ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಪೂರ್ಣ ಲಾಕ್‍ಡೌನ್ ಜಾರಿ ಮಾಡಲು ಸಲಹೆ

ಕೋವಿಡ್ ಕುರಿತು ಅಧಿಕಾರಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಆರ್. ಶಂಕರ್ ಚರ್ಚೆ
Last Updated 17 ಮೇ 2021, 3:07 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ನಿಯಂತ್ರಣಕ್ಕಾಗಿ ಸಂಪೂರ್ಣ ಲಾಕ್‍ಡೌನ್ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಶಂಕರ್ ಸಲಹೆ ನೀಡಿದರು.

ಜಿಲ್ಲಾ ಪಂಚಾಯಿತಿಸಭಾಂಗಣದಲ್ಲಿ ಕೋವಿಡ್ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಅವರು ಮಾತನಾಡಿದರು.

ಎರಡು ದಿನ ಅವಕಾಶ ಕೊಟ್ಟು ಲಾಕ್‍ಡೌನ್ ಮಾಡಬೇಕು ಎಂದ ಸಚಿವರು, ಜನರು ಲಾಕ್‍ಡೌನ್ ಸಂದರ್ಭದಲ್ಲಿ ಸ್ವಯಂಪ್ರೇರಣೆಯಿಂದ ಮನೆಯಲ್ಲಿರುವ ಮೂಲಕ ಕೋವಿಡ್ ನಿಯಂತ್ರಣಕ್ಕೆ ಸಹಕರಿಸಬೇಕು
ಎಂದು ಕೋರಿದರು.

ಜಿಲ್ಲೆಗೆ ಮೆಡಿಕಲ್ ಪ್ಯಾಕೇಜ್ ನೀಡುವಂತೆ ಕೇಂದ್ರ ಸಚಿವ ಹರ್ಷವರ್ಧನ ಅವರಿಗೆ ಕೇಳಿದ್ದೇನೆ. ರಾಜ್ಯ ಸರ್ಕಾರದಿಂದ ಕೋರಿಕೆ ಸಲ್ಲಿಸುವಂತೆ ಕೇಂದ್ರ ಸಚಿವರು ತಿಳಿಸಿದ್ದು, ಈ ನಿಟ್ಟಿನಲ್ಲಿ ಪ್ರಸ್ತಾವನೆ ಸಲ್ಲಿಸಲು ಜಿಲ್ಲಾಧಿಕಾರಿಗೆ ಉಸ್ತುವಾರಿ ಸಚಿವರು ತಿಳಿಸಿದರು.

ಸುರಪುರ ತಾಲ್ಲೂಕು ಆಸ್ಪತ್ರೆಗೆ ಅಗತ್ಯ ವೆಂಟಿಲೇಟರ್ ವ್ಯವಸ್ಥೆ ಕಲ್ಪಿಸಿ ಕೋವಿಡ್ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡಲು ಕ್ರಮಕೈಗೊಳ್ಳಬೇಕೆಂದು ಸಚಿವರು ಸೂಚಿಸಿದರು.

ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್, ಸುರಪುರ ಮತ್ತು ಶಹಾಪುರ ತಾಲ್ಲೂಕು ಆಸ್ಪತ್ರೆಗಳಿಗೆ ಅಗತ್ಯವಿರುವ ವೆಂಟಿಲೇಟರ್‌ಗಳ ವ್ಯವಸ್ಥೆ ಮಾಡುವುದಾಗಿ ಮಾಹಿತಿ ನೀಡಿದರು.

ಆಸ್ಪತ್ರೆಗಳಲ್ಲಿ ಹಾಗೂ ಮೆಡಿಕಲ್ ಸೆಂಟರ್‌ಗಳಲ್ಲಿ ಕಡಿಮೆ ಬೆಲೆ ಇರುವ ಔಷಧಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವವರ ವಿರುದ್ಧ ಸೂಕ್ತಕ್ರಮಕೈಗೊಳ್ಳಬೇಕೆಂದು ಸಚಿವರು ಈ ವೇಳೆ ಪೊಲೀಸರಿಗೆ ಸೂಚಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಜನತೆಗೆ ವಿವಿಧ ಸವಲತ್ತು ಕೊಟ್ಟಿದ್ದಾರೆ. ಅವುಗಳು ಸರಿಯಾಗಿ ಸದುಪಯೋಗ ಮಾಡಿಕೊಂಡರೆ ಸಾರ್ಥಕವಾಗುತ್ತದೆ. ಇದರಿಂದ ಸರ್ಕಾರಕ್ಕೂ ಒಳ್ಳೆಯ ಹೆಸರು ಬರುತ್ತದೆ ಎಂದು ಸಲಹೆ ನೀಡಿದರು.

ರಾಯಚೂರು ಸಂಸದ ರಾಜಾ ಅಮರೇಶ ನಾಯಕ ಮಾತನಾಡಿ, ಶಹಾಪುರ ಹಾಗೂ ಕೆಂಭಾವಿಯಲ್ಲಿ ಆಸ್ಪತ್ರೆಗಳಲ್ಲಿ ಸಮಸ್ಯೆಗಳಿವೆ. ಆರೋಗ್ಯ ತುರ್ತು ಪರಿಸ್ಥಿತಿ ಇರುವುದರಿಂದ ಸರಿಯಾಗಿ ಕೆಲಸ ಮಾಡಬೇಕು. ಪ್ರಸಕ್ತ ಇರುವ ವೈದ್ಯರಿಗೆ ಸರಿಯಾಗಿ ಕೆಲಸ ಹಂಚಿಕೆ ಮಾಡಿ, ತಂಡವಾಗಿ ಕೆಲಸ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಯಾದಗಿರಿ ಶಾಸಕ ವೆಂಕಟರೆಡ್ಡಿ ಮುದ್ನಾಳ ಮಾತನಾಡಿ, ಜಿಲ್ಲೆಯಲ್ಲಿನ ಕುಡಿಯುವ ಶುದ್ಧ ನೀರಿನ ಘಟಕ (ಆರ್‌ಓ ಪ್ಲಾಂಟ್) ತಕ್ಷಣ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಶುದ್ಧ ನೀರಿನ ಘಟಕಗಳ ದುರಸ್ತಿಗೆ ಕ್ರಮಕೈಗೊಳ್ಳಬೇಕು. ಜನರಿಗೆ ಶುದ್ಧ ನೀರು ಪೂರೈಸಬೇಕು ಎಂದು ತಾಕೀತು ಮಾಡಿದರು.

ಸಭೆಯಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರು, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ವೇದಮೂರ್ತಿ, ಡಾ. ಇಂದುಮತಿ ಕಾಮಶೆಟ್ಟಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಸಂಜೀವಕುಮಾರ ರಾಯಚೂರಕರ್‌ ಇದ್ದರು.

19ರಿಂದ 3 ದಿನ ಸಂಪೂರ್ಣ ಲಾಕ್‌ಡೌನ್

ಯಾದಗಿರಿ: ಜಿಲ್ಲೆಯಾದ್ಯಂತ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವಕಾರಣ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕಾಗಿ ಕೆಲ ಸೇವೆಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ಚಟುವಟಿಕೆಗಳನ್ನು ಮೇ 19ರಂದು ಬೆಳಿಗ್ಗೆ 6 ಗಂಟೆ ಯಿಂದ 21ರಂದು ಬೆಳಿಗ್ಗೆ 6 ಗಂಟೆವರೆಗೆ ಸಂಪೂರ್ಣವಾಗಿ ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ. ಆರ್ ಆದೇಶ ಹೊರಡಿಸಿದ್ದಾರೆ.

ಅಗತ್ಯ ವಸ್ತುಗಳಾದ ಹಾಲು, ಆಸ್ಪತ್ರೆಗಳು, ಔಷಧಿ ಅಂಗಡಿಗಳು ಹಾಗೂ ಅಗತ್ಯ ಸೇವೆಗಳಾದ ಅಂಬ್ಯುಲೆನ್ಸ್, ಅಗ್ನಿಶಾಮಕ, ಪೆಟ್ರೋಲ್ ಪಂಪ್ ಇತರೆ ತುರ್ತು ವೈದ್ಯಕೀಯ ಸೇವೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಚಟುವಟಿಕೆಗಳನ್ನು ವಿಪತ್ತು ನಿರ್ವಹಣಾ ಕಾಯ್ದೆ-2005ರ 34(ಎಂ) ಅಡಿಯಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಈ ಆದೇಶ ಹೊರಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT