ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೆ. 18ರಿಂದ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ

ಪೂರ್ವಭಾವಿ ಸಭೆಯಲ್ಲಿ ಸಿದ್ಧತೆಗೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಸೂಚನೆ
Last Updated 2 ಫೆಬ್ರುವರಿ 2021, 16:43 IST
ಅಕ್ಷರ ಗಾತ್ರ

ಯಾದಗಿರಿ: ‘ಫೆ. 18 ಮತ್ತು 19 ರಂದು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ವಾರ್ಷಿಕ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ವಾರ್ಷಿಕ ಕ್ರೀಡಾಕೂಟ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದರು.

‘ಪ್ರಸಕ್ತ ಸಾಲಿನ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ವಾರ್ಷಿಕ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಯೋಜಿಸುವುದಕ್ಕೆ ಸಂಬಂಧಿಸಿದಂತೆ, ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಜವಾಬ್ದಾರಿ ನೀಡಲಾಗಿದೆ. ಆಯಾ ಅಧಿಕಾರಿಗಳು ತಮಗೆ ವಹಿಸಿದ ಹೊಣೆಗಾರಿಕೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿ, ಕ್ರೀಡಾಕೂಟ ಯಶಸ್ವಿಗೊಳಿಸಬೇಕು. ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್, ಕುಸ್ತಿ, ಕಬಡ್ಡಿ, ಕ್ರಿಕೆಟ್, ಪುಟ್‍ಬಾಲ್, ವಾಲಿಬಾಲ್, ಹಾಕಿ, ಟೇಬಲ್ ಟೆನ್ನಿಸ್, ಟೆನ್ನಿಸ್, ಥ್ರೋಬಾಲ್ ಸೇರಿದಂತೆ ಒಳಾಂಗಣ ಕ್ರೀಡೆಗಳಾದ ಕೇರಂ, ಚೆಸ್, ಬ್ಯಾಡ್ಮಿಂಟನ್, ಭಾರ ಎತ್ತುವ ಸ್ಪರ್ಧೆ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗುತ್ತಿದೆ’ ಎಂದರು.

‘ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಹಿಂದೂಸ್ತಾನಿ ಸಂಗಿತ, ಲಘು ಶಾಸ್ತ್ರೀಯ ಸಂಗೀತ, ಕರ್ನಾಟಕ ಶಾಸ್ತ್ರೀಯ ಸಂಗೀತ, ಜಾನಪದ ಗೀತೆ, ಭರತನಾಟ್ಯ, ಜನಪದ ನೃತ್ಯ ಸೇರಿದಂತೆ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ’ ಎಂದುಹೇಳಿದರು.

‘ಊಟೋಪಹಾರ, ಕ್ರೀಡಾ ಸಾಮಗ್ರಿಗಳ ಪೂರೈಕೆ, ನಿರ್ಣಾಯಕರ ನಿಯೋಜನೆ, ಪ್ರಥಮ ಚಿಕಿತ್ಸೆ, ಔಷಧೋಪಚಾರ ವ್ಯವಸ್ಥೆ, ಅಂಬುಲೆನ್ಸ್ ಸೇರಿದಂತೆ ಇತರೆ ವ್ಯವಸ್ಥೆ ಮಾಡಿಕೊಳ್ಳಬೇಕು. ಪೊಲೀಸ್ ಬಂದೋಬಸ್ತ್ ಒದಗಿಸಬೇಕು’ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

‘ಕ್ರೀಡಾಕೂಟದಲ್ಲಿ ಭಾಗವಹಿಸುವ ಸಿಬ್ಬಂದಿ ತಮ್ಮ ತಮ್ಮ ಇಲಾಖೆಯ ಮುಖ್ಯಸ್ಥರಿಂದ ಗುರುತಿನ ಚೀಟಿ ಪಡೆದು ಫೆ.15 ರ ಒಳಗೆ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿಗಳಲ್ಲಿ ನೋಂದಣೆ ಮಾಡಿಕೊಳ್ಳಬೇಕು. ಕ್ರೀಡಾಪಟುಗಳಿಗೆ ಕೋವಿಡ್-19 ಪರೀಕ್ಷೆ ಮಾಡಲಾಗುವುದು. ಕ್ರೀಡಾಂಗಣದಲ್ಲಿ ಥರ್ಮಲ್ ಸ್ಕ್ರೀನಿಂಗ್ ಹಾಗೂ ಸ್ಯಾನಿಟೈಜರ್ ವ್ಯವಸ್ಥೆ ಕಲ್ಪಿಸುವಂತೆ’ ಸಂಬಂಧಿಸಿದವರಿಗೆ
ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ. ರಜಪೂತ, ಉಪವಿಭಾಗಾಧಿಕಾರಿ ಶಂಕರಗೌಡ ಸೋಮನಾಳ, ಅಲ್ಪಸಂಖ್ಯಾತರ ಇಲಾಖೆಯ ಅಧಿಕಾರಿ ರಾಜು, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶ್ರೀನಿವಾಸ ರಡ್ಡಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜು ಭಾವಿಹಳ್ಳಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಹಿಪಾಲರಡ್ಡಿ ಸೇರಿದಂತೆ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

***

ಕ್ರೀಡಾಕೂಟದಲ್ಲಿ ಜಿಲ್ಲೆಯ ಎಲ್ಲ ತಾಲ್ಲೂಕಿನ ಸರ್ಕಾರಿ ನೌಕರರು ಭಾಗವಹಿಸಬೇಕು.ಕ್ರೀಡಾಕೂಟದ ಯಶಸ್ವಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧಿಕಾರಿಗಳು ಹೆಚ್ಚಿನ ಕಾಳಜಿ ವಹಿಸಬೇಕು.
-ಡಾ.ರಾಗಪ್ರಿಯಾ ಆರ್, ಜಿಲ್ಲಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT