ಅ.24ಕ್ಕೆ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಆಚರಣೆ

7
ಪೂರ್ವ ಸಿದ್ಧತಾ ಸಭೆ: ಸಿದ್ಧತೆ ನಡೆಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್ ಸಲಹೆ

ಅ.24ಕ್ಕೆ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಆಚರಣೆ

Published:
Updated:
Deccan Herald

ಯಾದಗಿರಿ: ಜಿಲ್ಲಾಡಳಿತದ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಅ.24 ರಂದು ಬೆಳಿಗ್ಗೆ11ಕ್ಕೆ ನಗರದ ಮಹರ್ಷಿ ವಾಲ್ಮೀಕಿ ಭವನದಲ್ಲಿ ಅದ್ಧೂರಿಯಿಂದ ಆಚರಿಸಲು ಸಿದ್ಧತೆ ನಡೆಸಬೇಕಿದೆ’ ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಅಂದು ಜಿಲ್ಲೆಯಲ್ಲಿನ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲಾ-ಕಾಲೇಜುಗಳಲ್ಲಿಯೂ ಸಹ ಶ್ರದ್ಧಾ, ಭಕ್ತಿಯೊಂದಿಗೆ ಮಹರ್ಷಿ ವಾಲ್ಮೀಕಿಯವರ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಬೇಕು’ ಎಂದು ಸೂಚಿಸಿದರು.

ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಪದವಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳನ್ನು ಸನ್ಮಾನಿಸಲು ಮತ್ತು ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ಏರ್ಪಡಿಸಿ ವಿಜೇತರ ಪಟ್ಟಿ ಸಲ್ಲಿಸುವಂತೆ ಡಿಡಿಪಿಯು ಮತ್ತು ಡಿಡಿಪಿಐ ಅವರಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಗಿರಿಜನ ಉಪಯೋಜನೆ ಅನುದಾನವನ್ನು ಖರ್ಚು ಮಾಡುವ ಎಲ್ಲಾ ಇಲಾಖೆಗಳು ಫಲಾನುಭವಿಗಳ ವೈಯಕ್ತಿಕ ಸೌಲಭ್ಯಗಳ ಚೆಕ್‌ಗಳನ್ನು ಸಿದ್ಧಪಡಿಸಿ ಅದರ ಪಟ್ಟಿ ನೀಡುವ ಜತೆಗೆ ಫಲಾನುಭವಿಗಳನ್ನು ಕಾರ್ಯಕ್ರಮಕ್ಕೆ ಕರೆತರುವ ವ್ಯವಸ್ಥೆ ಮಾಡಬೇಕು. ರಸ್ತೆ ಸ್ವಚ್ಛತೆ ಮತ್ತು ವೇದಿಕೆ ಸಿದ್ಧತೆ ಬಗ್ಗೆ ನಗರಸಭೆ ಪೌರಾಯುಕ್ತರು ಕ್ರಮಕೈಗೊಳ್ಳಬೇಕು. ಕಾರ್ಯಕ್ರಮಕ್ಕೂ ಮೊದಲು ತಹಶೀಲ್ದಾರ್ ಕಾರ್ಯಾಲಯದಿಂದ ಸುಭಾಶ್ಚಂದ್ರ ಬೋಸ್ ವೃತ್ತದ ಮಾರ್ಗವಾಗಿ ಮಹರ್ಷಿ ವಾಲ್ಮೀಕಿ ಭವನದವರೆಗೆ ನಡೆಸುವ ಭಾವಚಿತ್ರದ ಮೆರವಣಿಗೆಗೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಟ್ರ್ಯಾಕ್ಟರ್ ವ್ಯವಸ್ಥೆ ಮಾಡಬೇಕು. ಕಲಾತಂಡಗಳ ವ್ಯವಸ್ಥೆಯನ್ನು ಮಾಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ಅವರಿಗೆ ಸೂಚಿಸಲಾಯಿತು.

ವಾಲ್ಮೀಕಿ ಸಮಾಜದ ನಾಲ್ವರು ಹಿರಿಯ ಮುಖಂಡರನ್ನು ಸನ್ಮಾನಿಸಲು ಮತ್ತು ಮಹರ್ಷಿ ವಾಲ್ಮೀಕಿಯವರ ಬಗ್ಗೆ ಉಪನ್ಯಾಸ ನೀಡಲು ನುರಿತ ಉಪನ್ಯಾಸಕರ ಹೆಸರುಗಳನ್ನು ನೀಡುವಂತೆ ಜಿಲ್ಲಾ ವಾಲ್ಮೀಕಿ ಸಂಘದ ಸದಸ್ಯರಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್‌ ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಬಿಗಿಭದ್ರತೆ ಒದಗಿಸುವಂತೆ ಜಿಲ್ಲಾ ಪೊಲೀಸ್ ಇಲಾಖೆಗೆ ಸೂಚಿಸಲಾಯಿತು. ಕಾರ್ಯಕ್ರಮದ ನೋಡಲ್ ಅಧಿಕಾರಿಗಳನ್ನಾಗಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಎಂ.ಎಸ್.ಅಲ್ಲಾಬಕಷ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರನ್ನು ನೇಮಿಸಲಾಯಿತು.

ಈ ಬಾರಿ ಅ. 7ರಿಂದ ಆರಂಭವಾಗುವ ದಸರಾ ರಜೆ ಅ.21ಕ್ಕೆ ಮುಗಿಯುವುದರಿಂದ ಶಾಲಾ-ಕಾಲೇಜುಗಳಲ್ಲಿ ಜಯಂತಿ ಆಚರಣೆಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶ್ರೀಶೈಲ್ ಬಿರಾದಾರ ಸಭೆಯ ಗಮನಕ್ಕೆ ತಂದರು.

ಸರ್ಕಾರಿ ಸಭೆ-ಸಮಾರಂಭಗಳನ್ನು ಖಾಸಗಿ ಸಭಾಂಗಣದಲ್ಲಿ ಹಮ್ಮಿಕೊಳ್ಳುವ ಬದಲುಮಹರ್ಷಿ ವಾಲ್ಮೀಕಿ ಭವನದಲ್ಲಿ ಆಯೋಜಿಸಬೇಕು. ಇದರಿಂದ ಭವನದ ನಿರ್ವಹಣೆ ಮತ್ತು ಅಭಿವೃದ್ಧಿಗೆ ನೆರವಾಗುತ್ತದೆ ಎಂದು ಸಮಾಜದ ಮುಖಂಡರು ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗೆ ಕೋರಿದರು.

ಡಿವೈಎಸ್‌ಪಿ ಶರಣಪ್ಪ, ಎಇಇ ಬಂಡೆಪ್ಪ ಆಕಳ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಬಸನಗೌಡ ಪಾಟೀಲ್ ಆಲ್ದಾಳ, ನಗರಸಭೆ ವ್ಯವಸ್ಥಾಪಕ ಮಲ್ಲಿಕಾರ್ಜುನ, ಸಮಾಜದ ಮುಖಂಡರಾದ ಭೀಮರಾಯ ಠಾಣಗುಂದಿ, ಸುದರ್ಶನ ನಾಯಕ, ಸಿದ್ದಲಿಂಗಪ್ಪ ನಾಯಕ, ಅಯ್ಯಣ್ಣ ನಾಯಕ ಠಾಣಗುಂದಿ, ಟಿ.ಎನ್.ಭೀಮುನಾಯಕ, ನಗರಸಭೆ ಸದಸ್ಯ ಹಣಮಂತಪ್ಪ ನಾಯಕ, ಶರಣಪ್ಪ ಜಾಕನಳ್ಳಿ, ಸಾಬಣ್ಣ ತಳಕ ಸಭೆಯಲ್ಲಿ ಇದ್ದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !