ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಡಿವ ನೀರು ಪೂರೈಕೆ: ನಿರ್ಲಕ್ಷ್ಯ ಬೇಡ

ಬರ ಪರಿಹಾರ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಾಜಶೇಖರ ಬಿ.ಪಾಟೀಲ ಎಚ್ಚರಿಕೆ
Last Updated 7 ಜೂನ್ 2019, 16:07 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಾಜಶೇಖರ ಬಿ.ಪಾಟೀಲ ಎಚ್ಚರಿಕೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಬರ ಪರಿಹಾರ ಹಾಗೂ ಕಾರ್ಯನಿರ್ವಹಣೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕುಡಿಯುವ ನೀರು ಪೂರೈಕೆಗೆ ಹಣದ ಕೊರತೆ ಇಲ್ಲ. ಈ ವಿಷಯದಲ್ಲಿ ಸರಿಯಾಗಿ ಕಾರ್ಯನಿರ್ವಹಿಸದ ಅಧಿಕಾರಿಗಳ ಬಗ್ಗೆ ವರದಿಯನ್ನು ಸರ್ಕಾರಕ್ಕೆ ಕಳುಹಿಸಿಕೊಡುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಸೂಚಿಸಿದರು.

ಶಾಸಕ ನಾಗನಗೌಡ ಕಂದಕೂರ ಮಾತನಾಡಿ, ಗುರುಮಠಕಲ್ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್ಚಾಗಿ ಪ್ಲೋರೈಡ್ ನೀರು ಇದೆ. ಈ ಬಗ್ಗೆ ಪ್ರತಿ ಸಭೆಯಲ್ಲಿ ಪ್ರಸ್ತಾಪಿಸಿ, ಶುದ್ಧ ಕುಡಿಯುವ ನೀರು ಪೂರೈಕೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಶಾಸಕ ಶರಣಬಸಪ್ಪಗೌಡ ದರ್ಶನಾಪೂರ ಹಾಗೂ ವೆಂಕಟರಡ್ಡಿಗೌಡ ಮುದ್ನಾಳ ಮಾತನಾಡಿ, ಶುದ್ಧ ಕುಡಿಯುವ ನೀರಿನ ಘಟಕಗಳ ಬಗ್ಗೆ ಅಧಿಕಾರಿಗಳು ನೀಡಿದ ವರದಿ ತಪ್ಪಾಗಿದೆ. ವಾಸ್ತವದಲ್ಲಿ ಅವರು ಹೇಳಿರುವಷ್ಟು ಘಟಕಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಜಿಲ್ಲಾ ಪಂಚಾಯಿತಿ ಸದಸ್ಯರೂ ತಮ್ಮ ಕ್ಷೇತ್ರಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಹೇಳಿಕೊಂಡರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಜ್‍ಕುಮಾರ್ ಪತ್ತಾರ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 24 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಅಲ್ಲದೆ, ವಿವಿಧ ಗ್ರಾಮಗಳಲ್ಲಿ ಒಟ್ಟು 52 ಖಾಸಗಿ ಕೊಳವೆ ಬಾವಿಗಳಿಂದ ಕುಡಿಯುವ ನೀರು ಪೂರೈಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಶೇ.45ರಷ್ಟು ಮಳೆ ಕೊರತೆ: ಜಂಟಿ ಕೃಷಿ ನಿರ್ದೇಶಕಿದೇವಿಕಾ ಆರ್. ಮಾತನಾಡಿ, ಜಿಲ್ಲೆಯಲ್ಲಿ ಮುಂಗಾರು ಆರಂಭವಾಗಿದ್ದು, ರೈತರು ಬಿತ್ತನೆಗೆ ಸಿದ್ಧತೆ ನಡೆಸಿದ್ದಾರೆ. ಜಿಲ್ಲೆಯಾದ್ಯಂತ ಮಾರ್ಚ್‍ನಿಂದ ಮೇ 31ರವರೆಗೆ ಪೂರ್ವ ಮುಂಗಾರು 62 ಮಿ.ಮೀ ಮಳೆ ಆಗಬೇಕಿತ್ತು. ಆದರೆ, 34 ಮಿ.ಮೀ ಮಾತ್ರ ಮಳೆ ಸುರಿದಿದ್ದು, ಶೇ 45ರಷ್ಟು ಮಳೆ ಕೊರತೆ ಇದೆ ಎಂದು ಮಾಹಿತಿ ನೀಡಿದರು.

ಸಂಸದಡಾ.ಉಮೇಶ ಜಿ.ಜಾಧವ ಮಾತನಾಡಿ, ಬೆಳೆ ವಿಮೆ ಬಗ್ಗೆ ಹೆಚ್ಚಿನ ಪ್ರಚಾರ ಕೈಗೊಳ್ಳಬೇಕು. ಹಿಂದಿನ ವರ್ಷಗಳಲ್ಲಿ ಬಾಕಿಯಿರುವ ವಿಮಾ ಮೊತ್ತವನ್ನು ರೈತರಿಗೆ ತಲುಪಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಸಹಕಾರ ಸಂಘಗಳ ಉಪನಿಬಂಧಕ ವಿಶ್ವನಾಥ ಮಲಕೂಡ ಮಾತನಾಡಿ, ಸಹಕಾರ ಬ್ಯಾಂಕ್‍ಗಳ ಬೆಳೆಸಾಲ ಮನ್ನಾಗೆ ಸಂಬಂಧಿಸಿದಂತೆ ಜಿಲ್ಲೆಯ 13,944 ರೈತರು ಬೆಳೆ ಸಾಲಮನ್ನಾಗೆ ಅರ್ಹರಾಗಿದ್ದಾರೆ. ಒಟ್ಟಾರೆ 30.41 ಕೋಟಿ ರೂ. ಬೆಳೆ ಸಾಲದಲ್ಲಿ 10.89 ಕೋಟಿ ರೂ. ಬಿಡುಗಡೆಯಾಗಿದೆ. 19.52 ಕೋಟಿ ರೂ. ಬಿಡುಗಡೆಗೆ ಬಾಕಿಯಿದೆ ಎಂದು ತಿಳಿಸಿದರು.

ಶಾಸಕ ಶರಣಬಸಪ್ಪಗೌಡ ದರ್ಶನಾಪೂರ ಮಾತನಾಡಿ, ಸಹಕಾರ ಸಂಘಗಳಲ್ಲಿ ರೈತರ ಖಾತೆಗೆ ಬಂದಿರುವ ಬೆಳೆಸಾಲ ಮೊತ್ತವನ್ನು ಡ್ರಾ ಮಾಡಿಕೊಳ್ಳಲು ಬಿಡುತ್ತಿಲ್ಲ. ಇದರಿಂದ ರೈತರು ಹಿಂಸೆ ಅನುಭವಿಸುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನರೇಗಾದಲ್ಲಿ ಶೇ.12.81ರಷ್ಟು ಸಾಧನೆ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕವಿತಾ ಎಸ್.ಮನ್ನಿಕೇರಿ ಮಾತನಾಡಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ 2018- 19ನೇ ಸಾಲಿನಲ್ಲಿ ನಿಗದಿಪಡಿಸಿದ್ದ 24 ಲಕ್ಷ ಮಾನವ ದಿನಗಳ ಗುರಿಯಲ್ಲಿ 23.72 ಮಾನವ ದಿನಗಳ ಗುರಿ ಸಾಧಿಸಲಾಗಿದೆ. ಇದು ಶೇ 98.83ರಷ್ಟು ಸಾಧನೆ. ಇನ್ನು 2019- 20ನೇ ಸಾಲಿಗೆ ನಿಗದಿಪಡಿಸಿರುವ 26.61 ಲಕ್ಷ ಮಾನವ ದಿನಗಳ ಗುರಿಯಲ್ಲಿ 3.41 ಲಕ್ಷ ಮಾನವ ದಿನಗಳ ಗುರಿ ತಲುಪಲಾಗಿದೆ. ಇದು ಶೇ 12.81ರಷ್ಟು ಸಾಧನೆಯಾಗುತ್ತದೆ ಎಂದು ವಿವರಿಸಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ರಾಜಶೇಖರಗೌಡ ಪಾಟೀಲ ವಜ್ಜಲ್, ಉಪಾಧ್ಯಕ್ಷೆ ಗಿರಿಜಮ್ಮ ಸದಾಶಿವಪ್ಪಗೌಡ ರೊಟ್ನಡಗಿ, ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನವಣೆ, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ, ಉಪ ವಿಭಾಗಾಧಿಕಾರಿ ಶಂಕರಗೌಡ ಎಸ್.ಸೋಮನಾಳ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT