ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ। ನಿಗದಿತ ಅನುದಾನ ಬಳಸಲು ಜಿಲ್ಲಾ ಉಸ್ತುವಾರಿ ಸಚಿವ ಸೂಚನೆ

ಅಧಿಕಾರಿಗಳೊಂದಿಗೆ ಸಚಿವ ಚವಾಣ್‌ ಸಭೆ; ಬೇಸಿಗೆಯಲ್ಲಿ ನೀರಿನ ಕೊರತೆಯಾಗದಿರಲಿ
Last Updated 6 ಮಾರ್ಚ್ 2023, 16:37 IST
ಅಕ್ಷರ ಗಾತ್ರ

ಯಾದಗಿರಿ: ಮಾರ್ಚ್ ಅಂತ್ಯದೊಳಗೆ ನಿಗದಿತ ಅನುದಾನ ಬಳಸಬೇಕು ಹಾಗೂ ಕಾಮಗಾರಿಗಳ ಪ್ರಗತಿ ಸಾಧಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಪ್ರಭು ಚವಾಣ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಿ.ಪಂ. ಸಭಾಂಗಣದಲ್ಲಿ ಸೋಮವಾರ ನಡೆದ ಬೇಸಿಗೆಯಲ್ಲಿ ಜಿಲ್ಲೆಯಾದ್ಯಂತ ನೀರು ನಿರ್ವಹಣೆ ಹಾಗೂ ಸರ್ಕಾರಿ ಯೋಜನೆಗಳ ಫಲಾನುಭವಿಗಳ ಸಮ್ಮೇಳನ ಕಾರ್ಯಕ್ರಮ ಹಮ್ಮಿಕೊಳ್ಳುವ ಕುರಿತು ನಡೆಸಿದ ಸಭೆಯಲ್ಲಿ ಅವರು ಮಾತನಾಡಿದರು.

ಪಂಚಾಯಿತಿ, ಎಂಜಿನಿಯರಿಂಗ್ ವಿಭಾಗ, ಲೋಕೋಪಯೋಗಿ ಇಲಾಖೆ, ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ, ನಗರಸಭೆ ವ್ಯಾಪ್ತಿಯ ಕಾಮಗಾರಿಗಳನ್ನು ಮಾರ್ಚ್ ಅಂತ್ಯದವರೆಗೆ ಪೂರ್ಣಗೊಳಿಸಿ, ಮಾಹಿತಿ ನೀಡಬೇಕು. ಅನುದಾನವನ್ನು ಸಮಪರ್ಕವಾಗಿ ಬಳಸಿಕೊಂಡು ಆಯಾ ಇಲಾಖೆಯಲ್ಲಿ ಪ್ರಗತಿ ಸಾಧಿಸಬೇಕು. ಈ ಮೂಲಕ ಸರ್ಕಾರ ಯೋಜನೆಗಳನ್ನು ಜನರಿಗೆ ತಲು‍ಪಿಸಬೇಕು ಎಂದು ಸೂಚಿಸಿದರು.

ಕೃಷಿ, ಕಾರ್ಮಿಕ ಇಲಾಖೆ, ತೋಟಗಾರಿಕೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ಅಧಿಕಾರಿಗಳು ಯೋಜನಾ ಬದ್ಧವಾಗಿ ಕಾರ್ಯನಿರ್ವಹಿಸಬೇಕು. ಆರೋಗ್ಯ ಇಲಾಖೆ ವ್ಯಾಪ್ತಿಯಲ್ಲಿ ಗ್ರಾಮವಾರು ಜನರಿಗೆ ಯಾವುದೇ ರೀತಿಯಲ್ಲಿ ಔಷಧಿ ಮತ್ತು ಸೇವೆಯಲ್ಲಿ ಕೊರತೆಯಾದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.

ಕುಡಿಯುವ ನೀರಿನ ಸಮಸ್ಯೆಯಾಗದಿರಲಿ: ಜಿಲ್ಲೆಯ ವಿವಿಧ ತಾಲ್ಲೂಕು ಹಾಗೂ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗಬಾರದು. ವಿಶೇಷವಾಗಿ ನಗರಸಭೆ ಸಂಸ್ಥೆ ಮತ್ತು ಗ್ರಾ.ಪಂ. ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ವಿವಿಧ ತಾಲ್ಲೂಕು ಹಾಗೂ ಗ್ರಾಮವಾರು ಕುಡಿಯುವ ನೀರಿನ ಸಮಸ್ಯೆಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಬೇಕು. ಗ್ರಾಮೀಣ ಕುಡಿಯುವ ನೀರು ಸರಬರಾಜು ಅಧಿಕಾರಿಗಳು, ತಹಶೀಲ್ದಾರ್‌ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಜನತೆಗೆ ನೀರಿನ ಸಮಸ್ಯೆಯಾಗದಂತೆ ಕ್ರಮಕೈಗೊಳ್ಳಬೇಕು. ಜಲಜೀವನ ಮಿಷನ್‌ ಯೋಜನೆಯಡಿ ಪ್ರಗತಿಯಲ್ಲಿರುವ ಕಾಮಗಾರಿಗಳು ಶೀಘ್ರ ಪೂರ್ಣಗೊಳಿಸಲು ಸೂಚಿಸಿದ ಅವರು, 4 ಹಂತಗಳಲ್ಲಿ ಕೈಗೊಂಡ ಕಾಮಗಾರಿ ಪ್ರಗತಿ ವಿವರ ಸಲ್ಲಿಸಬೇಕು. ನೀರಿನ ಗಂಭೀರ ಸಮಸ್ಯೆಗಳ ಬಗ್ಗೆ ತಕ್ಷಣ ಸ್ಪಂದಿಸಬೇಕು ಎಂದು ಸೂಚಿಸಿದರು.

ಜಿಲ್ಲಾಧಿಕಾರಿ ಸ್ನೇಹಲ್ ಆರ್. ಮಾತನಾಡಿ, ಈಗಾಗಲೇ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ನೀರಿನ ಸಮಸ್ಯೆ ನಿರ್ವಹಣೆಗೆ, ಕುಡಿಯುವ ನೀರಿನ ಮೂಲಗಳ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಅದರಂತೆ ಸ್ವಚ್ಛತೆ ಕಾಪಾಡಿಕೊಳ್ಳಲು ತಿಳಿಸಿದ್ದು, ತಾಲ್ಲೂಕು ಮತ್ತು ಗ್ರಾಮವಾರು ಕೈಗೊಂಡ ಕ್ರಮಗಳ ಬಗ್ಗೆಯು ಪರಿಶೀಲಿಸಲಾಗುವುದು ಎಂದು ತಿಳಿಸಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಮಾ.14ರಂದು ಫಲಾನುಭವಿಗಳ ಸಮ್ಮೇಳನ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. 35 ಇಲಾಖೆ ಫಲಾನುಭವಿಗಳ ಪಟ್ಟಿ ತಯಾರಿಸಿ ಸಿದ್ಧತೆ ಮಾಡಿಕೊಂಡು, ಸಮಾವೇಶಕ್ಕೆ ಫಲಾನುಭವಿಗಳನ್ನು ಕರೆ ತರುವ ವ್ಯವಸ್ಥೆ ಇಲಾಖೆವಾರು ಅಧಿಕಾರಿಗಳು ನಿರ್ವಹಿಸಬೇಕು. ಸಮಾವೇಶಕ್ಕೆ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಅಗತ್ಯ ಮೂಲಸೌಕರ್ಯ ಒದಗಿಸಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸಚಿವರು ಸೂಚಿಸಿದರು.

ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ, ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ದೇವಿಂದ್ರನಾಥ ನಾದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ, ಜಿ.ಪಂ. ಸಿಇಒ ಡಾ.ಟಿ.ರೋಣಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

‘ಟಾಸ್ಕ್ ಫೋರ್ಸ್ ಸಕ್ರಿಯವಾಗಲಿ’

ಬೇಸಿಗೆ ಆರಂಭವಾಗಿದ್ದು, ಜಿಲ್ಲೆಯ ಎಲ್ಲಾ ತಾಲ್ಲೂಕು ಮತ್ತು ಗ್ರಾಮಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್‌ ತಿಳಿಸಿದರು.

ಜಿಲ್ಲೆಯಲ್ಲಿನ ದುರಸ್ತಿಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ ತಕ್ಷಣ ದುರಸ್ತಿಗೊಳಿಸಬೇಕು. ಜಿಲ್ಲಾ ಹಾಗೂ ತಾಲ್ಲೂಕು ಟಾಸ್ಕ್ ಫೋರ್ಸ್ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ಆಯಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ನೀರು ಸರಬರಾಜು ಇಲಾಖೆ ಅಧಿಕಾರಿಗಳು, ನಗರಸಭೆ ಸಂಸ್ಥೆಗಳ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ನಿರ್ಲಕ್ಷ್ಯ ವಹಿಸಿದ್ದಲ್ಲಿ ಅಂಥವರ ವಿರುದ್ಧ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಜಿಲ್ಲೆಯ ವಿವಿಧ ಗೋಶಾಲೆಗಳ ಕಾಮಗಾರಿ ಆದ್ಯತೆ ಮೇಲೆ ಪೂರ್ಣಗೊಳಿಸಬೇಕು. ಜಾನುವಾರುಗಳಿಗೆ ಮೇವು ಹಾಗೂ ನೀರಿನ ಕೊರತೆಯಾಗದಂತೆ ಮುನ್ನಚ್ಚರಿಕೆ ವಹಿಸಬೇಕು

-ಪ್ರಭು ಚವಾಣ್‌, ಜಿಲ್ಲಾ ಉಸ್ತುವಾರಿ ಸಚಿವ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT