ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೀಘ್ರ ಪರಿಹಾರ ಧನ ವಿತರಿಸಲು ಡಿಸಿ ಸೂಚನೆ

ಮೂರು ಪ್ರಕರಣಗಳಲ್ಲಿ ಪರಿಹಾರ ಧನ ವಿತರಿಸಲು ಸಮಿತಿಯ ಒಪ್ಪಿಗೆ
Last Updated 21 ನವೆಂಬರ್ 2020, 16:24 IST
ಅಕ್ಷರ ಗಾತ್ರ

ಯಾದಗಿರಿ: ರೈತ ಆತ್ಮಹತ್ಯೆ ಪ್ರಕರಣಗಳ ಪರಿಶೀಲನೆ ನಡೆಸಿ ಸಂಬಂಧಿಸಿದವರ ಕುಟುಂಬದ ಸದಸ್ಯರಿಗೆ ಶೀಘ್ರವಾಗಿ ಪರಿಹಾರದ ಮೊತ್ತವನ್ನು ಪಾವತಿಸುವಂತೆ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್., ಅವರು ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ರೈತ ಆತ್ಮಹತ್ಯೆ ಪ್ರಕರಣಗಳ ಪರಿಹಾರ ನೀಡಲು ಅನುಮತಿ ನೀಡುವ ಸಮಿತಿಯಲ್ಲಿ ಮಾತನಾಡಿದರು.

ರೈತ ಆತ್ಮಹತ್ಯೆ ಮಾಡಿಕೊಂಡು ಸಾವಿಗೀಡಾದ ಕಾರಣ, ಮರಣೋತ್ತರ ವರದಿ, ಎಫ್‍ಎಸ್‍ಎಲ್ ವರದಿ, ಅವರು ಬ್ಯಾಂಕುಗಳಲ್ಲಿ ಮಾಡಿಕೊಂಡ ಸಾಲದ ವಿವರಗಳು ಸೇರಿದಂತೆ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳ ಅನುಸಾರ ವರದಿ ಸಂಗ್ರಹಿಸಿ ನೈಜ ಕಾರಣವನ್ನು ಪತ್ತೆ ಹಚ್ಚಬೇಕು. ಸಾಲದಿಂದ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಕೂಡಲೇ ಪರಿಹಾರ ಧನ ವಿತರಿಸಬೇಕು ಎಂದು ಹೇಳಿದರು.

ರೈತ ಆತ್ಮಹತ್ಯೆ ಪ್ರಕರಣಗಳಲ್ಲಿ ಮೊದಲು ಉಪವಿಭಾಗಾಧಿಕಾರಿ ಅಧ್ಯಕ್ಷತೆಯಲ್ಲಿರುವ ಸಮಿತಿಯಲ್ಲಿ ವರದಿಗಳನ್ನು ಪರಿಶೀಲಿಸಬೇಕು. ಪರಿಹಾರ ಧನ ವಿತರಣೆ ಕುರಿತಂತೆ ಸಂಪೂರ್ಣ ಮಾಹಿತಿ ಸಲ್ಲಿಸಬೇಕು. ಅಲ್ಲಿ ಕ್ಲಿಷ್ಟವಾಗುವ ಪ್ರಕರಣಗಳನ್ನು ಜಿಲ್ಲಾಧಿಕಾರಿ ಅಧ್ಯಕ್ಷತೆಯ ಸಮಿತಿ ಮುಂದೆ ಹಾಜರು ಪಡಿಸಬೇಕು ಎಂದು ನಿರ್ದೇಶನ ನೀಡಿದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ದೇವಿಕಾ ಆರ್‌., ಅವರು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ರೈತ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಗಳ ವಿವರ ನೀಡಿ, ಆತ್ಮಹತ್ಯೆಯ ಮೂರು ಪ್ರಕರಣಗಳಲ್ಲಿ ಪರಿಹಾರ ನೀಡುವ ಕುರಿತು ಜಿಲ್ಲಾಧಿಕಾರಿ ಅಧ್ಯಕ್ಷತೆಯ ಸಮಿತಿಗೆ ಮಂಡಿಸಲಾಗಿದೆ. ಉಳಿದಂತೆ ಉಪವಿಭಾಗಾಧಿಕಾರಿ ಅಧ್ಯಕ್ಷತೆ ಸಮಿತಿಯಲ್ಲಿ 5 ಪ್ರಕರಣಗಳು ಇತ್ಯರ್ಥವಾಗಿದ್ದು, ಅವರಿಗೆ ಪರಿಹಾರ ಧನವನ್ನು ವಿತರಿಸಲಾಗಿದೆ ಎಂದರು.

ಈ ವೇಳೆ ಜಿಲ್ಲಾಧಿಕಾರಿ ಮೂರು ಪ್ರಕರಣಗಳನ್ನು ಸಮಗ್ರವಾಗಿ ಪರಿಶೀಲಿಸಿ ಆತ್ಮಹತ್ಯೆ ಮಾಡಿಕೊಂಡ ಕುಟುಂಬದ ಸದಸ್ಯರಿಗೆ ಪರಿಹಾರ ಧನ ಮಂಜೂರು ಮಾಡಲು ಸಮ್ಮತಿ ನೀಡಿದರು.

ಉಪವಿಭಾಗಾಧಿಕಾರಿ ಶಂಕರಗೌಡ ಸೋಮನಾಳ, ಎಲ್ಲಾ ತಾಲ್ಲೂಕುಗಳ ಸಹಾಯಕ ನಿರ್ದೇಶಕರು, ಪೊಲೀಸ್ ಅಧಿಕಾರಿಗಳು ಸಭೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT