ಮಂಗಳವಾರ, ಮೇ 17, 2022
23 °C

ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ‘ಕ್ರೀಡೆಯಿಂದ ದೈಹಿಕ ಜಡತ್ವ ದೂರವಾಗಿ ಮನಸ್ಸಿಗೆ ಉಲ್ಲಾಸವಾಗುತ್ತದೆ’ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್‌ ಅಭಿಪ್ರಾಯಪಟ್ಟರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಸಹಯೋಗದಲ್ಲಿ ಸರ್ಕಾರಿ ನೌಕರರ ಎರಡು ದಿನಗಳ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಗುರುವಾರ ಚಾಲನೆ ನೀಡಿ ಮಾತನಾಡಿದರು.

‘ವರ್ಷಪೂರ್ತಿ ಒತ್ತಡದಿಂದ ಕೆಲಸ ಮಾಡುವ ನೌಕರರಿಗೆ ಕ್ರೀಡಾಕೂಟ ಪುನಃಶ್ಚೇತನ ಕಾರ್ಯಕ್ರಮದಂತೆ ಇದ್ದು, ಕ್ರೀಡೆಗಳಲ್ಲಿ ಗೆಲ್ಲುವುದು ಮುಖ್ಯವಲ್ಲ. ಭಾಗವಹಿಸುವಿಕೆ ಮುಖ್ಯ’ ಎಂದು ಸಲಹೆ ನೀಡಿದರು.

‘ನೌಕರರಿಗೆ ಸಾಂಸ್ಕೃತಿಕ  ಕಾರ್ಯಕ್ರಮ ಆಯೋಜಿಸಿದ್ದು ಅದರಲ್ಲೂ ನೌಕರರು ಉತ್ಸಾಹದಿಂದ ಪಾಲ್ಗೊಳ್ಳಬೇಕು. ದಿನನಿತ್ಯದ ಕರ್ತವ್ಯದಿಂದ ಹೆಚ್ಚಿನ ಒತ್ತಡಕ್ಕೆ ಒಳಗಾಗುವುದು ಸಹಜ. ಎಲ್ಲರೂ ಕೂಡಿ ಆಟ ಆಡಿ, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರೆ ಮನಸ್ಸು ಪುನಃಶ್ಚೇತನಗೊಳ್ಳುತ್ತದೆ’ ಎಂದರು.

‘ನೌಕರರು ಕ್ರೀಡಾಕೂಟಕ್ಕೆ ಹೆಚ್ಚಿನ ಒತ್ತು ನೀಡುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಕ್ರೀಡಾಪಟುಗಳು ಕ್ರೀಡಾ ಮನೋಭಾವನೆ ಬೆಳೆಸಿಕೊಂಡು ಕ್ರೀಡಾ ಕೂಟದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು’ ಎಂದರು.

‘ಇಲಾಖೆಗಳ ಕಾರ್ಯ ನಿರ್ವಹಿಸುತ್ತಿರುವ ನೌಕರರು ಹಲವು ಒತ್ತಡಗಳಿಂದ ಹೊರ ಬಂದು ನೆಮ್ಮದಿಯುಳ್ಳ ಜೀವನ ನಡೆಸಬೇಕಾದರೆ ಕ್ರೀಡೆ ಅತಿ ಅವಶ್ಯಕ’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಸನಗೌಡ ಎಸ್.ಪಾಟೀಲ ಯಡಿಯಾಪುರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಮಾತನಾಡಿದರು.

ವಿವಿಧ ಕ್ರೀಡಾಕೂಟ ಆಯೋಜನೆ:

ಅಥ್ಲೆಟಿಕ್ಸ್, ಕುಸ್ತಿ, ಕಬಡ್ಡಿ, ಕ್ರಿಕೆಟ್, ಪುಟ್‍ಬಾಲ್, ವಾಲಿಬಾಲ್, ಹಾಕಿ, ಟೇಬಲ್ ಟೆನ್ನಿಸ್, ಟೆನ್ನಿಸ್, ಥ್ರೋಬಾಲ್ ಸೇರಿದಂತೆ ಒಳಾಂಗಣ ಕ್ರೀಡೆಗಳಾದ ಕೇರಂ, ಚೆಸ್, ಬ್ಯಾಡ್ಮಿಂಟನ್, ಭಾರ ಎತ್ತುವುದು ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಸರ್ಕಾರಿ ನೌಕರರು ಈ ಕ್ರೀಡೆಗಳಲ್ಲಿ ಉತ್ಸಾಹದಿಂದ ಭಾಗವಹಿಸಿದರು. ಹೆಚ್ಚಿನ ಸಂಖ್ಯೆಯಲ್ಲಿ ಪುರುಷರು ಕ್ರೀಡೆಗಳಲ್ಲಿ ಪಾಲ್ಗೊಂಡಿದ್ದರು.

ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಗಿರಿಜಮ್ಮ ರೋಟ್ನಡಗಿ, ನಗರಸಭೆ ಅಧ್ಯಕ್ಷ ವಿಲಾಸ ಬಿ. ಪಾಟೀಲ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಚಂಡ್ರಿಕಿ, ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಶಿವಲಿಂಗಪ್ಪ ಪುಟಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನವಣೆ, ಉಪವಿಭಾಗಾಧಿಕಾರಿ ಶಂಕರಗೌಡ ಸೋಮನಾಳ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಹಿಪಾಲರಡ್ಡಿ ಮಾಲಿ ಪಾಟೀಲ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜು ಬಾವಿಹಳ್ಳಿ ಇದ್ದರು.

***

ಸರ್ಕಾರಿ ನೌಕರರಲ್ಲಿ ಅಡಗಿರುವ ಪ್ರತಿಭೆ ಪ್ರದರ್ಶಿಸಲು ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆಗಳು ಸೂಕ್ತ ವೇದಿಕೆಯಾಗಿವೆ. ನೌಕರರು ಇದನ್ನು ಸದುಪಯೋಗ ಮಾಡಿಕೊಳ್ಳಿ

- ಡಾ.ರಾಗಪ್ರಿಯಾ ಆರ್, ಜಿಲ್ಲಾಧಿಕಾರಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು