ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮೊಟ್ಟೆ, ಬಾಳೆಹಣ್ಣು ವಿತರಣೆ

ಪೋಷಣ ಶಕ್ತಿ ನಿರ್ಮಾಣ ಕಾರ್ಯಕ್ರಮಕ್ಕೆ ಸಿಇಒ ಶಿಲ್ಪಾ ಶರ್ಮಾ ಚಾಲನೆ
Last Updated 2 ಡಿಸೆಂಬರ್ 2021, 5:17 IST
ಅಕ್ಷರ ಗಾತ್ರ

ಯಾದಗಿರಿ: ಮೊಟ್ಟೆ, ಹಾಲು, ಬಾಳೆಹಣ್ಣು ಸೇವನೆಯಿಂದ ಶಾಲಾ ಮಕ್ಕಳಲ್ಲಿ ಕಂಡುಬರುವ ಅಪೌಷ್ಟಿಕತೆ, ರಕ್ತಹೀನತೆ, ಬಹು ಪೋಷಕಾಂಶಗಳ ಕೊರತೆ ನಿವಾರಣೆ ಮಾಡಲು ಸಾಧ್ಯವಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.

ನಗರದ ಕೋಲಿವಾಡ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಕಾರ್ಯಕ್ರಮ ಹಾಗೂ ಅಕ್ಷರ ದಾಸೋಹ ಮಧ್ಯಾಹ್ನ ಉಪಾಹಾರ ಯೋಜನೆಯಡಿ ಹಮ್ಮಿಕೊಂಡ ಶಾಲಾ ಮಕ್ಕಳ ಉಪಾಹಾರ ಕಾರ್ಯಕ್ರಮ ವೀಕ್ಷಿಸಿ, ಮಾತನಾಡಿದರು.

ಅಪೌಷ್ಟಿಕತೆ ನಿವಾರಣೆಗಾಗಿ ಜಿಲ್ಲೆಯ ಎಲ್ಲಾ ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ 1 ರಿಂದ 8ನೇ ತರಗತಿಯ ಮಕ್ಕಳಿಗೆ ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಕಾರ್ಯಕ್ರಮ ಹಾಗೂ ಅಕ್ಷರದಾಸೋಹ ಮಧ್ಯಾಹ್ನ ಉಪಾಹಾರ ಯೋಜನೆಯಡಿ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಉಪಾಹಾರವಾಗಿ ಅನ್ನ ಸಾಂಬರ್‌ ಜೊತೆ ಪ್ರತಿ ಮಗುವಿಗೂ ಮೊಟ್ಟೆ ಹಾಗೂ ಬಾಳೆ ಹಣ್ಣು ವಿತರಿಸಲಾಗುತ್ತದೆ. ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು ಕೊಡಲಾಗುತ್ತದೆ ಎಂದರು.

ಮಕ್ಕಳು ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಿದ್ದರೆ ವಿದ್ಯಾಭ್ಯಾಸ ಮಾಡಲು ಸಾಧ್ಯವಾಗುತ್ತದೆ. ಶಾಲಾ ಮಕ್ಕಳ ಕಲಿಕಾ ಗುಣಮಟ್ಟ ಸುಧಾರಿಸುತ್ತದೆ. ಮಕ್ಕಳು ಭವಿಷ್ಯದ ಪ್ರಜ್ಞಾವಂತ ನಾಗರಿಕರಾಗಿ ಅಭಿವೃದ್ಧಿ ಹೊಂದುತ್ತಾರೆ. ಅಲ್ಲದೆ ಮಕ್ಕಳು ದೈಹಿಕ, ಮಾನಸಿಕವಾಗಿ ಸದೃಢರಾಗಿದ್ದರೆ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುತ್ತಾರೆ. ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಆಯೋಜಿಸುವ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೇಶದ ಕೀರ್ತಿ ಹೆಚ್ಚುತ್ತದೆ ಎಂದರು.

ಪೋಷಣ್ ಶಕ್ತಿ ನಿರ್ಮಾಣ ಅಡಿ ರಾಜ್ಯದ 7 ಜಿಲ್ಲೆಗಳು ಆಯ್ಕೆಯಾಗಿದ್ದು, ಧಾರವಾಡ ವಿಭಾಗದ ವಿಜಯಪುರ ಜಿಲ್ಲೆ, ಕಲ್ಯಾಣ ಕರ್ನಾಟಕ ಭಾಗದ ಆರು ಜಿಲ್ಲೆಗಳಲ್ಲಿ ಹೆಚ್ಚಿನ ಅಪೌಷ್ಟಿಕತೆ, ರಕ್ತಹೀನತೆ ಹಾಗೂ ಬಹುಪೋಷಕಾಂಶಗಳ ನ್ಯೂನ್ಯತೆ ಅಧಿಕವಾಗಿದ್ದು, ಇದರ ನಿವಾರಣೆಗಾಗಿ 2021-22ನೇ ಸಾಲಿನಲ್ಲಿ 1ರಿಂದ 8ನೇ ತರಗತಿಯ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆ ಬೆಯಿಸಿದ ಮೊಟ್ಟೆ ಹಾಗೂ ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆ ಹಣ್ಣು ವಿತರಿಸುವ ವಿನೂತನ ಕಾರ್ಯಕ್ರಮವಾಗಿದೆ ಎಂದು ಮಾಹಿತಿ ನೀಡಿದರು.

ಈ ವೇಳೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಶರಬೈ, ಡಿಡಿಪಿಐ ಶಾಂತಗೌಡ ಪಾಟೀಲ, ಸಹಾಯಕ ನಿರ್ದೇಶಕ (ಅಕ್ಷರ ದಾಸೋಹ) ಕನಕಪ್ಪ, ಕೋಲಿವಾಡ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯಗುರು ಭೀಮಾಶಂಕರ, ಸಿಆರ್‌ಪಿ ಗುಂಡುರಾವ್, ಪ್ರಥಮ ದರ್ಜೆ ಸಹಾಯಕ (ಅಕ್ಷರ ದಾಸೋಹ) ವಿಜಯಕುಮಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT