ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ: ಜಿಲ್ಲೆಯಲ್ಲಿ ಕೋವಿಡ್‌ ನಿಯಂತ್ರಿಸಲು ಟಾಸ್ಕ್ ಪೋರ್ಸ್ ಸಮಿತಿ ಸಭೆ

Last Updated 18 ಏಪ್ರಿಲ್ 2021, 5:15 IST
ಅಕ್ಷರ ಗಾತ್ರ

ಯಾದಗಿರಿ: ಕೊರೊನಾ ಸೋಂಕಿನ ವಿರುದ್ಧ ಹೋರಾಟದಲ್ಲಿ ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆ, ವಿವಿಧ ಇಲಾಖೆಯ ಅಧಿಕಾರಿಗಳು ಜಿಲ್ಲಾಡಳಿತದ ಜೊತೆ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಮನವಿ ಮಾಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶನಿವಾರ ಕೋವಿಡ್ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದರು.

ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಜಿಲ್ಲೆಯಲ್ಲಿ ಸುಮಾರು 500ಕ್ಕೂ ಹೆಚ್ಚು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕು ಹರಡುವಿಕೆ ನಿಯಂತ್ರಿಸಲು ಎಲ್ಲರ ಸಹಕಾರ ಅಗತ್ಯವಿದೆ ಎಂದು ತಿಳಿಸಿದ್ದಾರೆ.

ಆರೋಗ್ಯ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಜಿಲ್ಲೆಯ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾಗೆ ಹೆದರದೆ ಸಿಬ್ಬಂದಿ ರೋಗಿಗಳಿಗೆ ಚಿಕಿತ್ಸೆ ನೀಡಬೇಕೆಂದು ಹೇಳಿದರು.

ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಶೇ 50ರಷ್ಟು ಹಾಸಿಗೆಗಳನ್ನು ಕೋವಿಡ್ ರೋಗಿಗಳಿಗೆ ಮೀಸಲಿಡುವಂತೆ ಸರ್ಕಾರ ಆದೇಶಿಸಿರುವುದರಿಂದ ರೋಗಿಗೆ ಸೂಕ್ತ ಚಿಕಿತ್ಸೆ ನೀಡಲು ಆಯಾ ಆಸ್ಪತ್ರೆ ಮುಖ್ಯಸ್ಥರು ತಮ್ಮ ಸಿಬ್ಬಂದಿಯನ್ನು ಪೂರ್ಣ ಪ್ರಮಾಣದಲ್ಲಿ ಕರ್ತವ್ಯಕ್ಕೆ ಹಾಜರಾಗುವಂತೆ ನೋಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಸೂಚಿಸಿದರು.

ಚೆಕ್ ಪೋಸ್ಟ್ ಸಂಖ್ಯೆ ಹೆಚ್ಚಿಸಿ: ರಾಷ್ಟ್ರೀಯ ಹೆದ್ದಾರಿ ಹಾಗೂ ಇತರೆ ಹೆದ್ದಾರಿಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ಹೆಚ್ಚು ಸ್ಥಾಪಿಸಿ, ಪೊಲೀಸ್ ಸಿಬ್ಬಂದಿ, ವೈದ್ಯರು ಹಾಗೂ ಗೃಹ ರಕ್ಷಕ ದಳದ ಸಿಬ್ಬಂದಿಯನ್ನು ನಿಯೋಜಿಸಿ ದಿನದ 24 ಗಂಟೆಯೂ ಚೆಕ್‌ಪೋಸ್ಟ್‌ಗಳಲ್ಲಿ ಕರ್ತವ್ಯ ನಿರ್ವಹಿಸುವಂತೆ ನೋಡಿಕೊಳ್ಳಬೇಕು. ಪ್ರತಿ ವಾಹನವನ್ನು ತಡೆದು ಎಲ್ಲಿಂದ ಬರುತ್ತಿದ್ದಾರೆ. ಜ್ವರ, ಕೆಮ್ಮು, ನೆಗಡಿ ಸೇರಿದಂತೆ ರೋಗ ಲಕ್ಷಣಗಳು ಇವೆಯಾ ಎನ್ನುವ ಮಾಹಿತಿ ಪಡೆಯಬೇಕು ಎಂದು ಸೂಚಿಸಿದರು.

ವಿವಿಧ ಸಮಿತಿಗಳ ನೇಮಕ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕಾಗಿ ವಿವಿಧ ಸಮಿತಿಗಳನ್ನು ನೇಮಕ ಮಾಡಲಾಯಿತು. ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಪತ್ತೆ ಹಚ್ಚುವಿಕೆ, ಹೋಂ ಕ್ವಾರಂಟೈನ್, ಕ್ವಾರಂಟೈನ್ ಆ್ಯಪ್ ನಿರ್ವಹಣೆ ಸೇರಿದಂತೆ ಇತರೆ ತಂಡಗಳನ್ನು ಮಾಡಿ ಅಧಿಕಾರಿಗಳಿಗೆ ಜವಾಬ್ದಾರಿ ನೀಡಲಾಯಿತು.

ತಾಲೂಕು ಮಟ್ಟದ ತಹಶೀಲ್ದಾರ್ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಗ್ರಾಮ ಮಟ್ಟದಲ್ಲಿ ಪಿಡಿಒ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಸಮಿತಿಯಲ್ಲಿ ಕಾರ್ಯನಿರ್ವಹಿಸುವರು ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಉಪವಿಭಾಗಾಧಿಕಾರಿ ಶಂಕರಗೌಡ ಸೋಮನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಇಂದುಮತಿ ಕಾಮಶೆಟ್ಟಿ, ಅಬಕಾರಿ ಇಲಾಖೆಯ ಅಧಿಕಾರಿ ಶಿವನಗೌಡ ಪಾಟೀಲ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ನಾಯಕ, ಆರ್.ಸಿ.ಎಚ್ ಡಾ.ಸೂರ್ಯಪ್ರಕಾಶ್ ಕಂದಕೂರ, ಕ್ಷಯರೋಗ ನಿರ್ಮೂಲನ ಅಧಿಕಾರಿ ಡಾ.ಲಕ್ಷ್ಮಿಕಾಂತ್, ಡಾ.ಸಾಜಿದ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ, ಯುವಜನ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜು ಸೇರಿದಂತೆ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT