ಬುಧವಾರ, ಜುಲೈ 15, 2020
27 °C
ಜಿಲ್ಲಾಡಳಿತ ಕಾರ್ಯಕ್ಕೆ ರಾಜ್ಯಮಟ್ಟದ ಮೌಲ್ಯಮಾಪನ ತಂಡ ಪ್ರಶಂಸೆ

ಯಾದಗಿರಿ | ಕೋವಿಡ್-19 ತಡೆಗಟ್ಟುವಲ್ಲಿ ಜಿಲ್ಲೆ ಮಾದರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ರಾಜ್ಯ ಸರ್ಕಾರದ ಆದೇಶದಂತೆ ಕೋವಿಡ್-19 ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕೈಕೊಂಡಿರುವ ಮುಂಜಾಗ್ರತಾ ಕ್ರಮಗಳು ಬೇರೆ ಜಿಲ್ಲೆಗಳಿಗೆ ಮಾದರಿಯಾಗಿದೆ ಎಂದು ಬೀದರ್‌ ವೈದ್ಯಕೀಯ ಮಹಾವಿದ್ಯಾಲಯದಿಂದ ಆಗಮಿಸಿದ ರಾಜ್ಯ ಮಟ್ಟದ ಮೌಲ್ಯಮಾಪನ ತಂಡವು ಪ್ರಶಂಸೆ ವ್ಯಕ್ತಪಡಿಸಿದೆ.

ಜೂನ್ 26ರಿಂದ 28ರ ವರೆಗೆ ಜಿಲ್ಲೆಯಲ್ಲಿ ಮೂರು ದಿನಗಳವರೆಗೆ ಎಲ್ಲಾ ತಾಲ್ಲೂಕುಗಳಿಗೆ ಪ್ರವಾಸ ಕೈಗೊಂಡ ಡಾ.ಚಂದ್ರಕಾಂತ ಚಿಲ್ಲರಗಿ, ಡಾ.ಶಿವರಾಜ ಬಿರಾದಾರ, ಡಾ.ಅಶೋಕ ಅವರನ್ನೊಳಗೊಂಡ ತಂಡವು, ಕೋವಿಡ್-19 ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತದಿಂದ ಕೈಗೊಳ್ಳಲಾದ ಎಲ್ಲಾ ಕ್ವಾರೆಂಟೈನ್ ಸೆಂಟರ್‌ಗಳು, ಕಂಟೈನ್ಮೆಂಟ್ ಜೋನ್‍ಗಳು, ಫೀವರ್ ಕ್ಲಿನಿಕ್‍ಗಳು, ಗಂಟಲು ದ್ರವ ಸಂಗ್ರಹಣೆ ಮಾಡುವ ವಾಹನ, ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ, ಕೋವಿಡ್ ಲ್ಯಾಬ್‍ಗಳನ್ನು, ಸಕಾರಾತ್ಮಕ ಹಾಗೂ ನಕಾರಾತ್ಮಕ ಪ್ರಕರಣಗಳು, ಆಶಾ ಕಾರ್ಯಕತೆಯರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಗ್ರಾಮ ಮಟ್ಟದ ಟಾಸ್ಕ್ ಫೊರ್ಸ್‌ಸಮಿತಿಗಳ ಕಾರ್ಯಚಟುವಟಿಕೆಗಳನ್ನು ವೀಕ್ಷಿಸಿತು.

ಜಿಲ್ಲೆಯಲ್ಲಿ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಕೊರತೆ ನಡುವೆಯೂ ಉತ್ತಮ ಕ್ರಮಗಳನ್ನು ಕೈಗೊಂಡಿದೆ. ಸಕಾರಾತ್ಮಕ ಪ್ರಕರಣಗಳನ್ನು ಶೀಘ್ರ ಪತ್ತೆಹಚ್ಚುವ ನಿಟ್ಟಿನಲ್ಲಿ ಜಿಲ್ಲೆಯು ರಾಜ್ಯದಲ್ಲಿಯೇ ಅತೀ ಹೆಚ್ಚು ಗಂಟಲು ದ್ರವ ಮಾದರಿಗಳನ್ನು ಪರೀಕ್ಷಿಸಿರುವುದು ಮತ್ತು ಜಿಲ್ಲೆಯಲ್ಲಿ ವರದಿಯಾಗಿರುವ ಸಕಾರಾತ್ಮಕ ಪ್ರಕರಣಗಳ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಿ ಬೇಗನೆ ಗುಣಮುಖರಾಗಿ ಬಿಡುಗಡೆ ಮಾಡಿರುವುದು ಜಿಲ್ಲಾಡಳಿತ ಕೈಗೊಂಡ ಅತ್ಯುತ್ತಮ ಕ್ರಮಗಳ ಕನ್ನಡಿ ಎಂದು ಶ್ಲಾಘಿಸಿದೆ.

ಈ ಬಗ್ಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದೆಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ತಿಳಿಸಿದರು.

ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್, ಕೊರೊನಾ ವೈರಸ್ ಹರಡದಂತೆ ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕೈಗೊಂಡ ಮುಂಜಾಗ್ರತಾ ಕ್ರಮಗಳ ಬಗ್ಗೆ ಹಾಗೂ ಪಾಸಿಟಿವ್ ವ್ಯಕ್ತಿಗಳು ತ್ವರಿತಗತಿಯಲ್ಲಿ ಚೇತರಿಕೆ ಕಾಣುತ್ತಿರುವ ಬಗ್ಗೆ ವಿವರಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನವಣೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಎಸ್.ಪಾಟೀಲ, ಪ್ರಭಾರಿ ಜಿಲ್ಲಾ ಶಸ್ತ್ರಚಿಕಿತ್ಸಕಿ ಡಾ.ನೀಲಮ್ಮ ಎಸ್.ರೆಡ್ಡಿ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು