ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಜಿಲ್ಲೆಯ ಮೂಲ ಸೌಕರ್ಯಕ್ಕೆ ಒತ್ತು’

75 ಸ್ವಾತಂತ್ರ್ಯ ದಿನಾಚರಣೆ, ಸಚಿವರಿಂದ ಧ್ವಜಾರೋಹಣ
Last Updated 15 ಆಗಸ್ಟ್ 2021, 16:03 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲೆಯ ಅಭಿವೃದ್ಧಿಯ ನಿಟ್ಟಿನಲ್ಲಿ ಸರ್ಕಾರವು ಪೂರಕವಾಗಿ ಸ್ಪಂದಿಸುತ್ತಾ ಬಂದಿದೆ. ಹಲವು ಮಹತ್ವದ ಅಭಿವೃದ್ಧಿ ಕಾಮಗಾರಿಗಳಿಗೆ ರಾಜ್ಯ ಸರ್ಕಾರವು ಅನುಮೋದನೆ ನೀಡಿದ್ದು, ಅನುದಾನವನ್ನೂ ಬಿಡುಗಡೆ ಮಾಡಲಾಗಿದೆ. ಜಿಲ್ಲೆಯ ಎಲ್ಲ ಪಟ್ಟಣ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಮೂಲ ಸೌಕರ್ಯಗಳನ್ನು ಬಲಪಡಿಸಿ, ಉತ್ತಮ ನಾಗರಿಕ ಸೌಲಭ್ಯಗಳನ್ನು ನೀಡಲು ಆದ್ಯತೆ ನೀಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ತಿಳಿಸಿದರು.

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ನಗರಸಭೆ ಹಾಗೂ ಭಾವೈಕ್ಯತಾ ಸಮಿತಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ 75ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಬ್ರಿಟಿಷರ ಆಡಳಿತವನ್ನು ಅಹಿಂಸಾ ಮಾರ್ಗದಿಂದಲೇ ಕಿತ್ತೊಗೆದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಜವಾಹರಲಾಲ್ ನೆಹರೂ ಹಾಗೂ ಕ್ರಾಂತಿಕಾರಿಗಳಾದ ಭಗತ್‍ಸಿಂಗ್, ಸುಭಾಷ್‍ಚಂದ್ರ ಬೋಸ್ ಸೇರಿದಂತೆ ಅಸಂಖ್ಯಾತ ಮಹನೀಯರು ದೇಶಕ್ಕಾಗಿ ಮಾಡಿದ ತ್ಯಾಗ-ಬಲಿದಾನ ಮತ್ತು ಅವರ ಆದರ್ಶಗಳು ನಮಗೆಲ್ಲರಿಗೂ ನಿರಂತರ ಸ್ಫೂರ್ತಿಯಾಗಿವೆ. ಅವರೆಲ್ಲರನ್ನೂ ಸ್ಮರಿಸಿ ನಮಿಸುವುದು ನಮ್ಮ ಆದ್ಯ ಕರ್ತವ್ಯ. ಇದೊಂದು ಸಂಭ್ರಮದ ದಿನವಷ್ಟೇ ಅಲ್ಲದೆ, ಆತ್ಮಾವಲೋಕನದ ದಿನವೂ ಹೌದು ಎಂದು ವಿವರಿಸಿದರು.

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಜಿಲ್ಲೆ ಯೋಜನೆಯಡಿ ಜಿಲ್ಲೆ ಆಯ್ಕೆಯಾಗಿರುವುದು ಸಂತೋಷದ ಸಂಗತಿ. 115 ಜಿಲ್ಲೆಗಳ ಪೈಕಿ ಯಾದಗಿರಿ ಜಿಲ್ಲೆಯೂ ಒಂದಾಗಿದೆ. ಜಿಲ್ಲೆಯ ಅಭಿವೃದ್ಧಿಗಾಗಿ ₹2 ಕೋಟಿ ಮಂಜೂರು ಮಾಡಿದ್ದು, ₹75 ಲಕ್ಷ ಮಕ್ಕಳ ಅಪೌಷ್ಟಿಕತೆ ನಿವಾರಿಸಲು ಕಾಯ್ದಿರಿಸಲಾಗಿದೆ ಎಂದು ತಿಳಿಸಿದರು.

‘ಕಾರ್ಪೊರೇಟ್ ಸಂಸ್ಥೆಗಳು ಮತ್ತು ಸಾರ್ವಜನಿಕ ಉದ್ಯಮಗಳು ಸಿಎಸ್‍ಆರ್ ಅಡಿ ₹12 ಕೋಟಿ ಮೊತ್ತ ಕೋವಿಡ್ 3ನೇ ಅಲೆ ಎದುರಿಸಲು ಜಿಲ್ಲೆಗೆ ನೀಡಿವೆ. ಇದನ್ನು ಬಳಿಸಿಕೊಂಡು ಸರ್ಕಾರಿ ಆಸ್ಪತ್ರೆ ಮತ್ತು ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿ 650 ಆಮ್ಲಜನಕ ಬೆಡ್‍ ಒದಗಿಸಲಾಗಿದ್ದು, ಹೊಸದಾಗಿ 250 ಹಾಸಿಗೆಗಳ ಸೇರ್ಪಡೆಯಾಗಲಿದೆ‘ ಎಂದರು.

2021ರ ಮುಂಗಾರು ಹಂಗಾಮಿನಲ್ಲಿ ಹುಣಸಗಿ, ಸುರಪುರ, ವಡಗೇರ, ಶಹಾಪುರ ತಾಲ್ಲೂಕುಗಳಲ್ಲಿ ಪ್ರವಾಹ ಪರಿಸ್ಥಿತಿ ಉದ್ಭವಿಸಿತ್ತು. 2020ನೇ ಸಾಲಿನ ಆಗಸ್ಟ್, ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳ ಮುಂಗಾರು ಹಂಗಾಮಿನ ಪ್ರವಾಹದಿಂದ ಜಿಲ್ಲೆಯಲ್ಲಿ 45,373 ಹೆಕ್ಟೇರ್ ಬೆಳೆ ಹಾನಿಗಿದೆ. ಬೆಳೆಹಾನಿಯಾದ ರೈತರಿಗೆ ₹37.41 ಕೋಟಿ ಪರಿಹಾರ ವಿತರಿಸಲಾಗಿದೆ’ ಎಂದು ಮಾಹಿತಿ ನೀಡಿದರು.

‘ಮಳೆ, ಪ್ರವಾಹದಿಂದ ರಸ್ತೆ, ಸೇತುವೆ ಮತ್ತು ವಿದ್ಯುತ್ ಕಂಬ ಸೇರಿ ಸುಮಾರು ₹53.54 ಕೋಟಿ ನಷ್ಟ ಉಂಟಾಗಿದೆ. 216 ಮನೆಗಳು ಭಾಗಶಃ ಹಾನಿಯಾಗಿದ್ದು, 17 ಪ್ರಾಥಮಿಕ ಶಾಲೆಗಳು ಹಾನಿಗೊಂಡಿವೆ. ಈ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ’ ಎಂದರು.

ಶಹಾಪುರ, ಸುರಪುರ, ವಡಗೇರ ಮತ್ತು ಹುಣಸಗಿ ‘ಅತಿವೃಷ್ಟಿ, ಪ್ರವಾಹ ಪೀಡಿತ’ ತಾಲ್ಲೂಕುಗಳು ಎಂದು ಘೋಷಿಸಲಾಗಿದೆ. ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ 50 ಉಪನ್ಯಾಸಕರನ್ನು ನೇಮಿಸಲಾಗಿದೆ. ಈ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯು ಕಲ್ಯಾಣ ಕರ್ನಾಟಕದಲ್ಲಿ ಅತ್ಯುತ್ತಮ ಸಾಧನೆ ಮಾಡಿದೆ. ಪರೀಕ್ಷೆ ಬರೆದ ಎಲ್ಲ ವಿದ್ಯಾರ್ಥಿಗಳು ಹಾಗೂ ಬೆಂಬಲಿಸಿದ ಪಾಲಕರು ಮತ್ತು ಶಿಕ್ಷಕರನ್ನು ಅಭಿನಂದಿಸುತ್ತೇನೆ ಎಂದರು.

ಸ್ಥಳೀಯ ಶಾಸಕ ವೆಂಕಟರೆಡ್ಡಿ ಮುದ್ನಾಳ ಅವರು ಅಧ್ಯಕ್ಷತೆ ವಹಿಸಿದ್ದರು. ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ, ಕೃಷ್ಣಾ ಕಾಡಾದ ಅಧ್ಯಕ್ಷ ಶರಣಪ್ಪ ಬಿ. ತಳವಾರ, ಜಿಲ್ಲಾಧಿಕಾರಿ‌‌ ಡಾ.ರಾಗಪ್ರಿಯಾ ಆರ್, ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಜಿಲ್ಲಾ ಪಂಚಾಯಿತಿ ಸಿಇಒ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ. ಬಿ.ವೇದಮೂರ್ತಿ, ಯೂಡಾ ಅಧ್ಯಕ್ಷ ಬಸವರಾಜ ಚಂಡ್ರಕಿ, ಯಾದಗಿರಿ ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ನಗರಸಭೆ ಅಧ್ಯಕ್ಷ ವಿಲಾಸ್ ಪಾಟೀಲ ಇದ್ದರು.

ಸರ್ಕಾರಿ ಪದವಿ ಮಹಾವಿದ್ಯಾಲಯ ಪ್ರಾಂಶುಪಾಲ ಸುಭಾಷ್ಚಂದ್ರ ಕೌಲಗಿ ನಿರೂಪಿಸಿ, ವಂದಿಸಿದರು.

***

ತಿಂಥಣಿ ಶೇ 100ರಷ್ಟು ಲಸಿಕೆ

ಜಿಲ್ಲೆ ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿಯೇ ಕಡಿಮೆ ಕೋವಿಡ್ ಪ್ರಕರಣಗಳನ್ನು ಹೊಂದಿರುವುದು ಹೆಮ್ಮೆಯ ವಿಷಯವಾಗಿದೆ. ಉನ್ನತ ವೈದ್ಯಕೀಯ ಸೌಲಭ್ಯಗಳು ಇಲ್ಲದಿದ್ದರೂ, ತ್ವರಿತವಾಗಿ ಸೌಲಭ್ಯಗಳನ್ನು ಒದಗಿಸುವ ಮೂಲಕ ಕೋವಿಡ್ ನಿರ್ವಹಣೆಯಲ್ಲಿ ಅಭೂತಪೂರ್ವ ಸಾಧನೆ ಮಾಡಲಾಗಿದೆ. ಜಿಲ್ಲೆಯ ತಿಂಥಣಿ ಗ್ರಾಮ ಪಂಚಾಯಿತಿ ಕೋವಿಡ್ ಲಸಿಕೆಯಲ್ಲಿ ಶೇ 100ರಷ್ಟು ಸಾಧನೆ ಮಾಡಿದ್ದು, ಇದು ರಾಜ್ಯದಲ್ಲೇ ಪ್ರಥಮವಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT