ಶನಿವಾರ, ಡಿಸೆಂಬರ್ 4, 2021
24 °C

ಖರ್ಗೆ ವಿರುದ್ಧ ಟೀಕೆ: ಬಿಜೆಪಿಯ ಕೀಳುಮಟ್ಟದ ರಾಜಕೀಯ: ಭೀಮಣ್ಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ರಾಜ್ಯಸಭೆ ವಿರೋಧ ಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಅಕ್ರಮವಾಗಿ ಆಸ್ತಿ ಮಾಡಿದ್ದಾರೆ ಎಂದು ಬಿಜೆಪಿ ನಾಯಕರು ಅಪಪ್ರಚಾರ ಮಾಡುವ ಮೂಲಕ ಅವರನ್ನು ತೇಜೋವಧೆ ಮಾಡುವ ಕೀಳು ಮಟ್ಟದ ರಾಜಕೀಯ ಬಿಡಬೇಕು ಎಂದು ಕಾಂಗ್ರೆಸ್ ನಾಯಕ ಡಾ. ಭೀಮಣ್ಣ ಮೇಟಿ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯ ರಾಜಕಾರಣದಲ್ಲಿ ಖರ್ಗೆ ಅವರು ತಮ್ಮದೇ ಆದ ವ್ಯಕ್ತಿತ್ವ ಉಳಿಸಿಕೊಂಡಿದ್ದಾರೆ. ರಾಜ್ಯ, ಕೇಂದ್ರ ಸಚಿವರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಆದರೆ, ಬಿಜೆಪಿ ನಾಯಕರು ಮಾತ್ರ ಅಪಪ್ರಚಾರ ಮಾಡುವ ಕೆಲಸ ಮಾಡುತ್ತಿದ್ದಾರೆ. ಇದು ನಾಚಿಗೇಡಿನ ಸಂಗತಿಯಾಗಿದೆ ಎಂದಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗಕ್ಕೆ ಸಾಕಷ್ಟು ಅಭಿವೃದ್ದಿ ಮಾಡಿದ್ದಾರೆ. 371(ಜೆ) ಸೌಲಭ್ಯ ಕಲ್ಪಿಸಿದ್ದಾರೆ. ಗುರುಮಠಕಲ್ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ರೈಲ್ವೆ ಕೋಚ್ ಕಾರ್ಖಾನೆ ಮಂಜೂರಾತಿ ಮಾಡಿಸಿದ್ದಾರೆ. ಕಲುಬರಗಿಯಲ್ಲಿ ಇಎಸ್‌ಐ ಆಸ್ಪತ್ರೆ ಕಟ್ಟಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಅಭಿವೃದ್ಧಿಯ ರೂವಾರಿ ಎನಿಸಿಕೊಂಡಿದ್ದಾರೆ. ಶಾಶ್ವತವಾಗಿ ಜನಪರ ಯೋಜನೆಗಳನ್ನು ಜಾರಿಗೊಳಿಸಿದ ಜನಪರ ನಾಯಕ ಆಗಿದ್ದಾರೆ. ಅಂಥವರ ಬಗ್ಗೆ ಇಲ್ಲಸಲ್ಲದ್ದು ಮಾತನಾಡಿರುವುದು ಸರಿಯಲ್ಲ ಎಂದಿದ್ದಾರೆ.

ಬಿಜೆಪಿ ನಾಯಕರು ಕಲ್ಯಾಣ ಕರ್ನಾಟಕ ಭಾಗದ ವಿರೋಧಿಗಳು ಆಗಿದ್ದಾರೆ. ಅಭಿವೃದ್ಧಿಗೆ ಅವರ ಕೊಡುಗೆ ಶೂನ್ಯವಾಗಿದೆ. ಹೀಗಾಗಿಯೇ ಜನರಿಂದ ಅನುಕಂಪ ಗಿಟ್ಟಿಸಿಕೊಳ್ಳಲು ಸುಳ್ಳಿನ ರಾಜಕೀಯ ಮಾಡುತ್ತಿದ್ದಾರೆ. ಇದಕ್ಕೆ ಮುಂದಿನ ದಿನಗಳಲ್ಲಿ ಅವರೇ ಭಾರಿ ಪ್ರಮಾಣದಲ್ಲಿ ಬೆಲೆ ತೆತ್ತಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು