ಶುಕ್ರವಾರ, ಮಾರ್ಚ್ 31, 2023
25 °C
ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡಲು ಅಧಿಕಾರಿಗಳಿಗೆ ಸೂಚನೆ

ಜಿಲ್ಲಾಸ್ಪತ್ರೆಗೆ ಡಿ.ಸಿ ಅನಿರೀಕ್ಷಿತ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ನಗರದ ಹಳೆಯ ಜಿಲ್ಲಾ ಆಸ್ಪತ್ರೆಗೆ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್. ಅವರು ಶನಿವಾರ ಅನಿರೀಕ್ಷಿತವಾಗಿ ಭೇಟಿ ನೀಡಿದರು.

ಹಳೆಯ ಜಿಲ್ಲಾ ಆಸ್ಪತ್ರೆಯಲ್ಲಿ ಜಿಲ್ಲಾ ಸಾಂಕ್ರಾಮಿಕ ರೋಗಗಳ ಚಿಕಿತ್ಸಾಲಯ, ಹೆರಿಗೆ ಕೋಣೆ, ಮಕ್ಕಳ ಪೌಷ್ಟಿಕಾಂಶ ಮತ್ತು ಪುನಶ್ಚೇತನ ವಿಭಾಗ, ಟುಬೆಕ್ಟೊಮಿ ವಾರ್ಡ್, ಮಕ್ಕಳ ತೀವ್ರ ನಿಗಾ ಘಟಕ ಹಾಗೂ ರಕ್ತ ಸಂಗ್ರಹ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯ ಕುರಿತು ವೀಕ್ಷಣೆ ಮಾಡಿದರು. ಆಸ್ಪತ್ರೆಯ ಮುಂಭಾಗದ ಆವರಣದಲ್ಲಿ ಹಾಗೂ ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡುವಂತೆ ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದ ಅವರು, ಆಸ್ಪತ್ರೆಗೆ ಬರುವ ಸಾರ್ವಜನಿಕರಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ತಿಳಿಸಬೇಕು ಎಂದು ಹೇಳಿದರು.

ಹಳೆಯ ಜಿಲ್ಲಾ ಆಸ್ಪತ್ರೆಗೆ ಸೇರಿದ ಹಳೆಯ ನಿರುಪಯುಕ್ತ ವಾಹನಗಳನ್ನು ಸರ್ಕಾರದ ನಿಯಮಾವಳಿಯ ಪ್ರಕಾರ ಹರಾಜು ಪ್ರಕ್ರಿಯೆಯ ಮೂಲಕ ವಿಲೇವಾರಿ ಮಾಡುವಂತೆ ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ ತಿಳಿಸಿದರು.

ಸಂಚಾರಿ ಜ್ವರ ತಪಾಸಣಾ ವಾಹನ: ಜಿಲ್ಲೆಯಲ್ಲಿ ಕೋವಿಡ್-19 ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ಇದನ್ನು ತಡೆಗಟ್ಟುವುದಕ್ಕಾಗಿ ಜಿಲ್ಲೆಯಲ್ಲಿ 15 ಸಂಚಾರಿ ಜ್ವರ ತಪಾಸಣಾ ವಾಹನ ಹಾಗೂ ಗಂಟಲು ದ್ರವ ಮಾದರಿ ಸಂಗ್ರಹ ತಂಡಗಳನ್ನು ರಚಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು ಎಂದರು.

ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಸಂಚಾರಿ ಜ್ವರ ತಪಾಸಣಾ ಕೇಂದ್ರ ಹಾಗೂ ಗಂಟಲು ದ್ರವ ಮಾದರಿ ಸಂಗ್ರಹ ತಂಡಗಳನ್ನು ಯಾದಗಿರಿ ತಾಲ್ಲೂಕಿನಲ್ಲಿ 6, ಶಹಾಪುರ ತಾಲ್ಲೂಕಿನಲ್ಲಿ 4 ಹಾಗೂ ಸುರಪುರ ತಾಲ್ಲೂಕಿನಲ್ಲಿ 5 ಸೇರಿದಂತೆ ಒಟ್ಟು 15 ತಂಡಗಳನ್ನು ರಚಿಸಲಾಗಿದೆ. ಪ್ರತಿ ತಂಡದಲ್ಲಿ ಒಬ್ಬರು ಲ್ಯಾಬ್ ಟೆಕ್ನಿಷಿಯನ್, ಒಬ್ಬರು ಡಾಟಾ ಎಂಟ್ರಿ ಆಪರೇಟರ್ ಇರುತ್ತಾರೆ ಎಂದು ಮಾಹಿತಿ ನೀಡಿದ್ದಾರೆ.

ಈ ಹೆಚ್ಚುವರಿ 15 ತಂಡಗಳು ಆಯಾ ತಾಲ್ಲೂಕುಗಳಲ್ಲಿ ಕಾರ್ಯ ನಿರ್ವಹಿಸುತ್ತವೆ. ಸಾರ್ವಜನಿಕರು ಕೋವಿಡ್-19 ರೋಗಿಯ ಪ್ರಾಥಮಿಕ ಸಂಪರ್ಕದಲ್ಲಿರುವವರು, ದುರ್ಬಲ ವರ್ಗದವರು ಮತ್ತು ರೋಗ ಲಕ್ಷಣಗಳು ಕಂಡು ಬಂದವರು, ಧಾರಕ ವಲಯದಲ್ಲಿರುವವರು ತಮ್ಮ ಗಂಟಲು ದ್ರವ ಮಾದರಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಇದರಿಂದ ರೋಗವನ್ನು ಮೊದಲ ಹಂತದಲ್ಲಿ ಪತ್ತೆ ಹಚ್ಚಲು ಅನುಕೂಲವಾಗುತ್ತದೆ. ಮುಂದಿನ ದಿನಗಳಲ್ಲಿ ರೋಗವು ಹರಡದಂತೆ ತಡೆಗಟ್ಟಲು ಸಹಾಕಾರಿಯಾಗುತ್ತದೆ. ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಗಂಟಲುದ್ರವ ಮಾದರಿ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ಪ್ರಭಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಭಗವಂತ ಅನವಾರ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ನಾರಾಯಣಪ್ಪ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿ ಇದ್ದರು.

***

ಹಳೆ ಜಿಲ್ಲಾ ಆಸ್ಪತ್ರೆಯಲ್ಲಿನ ಸಣ್ಣಪುಟ್ಟ ದುರಸ್ತಿಗೆ ಕ್ರಮ ವಹಿಸಬೇಕು. ಸಾರ್ವಜನಿಕರಿಗೆ ಕುಡಿಯುವ ನೀರಿನ ಸೌಕರ್ಯವನ್ನು ಸಮರ್ಪಕವಾಗಿ ಒದಗಿಸಬೇಕು

ಡಾ. ರಾಗಪ್ರಿಯಾ ಆರ್., ಜಿಲ್ಲಾಧಿಕಾರಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು