ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಎಸ್ಸೆಸ್ಸೆಲ್ಸಿ ಫಲಿತಾಂಶ ವೃದ್ಧಿ ಮಾಡಿ’

ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ
Last Updated 13 ಆಗಸ್ಟ್ 2020, 6:13 IST
ಅಕ್ಷರ ಗಾತ್ರ

ಯಾದಗಿರಿ:ಮುಂದಿನ ಶೈಕ್ಷಣಿಕ ವರ್ಷದಲ್ಲಿ ಜಿಲ್ಲೆ ಎಸ್ಸೆಸ್ಸೆಲ್ಸಿಯಲ್ಲಿ ಟಾಪ್ 10ರೊಳಗೆ ಒಂದಾಗಬೇಕು. ಅದಕ್ಕಾಗಿ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಶ್ರಮವಹಿಸಬೇಕು. ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿಯೂ ಫಲಿತಾಂಶ ವೃದ್ಧಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಪಶು ಸಂಗೋಪನೆ, ಹಜ್ ಮತ್ತು ವಕ್ಫ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್‌ ಹೇಳಿದರು.

ನಗರದಲ್ಲಿ ಜಿಲ್ಲಾಡಳಿತ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ದ್ವಿತೀಯ ಪಿಯುಸಿ ಮತ್ತು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಜಿಲ್ಲೆಯ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ನಗದು ಬಹುಮಾನ ವಿತರಿಸಿ ಅವರು ಮಾತನಾಡಿದರು.

ಎಸ್ಸೆಸ್ಸೆಲ್ಸಿಯಲ್ಲಿ ಫಲಿತಾಂಶ ವೃದ್ಧಿಯಾಗದಿರುವುದು ಆಶಾದಾಯಕ ಬೆಳವಣಿಗೆಯಲ್ಲ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಭೇಟಿ ನೀಡಿ, ಅಲ್ಲಿ ವಿದ್ಯಾರ್ಥಿಗಳ ಶಿಕ್ಷಣ ಗುಣಮಟ್ಟ ಹೆಚ್ಚಿಸುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಜಿಲ್ಲಾಧಿಕಾರಿಯವರು ಸರ್ಕಾರಿ ಶಾಲೆಗಳಿಗೆ ದಿಢೀರ್ ಭೇಟಿ ನೀಡಿ, ಶಾಲೆಯ ಸ್ಥಿತಿಗತಿ, ಶಿಕ್ಷಕರ ಗುಣಮಟ್ಟ ಹಾಗೂ ಮಕ್ಕಳಿಗೆ ಪಾಠ ಹೇಳಿಕೊಡುವ ಅವರ ವಿಧಾನಗಳನ್ನು ತಿಳಿದುಕೊಂಡು ಅದನ್ನು ಉತ್ತಮ ಪಡಿಸುವತ್ತ ಹೆಜ್ಜೆ ಇರಿಸಬೇಕು ಎಂದರು.

ಶಾಸಕ ವೆಂಕಟರೆಡ್ಡಿ ಮುದ್ನಾಳ ಮಾತನಾಡಿ, ದ್ವಿತೀಯ ಪಿಯುಸಿ ಪಡೆದ ಫಲಿತಾಂಶ ಅಲ್ಪ ತೃಪ್ತಿ ತಂದಿದೆ. ಕೋವಿಡ್-19 ಸೋಂಕಿನಿಂದಾಗಿ ಶಾಲೆಗಳು ಮುಚ್ಚಿದ್ದರೂ, ವಿದ್ಯಾರ್ಥಿಗಳು ಸ್ವಯಂ ಅಧ್ಯಯನ ಮಾಡಿ ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಫಲಿತಾಂಶ ಪಡೆದಿದ್ದಾರೆ ಎಂದರು.

ಸಂಸದ ರಾಜಾ ಅಮರೇಶ್ವರ ನಾಯಕ ಮಾತನಾಡಿ, ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿ, ಜಿಲ್ಲೆಯ ಶೈಕ್ಷಣಿಕ ಪ್ರಗತಿಗೆ ಶಿಕ್ಷಕರು ಪ್ರಯತ್ನಿಸಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಮಾತನಾಡಿ, ಜಿಲ್ಲೆಯಿಂದ ಬೆಂಗಳೂರಿಗೆ ವಲಸೆ ಹೋದ ಕಾರ್ಮಿಕನಪುತ್ರಮಹೇಶ ವಿದ್ಯಾರ್ಥಿಯು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625 ಅಂಕಗಳಿಗೆ 616 ಅಂಕಗಳನ್ನು ಪಡೆದು ಅತ್ಯುತ್ತಮ ಸಾಧನೆ ಮಾಡಿದ್ದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ಆತ್ಮಸ್ಥೈರ್ಯ ಕಳೆದುಕೊಳ್ಳಬಾರದು ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನವಣೆ, ಪ್ರೋಬೆಷನರಿ ಐಎಎಸ್ ಅಧಿಕಾರಿ ಅಶ್ವಿಜಾ, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ, ಉಪವಿಭಾಗಾಧಿಕಾರಿ ಶಂಕರಗೌಡ ಎಸ್.ಸೋಮನಾಳ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚಂದ್ರಕಾಂತ ಹಿಳ್ಳಿ ಪ್ರಾಸ್ತಾವಿಕ ಮಾತನಾಡಿದರು. ಯಾದಗಿರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಮನೋಹರ ಎಸ್.ಎನ್ ನಿರೂಪಿಸಿದರು. ಶ್ರೀನಿವಾಸ ರೆಡ್ಡಿ ವಂದಿಸಿದರು.

***

ಶಿಕ್ಷಕರು ಗ್ರಾಮ ಸಂಚಾರ ಮಾಡಬೇಕು. ಅದರೊಂದಿಗೆ ವಿದ್ಯಾರ್ಥಿಗಳ ಪಾಲಕರ ಸಭೆ ಮಾಡಬೇಕು. ಮುಂದಿನ ದಿನಗಳಲ್ಲಿ ಶೈಕ್ಷಣಿಕ ಫಲಿತಾಂಶ ಹೆಚ್ಚಳಕ್ಕೆ ಬೇಕಾದ ಸಕಲ ಸೌಲಭ್ಯ ನೀಡಲು ಕ್ರಮವಹಿಸಲಾಗುವುದು

ಪ್ರಭು ಚವ್ಹಾಣ್‌,ಜಿಲ್ಲಾ ಉಸ್ತುವಾರಿ ಸಚಿವ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT