'ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ'

ಬುಧವಾರ, ಜೂನ್ 19, 2019
32 °C
‌ಅರಣ್ಯ ನಾಶದಿಂದ ಮಳೆಯ ಪ್ರಮಾಣ ಕಡಿಮೆ: ಸಾಲಮಂಟಪಿ ವಿಷಾದ

'ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ'

Published:
Updated:
Prajavani

ಯಾದಗಿರಿ: ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಿದ್ದು, ಪ್ರತಿಯೊಬ್ಬರೂ ಗಿಡಗಳನ್ನು ಬೆಳೆಸಿ ಪೋಷಣೆ ಮಾಡುವ ಮೂಲಕ ಪರಿಸರ ಸಮತೋಲನ ಕಾಪಾಡಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಮುಖ್ಯ ನ್ಯಾಯಿಕ ದಂಡಾಧಿಕಾರಿ ನಾಮದೇವ ಕೆ.ಸಾಲಮಂಟಪಿ ತಿಳಿಸಿದರು.

ನಗರದ ಸರ್ಕಾರಿ ಬಾಲಕಿಯರ ಪ್ರೌಢ ಶಾಲೆಯಲ್ಲಿ ಬುಧವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ, ಜಿಲ್ಲಾ ವಕೀಲರ ಸಂಘ, ಅರಣ್ಯ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ‘ವಿಶ್ವ ಪರಿಸರ ದಿನಾಚರಣೆ’ ಅಂಗವಾಗಿ ಸಸಿ ನೆಡುವ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಅರಣ್ಯ ನಾಶದಿಂದ ಮಳೆಯ ಪ್ರಮಾಣ ಕಡಿಮೆಯಾಗಿದೆ. ಹೀಗಾಗಿ ತಾಪಮಾನ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಇದೆ ರೀತಿ ಮುಂದುವರಿದಲ್ಲಿ ಮುಂದೆ ಮಾನವ ಕುಲವೇ ನಾಶವಾಗುವ ಪರಿಸ್ಥಿತಿ ಬಂದರೂ ಆಶ್ಚರ್ಯವಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.

ರಸ್ತೆ ಅಗಲಿಕರಣ, ನಗರಿಕರಣದಿಂದಾಗಿ ಸಾಕಷ್ಟು ಮರಗಳು ನಾಶವಾಗುತ್ತಿವೆ. ಇದರಿಂದ ಮುಂದಿನ ಪೀಳಿಗೆಗೆ ಆಕ್ಸಿಜನ್‍ ಕೊರತೆ ಎದುರಾಗಬಹುದು. ರಾಷ್ಟ್ರೀಯ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ವಿವಿಧ ಇಲಾಖೆ ಸಹಯೋಗದೊಂದಿಗೆ ದೇಶದಲ್ಲಿ 25 ಲಕ್ಷ ಗಿಡಗಳನ್ನು ನೆಟ್ಟು, ಪೋಷಣೆ ಮಾಡಲು ತೀರ್ಮಾನಿಸಿದೆ ಎಂದು ತಿಳಿಸಿದರು.

ಸಿವಿಲ್ ನ್ಯಾಯಾಧೀಶರಾದ ಲೋಕೇಶ ಧನಪಾಲ್ ಹವಲೆ ಮಾತನಾಡಿ, ರಾಜ್ಯದಲ್ಲಿಯೂ ಅರಣ್ಯ ಪ್ರಮಾಣ ಕಡಿಮೆಯಿದೆ. ಇದರ ಪರಿಣಾಮ ಸಕಾಲಕ್ಕೆ ಮಳೆ ಬರುತ್ತಿಲ್ಲ. ಆದ್ದರಿಂದ ಉಷ್ಣಾಂಶ ಹೆಚ್ಚುತ್ತಿದೆ. ಇದೇ ರೀತಿ ಮುಂದುವರಿದಲ್ಲಿ ಮುಂದಿನ ಪೀಳಿಗೆಗೆ ಆಕ್ಸಿಜನ್‍ನ ಕೊರತೆ ಉಂಟಾಗಿ ದುಡ್ಡು ಕೊಟ್ಟು ಕೊಂಡು ಉಸಿರಾಡುವ ಪರಿಸ್ಥಿತಿ ಎದುರಾಗಬಹುದು ಎಂದು ವಿಷಾದ ವ್ಯಕ್ತಪಡಿಸಿದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಎಸ್.ರವಿಶಂಕರ ಮಾತನಾಡಿ, ಭೂಮಿಯ ವಾತಾವರಣ ಸಮತೋಲನವಾಗಿರಲು ಶೇಕಡ 33 ರಷ್ಟು ಅರಣ್ಯವಿರಬೇಕು. ಆದರೆ, ಮಾನವನ ಹಸ್ತಕ್ಷೇಪದಿಂದ ಅರಣ್ಯ ಕ್ಷಿಣಿಸುತ್ತಿದೆ. ಜಿಲ್ಲೆಯಲ್ಲಿ ಕೇವಲ 5ರಷ್ಟು ಮಾತ್ರ ಅರಣ್ಯವಿದ್ದು, ಮಳೆಯ ಕೊರತೆ ಹೆಚ್ಚಾಗುತ್ತಿದೆ. ಆದ್ದರಿಂದ ಪ್ರತಿಯೊಬ್ಬರು ಮನೆ ಮುಂಭಾಗ ಗಿಡಗಳನ್ನು ನೆಟ್ಟು ಪೋಷಣೆ ಮಾಡಬೇಕು ಎಂದು ಹೇಳಿದರು.

ಸಂಪನ್ಮೂಲ ವ್ಯಕ್ತಿ ಎಸ್.ಪಿ.ನಾಡೇಕರ್ ಮಾತನಾಡಿ, ಮರಗಳ ಮಾರಣಹೋಮದಿಂದಾಗಿ ದೇಶದಲ್ಲಿ ಆಕ್ಸಿಜನ್ ಪ್ರಮಾಣ ಕಡಿಮೆಯಾಗಿ ಕಾರ್ಬನ್ ಡೈ ಆಕ್ಸೈಡ್ ಪ್ರಮಾಣ ಹೆಚ್ಚಾಗಿ ವಾಯು ಮಾಲಿನ್ಯ ಉಂಟಾಗುತ್ತಿದೆ. ರಾಷ್ಟ್ರೀಯ ಹಸಿರು ಪೀಠದ ಪ್ರಕಾರ ಒಂದು ಮರ ಕಡಿದರೆ ಹತ್ತು ಗಿಡಗಳನ್ನು ನೆಡಬೇಕು. ಪ್ರತಿಯೊಬ್ಬರು ಸ್ವಯಂ ಪ್ರೇರಿತವಾಗಿ ಗಿಡಗಳನ್ನು ದತ್ತು ಪಡೆದು ಬೆಳೆಸಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಮಕ್ಕಳಿಗೆ ಸಸಿಗಳನ್ನು ವಿತರಿಸಲಾಯಿತು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ ಅರ್ಜುನ ಬನಸೊಡೆ ಅಧ್ಯಕ್ಷತೆ ವಹಿಸಿದ್ದರು. ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಸ್ಮೀತಾ ಮಾಲಗಾಂವೆ, ವಲಯ ಅರಣ್ಯ ಅಧಿಕಾರಿ ಬಸವರಾಜ ಡಾಂಗೆ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಶ್ರೀನಿವಾಸ ಕುಲಕರ್ಣಿ, ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಮುಖ್ಯ ಗುರುಗಳಾದ ಬಬಿತಾ ಸಿ.ರೆಡ್ಡಿ, ದಯಾನಂದ ಕುಮಾರ, ಕೆ.ಸೋಮನಾಥ ಎಲ್ಲೇರಿ ಹಾಗೂ ಇತರೆ ಅರಣ್ಯ ಇಲಾಖೆ ಅಧಿಕಾರಿಗಳು, ಶಿಕ್ಷಕರು ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಕಾವೇರಿ, ಉಮಾಶ್ರೀ ಪ್ರಾರ್ಥಿಸಿದರು. ವಕೀಲ ಎಸ್.ಪಿ.ನಾಡೇಕರ್ ಸ್ವಾಗತಿಸಿದರು. ಶಿಕ್ಷಕಿ ರಾಧಾ ಎಂ., ನಿರೂಪಿಸಿದರು.‌

 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !