳೆದ ಡಿ.16 ರಿಂದ ಜ.28 ರವರೆಗೆ ಬಂದಿರುವ ಹಕ್ಕು ಮತ್ತು ಆಕ್ಷೇಪಣೆಗಳನ್ನು ಕೂಲಂಕಷವಾಗಿ ಪರಿಶೀಲಿಸಬೇಕು ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಹಾಗೂ ಜಿಲ್ಲಾ ಮತದಾರರ ಪಟ್ಟಿ ವೀಕ್ಷಕ ಡಾ.ಜೆ.ರವಿಶಂಕರ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಅಂತಿಮ ಮತದಾರರ ಪಟ್ಟಿ ಸಿದ್ಧತೆ ಕುರಿತಂತೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಮುಖ್ಯವಾಗಿ ಅನರ್ಹ ಮತದಾರರನ್ನು ತೆಗೆದು ಹಾಕಿರುವ ಬಗ್ಗೆ ದಾಖಲೆಗಳನ್ನು ಸಂಗ್ರಹಿಸಿಟ್ಟುಕೊಳ್ಳಬೇಕು. ಕರಡು ಮತದಾರರ ಪಟ್ಟಿ ಪ್ರಕಟ ನಂತರ ಒಟ್ಟಾರೆ ಜಿಲ್ಲೆಯಲ್ಲಿ ಎಲ್ಲಾ ನಮೂನೆಯ ಅರ್ಜಿಗಳ ಮೂಲಕ 15,558 ಹಕ್ಕು ಮತ್ತು ಆಕ್ಷೇಪಣೆಗಳು ಬಂದಿವೆ. ಈ ಪೈಕಿ 12,931 ಅರ್ಜಿಗಳನ್ನು ಅಂಗೀಕರಿಸಿದ್ದು, 882 ಅರ್ಜಿಗಳು ತಿರಸ್ಕೃತಗೊಂಡಿವೆ. ಇವುಗಳಲ್ಲಿ ವಿವಿಧ ಕಾರಣಗಳಿಂದ ಮತದಾರರ ಪಟ್ಟಿಯಿಂದ ಕೈಬಿಟ್ಟವರ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಅಂತಹವರ ಅಗತ್ಯ ದಾಖಲೆಗಳನ್ನು ಸಂಗ್ರಹಿಸಿಟ್ಟುಕೊಂಡರೆ ಚುನಾವಣಾ ಸಂದರ್ಭದಲ್ಲಿ ಯಾವುದೇ ಗೊಂದಲಗಳು ಕಂಡುಬರುವುದಿಲ್ಲ ಎಂದರು.

ಚುನಾವಣಾ ಆಯೋಗದ ನಿರ್ದೇಶನದಂತೆ ಅರ್ಹತಾ ದಿನಾಂಕ ಜ.1 ರಂದು ವಿಧಾನಸಭಾ ಕ್ಷೇತ್ರಗಳ ಭಾವಚಿತ್ರವಿರುವ ಕರಡು ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ನಡೆಸಲಾಗಿದೆ. ಅಂತಿಮ ಮತದಾರರ ಪಟ್ಟಿಯನ್ನು ಫೆ.7 ರಂದು ಪ್ರಕಟಿಸಲಾಗುವುದು. ಮತದಾರರ ಪಟ್ಟಿ ಪರಿಷ್ಕರಣೆ ನಿರಂತರವಾಗಿರಲಿದ್ದು, ಚುನಾವಣೆ ನಾಮಪತ್ರಗಳ ಸ್ವೀಕೃತಿಯ ಕೊನೆಯ ದಿನಾಂಕದವರೆಗೆ ಹೆಸರು ಸೇರ್ಪಡೆಗೆ ಅವಕಾಶ ಇರುತ್ತದೆ ಎಂದರು.

ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಮಾತನಾಡಿದರು.ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ, ಸಹಾಯಕ ಆಯುಕ್ತ ಶಂಕರಗೌಡ ಎಸ್.ಸೋಮನಾಳ, ತಹಶೀಲ್ದಾರರಾದ ಚನ್ನಮಲ್ಲಪ್ಪ ಘಂಟಿ, ಸಂಗಮೇಶ ಜಿಡಗೆ, ಸುರೇಶ ಅಂಕಲಗಿ, ನಿಂಗಣ್ಣ ಎಸ್.ಬಿರಾದಾರ, ವಿನಯಕುಮಾರ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಮರಿಗೌಡ ಪಾಟೀಲ ಹುಲ್‌ಕಲ್, ಚುನಾವಣೆ ಶಾಖೆಯ ಶಿರಸ್ತೇದಾರ್ ಜಾಯ್ ವಿಲ್ಸನ್, ಖಲೀಲ್‌ಸಾಬ್, ಶಿಲ್ಪಾ ಪಾಟೀಲ, ಭೀಮೇಶಿ, ಹರೀಶ್‌ಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT