ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಡಗೇರಾ: ಮರಳು ಅಕ್ರಮ ಸಾಗಣೆ ತಡೆಗೆ ಒತ್ತಾಯ

Published 24 ಜೂನ್ 2024, 15:18 IST
Last Updated 24 ಜೂನ್ 2024, 15:18 IST
ಅಕ್ಷರ ಗಾತ್ರ

ವಡಗೇರಾ: ‘ತಾಲ್ಲೂಕಿನ ಕುಮನೂರು ಗ್ರಾಮದ ಬಳಿಯ ಭೀಮಾ ನದಿ ತಟದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಮರ ಳನ್ನು ಅಕ್ರಮವಾಗಿ ಸಂಗ್ರಹಿಸಲಾಗಿದೆ. ಕೂಡಲೇ ಜಪ್ತಿ ಮಾಡಿ ಮರಳು ಅಕ್ರಮ ದಂಧೆಯಲ್ಲಿ ನಿರತರಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಟಿ.ಎನ್.ಭೀಮು ನಾಯಕ ಆಗ್ರಹಿಸಿದ್ದಾರೆ.

‘ಅಕ್ರಮ ಮರಳುಗಾರಿಕೆಯಿಂದ ಅಂತರ್ಜಲ ಮಟ್ಟ ಕುಸಿಯುತ್ತಿದೆ. ಜನಜಾನುವಾರುಗಳಿಗೆ ನೀರಿನ ಸಮಸ್ಯೆಯಾಗುತ್ತಿದೆ. ಸರ್ಕಾರಕ್ಕೆ ಲಕ್ಷಾಂತರ ರೂಪಾಯಿ ರಾಜಸ್ವ ನಷ್ಟವಾಗುತ್ತಿದೆ’ ಎಂದು ತಿಳಿಸಿದ್ದಾರೆ.

‘ಭೀಮಾ ನದಿಯಲ್ಲಿ ಸುಮಾರು ಒಂದೂವರೆ ಕಿ.ಮೀ ದೂರದವರೆಗೂ ಮರಳು ಮಾಫಿಯಾದವರು ಅಕ್ರಮವಾಗಿ ರಸ್ತೆ ನಿರ್ಮಿಸಿದ್ದಾರೆ. ನದಿಯಲ್ಲಿ ಜೆಸಿಬಿ, ಟಿಪ್ಪರ್ ಹಾಗೂ ಟ್ರ್ಯಾಕ್ಟರ್‌ಗಳನ್ನು ಬಳಸಿಕೊಂಡು ಅಕ್ರಮವಾಗಿ ಮರಳು ಸಂಗ್ರಹಿಸಿ ಮಾರಾಟ ಮಾಡುತ್ತಿದ್ದಾರೆ’ ಎಂದು ದೂರಿದ್ದಾರೆ.

‘ದಿನದ 24 ಗಂಟೆ ದೊಡ್ಡ ದೊಡ್ಡ ಟಿಪ್ಪರ್‌ಗಳಲ್ಲಿ ಅಕ್ರಮವಾಗಿ ಮರಳು ಸಾಗಿಸಲಾಗುತ್ತಿದೆ. ಇದರಲ್ಲಿ ಯಾದಗಿರಿ ಶಾಸಕರ ಪುತ್ರ, ಪೊಲೀಸ್, ಕಂದಾಯ ಹಾಗೂ ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಜಿಲ್ಲಾಡಳಿತ ಮರಳು ಅಕ್ರಮವಾಗಿ ಸಾಗಿಸುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಅಕ್ರಮವಾಗಿ ಸಂಗ್ರಹಿಸಿದ ಮರಳು ಜಪ್ತಿ ಮಾಡಬೇಕು. ಒಂದು ವೇಳೆ ನಿರ್ಲಕ್ಷ್ಯ ವಹಿಸಿದರೆ ಮುಂಬರುವ ದಿನಗಳಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಕರವೇ ಗೌರವಾಧ್ಯಕ್ಷ ಸಂತೋಷ ನಿರ್ಮಲಕರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದು ನಾಯಕ ಹತ್ತಿಕುಣಿ, ಜಿಲ್ಲಾ ಯುವ ಘಟಕದ ಅದ್ಯಕ್ಷ ವಿಶ್ವರಾಧ್ಯ ದಿಮ್ಮೆ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT