ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಂತುಹುಳು ನಾಶಕ ಅಲ್ಬೆಂಡ್‍ಜೋಲ್ ಮಾತ್ರೆ ನೀಡಿ

ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆಯಲ್ಲಿ ಜಿಲ್ಲಾಧಿಕಾರಿ ಸಲಹೆ
Last Updated 11 ಫೆಬ್ರುವರಿ 2020, 10:12 IST
ಅಕ್ಷರ ಗಾತ್ರ

ಯಾದಗಿರಿ: ಜಂತುಹುಳು ಮಕ್ಕಳಲ್ಲಿ ರಕ್ತಹೀನತೆ ಮತ್ತು ಬೆಳವಣಿಗೆ ಕುಂಠಿತಗೊಳಿಸುತ್ತದೆ. ಅಲ್ಬೆಂಡ್‍ಜೋಲ್ ಮಾತ್ರೆ ಚೀಪುವುದರಿಂದ ಮಕ್ಕಳಲ್ಲಿ ರಕ್ತಹೀನತೆ ನಿಯಂತ್ರಣ ಮತ್ತು ಪೋಷಕಾಂಶ ಹೀರಿಕೆ ಸುಧಾರಿಸುತ್ತದೆ. ಆದ್ದರಿಂದ ಪ್ರತಿಯೊಬ್ಬ ಪೋಷಕರು ತಮ್ಮ 1 ರಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಜಂತುಹುಳು ನಾಶಕ ಅಲ್ಬೆಂಡ್‍ಜೋಲ್ ಮಾತ್ರೆ ನೀಡಬೇಕು ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಮನವಿ ಮಾಡಿದರು.

ನಗರದ ಸ್ಟೇಷನ್ ಬಜಾರ್ ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಅಲ್ಬೆಂಡ್‍ಜೋಲ್ ಮಾತ್ರೆ ನೀಡುವ ಮೂಲಕ ಚಾಲನೆ ನೀಡಿಅವರು ಮಾತನಾಡಿದರು.

ಜಿಲ್ಲೆಯ 3,79,682 ಮಕ್ಕಳಿಗೆ ಅಲ್ಬೆಂಡ್‍ಜೋಲ್ ಮಾತ್ರೆಗಳನ್ನು ವಿತರಿಸುವ ಗುರಿ ಹೊಂದಲಾಗಿದೆ. ಸರ್ಕಾರಿ, ಖಾಸಗಿ ಶಾಲಾ-ಕಾಲೇಜುಗಳಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಉಚಿತವಾಗಿ ಅಲ್ಬೆಂಡ್‍ಜೋಲ್ ಮಾತ್ರೆಗಳನ್ನು ನೀಡಲಾಗುತ್ತದೆ. ಅಂಗನವಾಡಿ ಮತ್ತು ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ಅಂಗನವಾಡಿ ಕೇಂದ್ರಗಳಲ್ಲಿ ಮಾತ್ರೆ ವಿತರಿಸಲಾಗುತ್ತಿದೆ. ಮಾತ್ರೆ ಪಡೆಯದೆ ಬಾಕಿ ಉಳಿದ ಮಕ್ಕಳಿಗೆ ಫೆ.17ರ ಮಾಪ್-ಆಪ್ ದಿನದಂದು ಮಾತ್ರೆಗಳನ್ನು ವಿತರಿಸಲಾಗುವುದು ಎಂದು ತಿಳಿಸಿದರು.

1-2 ವರ್ಷ ಮಕ್ಕಳಿಗೆ 400 ಎಂ.ಜಿ.ಯ ಅರ್ಧ ಮಾತ್ರೆ, 2-19 ವರ್ಷದ ಮಕ್ಕಳಿಗೆ 400 ಎಂ.ಜಿ.ಯ 1 ಮಾತ್ರೆ ನೀಡಬೇಕುಎಂದು ಸಲಹೆ ನೀಡಿದರು.

ಜಿ.ಪಂ ಸಿಇಒ ಶಿಲ್ಪಾ ಶರ್ಮಾ ಮಾತನಾಡಿ, ಕಳಪೆ ನೈರ್ಮಲ್ಯ ಮತ್ತು ಕೊಳಕು ಸ್ಥಳಗಳಲ್ಲಿ ಜಂತುಹುಳ ಸೋಂಕು ಉಂಟಾಗುತ್ತವೆ. ಸೋಂಕಿತ ಮಣ್ಣಿನ ಸಂಪರ್ಕದಿಂದ ಮಕ್ಕಳಿಗೆ ಜಂತುಹುಳು ಹರಡುತ್ತವೆ. ಮಕ್ಕಳ ಕರುಳಿನಲ್ಲಿ ಹೆಚ್ಚು ಸಂಖ್ಯೆಯ ಜಂತುಹುಳ ಇದ್ದಲ್ಲಿ ಹೆಚ್ಚು ಪ್ರಮಾಣದ ರೋಗಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಇದರಿಂದ ಮಕ್ಕಳು ರಕ್ತ ಹೀನತೆಯಿಂದ ಮಾನಸಿಕವಾಗಿ ಸೊರಗುತ್ತಾರೆ. 1ರಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಜಂತುಹುಳು ನಾಶಕ ಅಲ್ಬೆಂಡ್‍ಜೋಲ್ ಮಾತ್ರೆಗಳನ್ನು ನೀಡುವ ಮೂಲಕ ಮಕ್ಕಳಲ್ಲಿನ ಅಪೌಷ್ಟಿಕತೆಯನ್ನು ತಡೆಗಟ್ಟಬೇಕು ಎಂದು ತಿಳಿಸಿದರು.

ಜಿ.ಪಂ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷ ಶಿವಲಿಂಗಪ್ಪ ಪುಟಗಿ ಮಾತನಾಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಲ್ಲಣ್ಣಗೌಡ ಎಸ್.ಪಾಟೀಲ, ಜಿಲ್ಲಾ ಕುಷ್ಠ ರೋಗ ನಿರ್ಮೂಲನಾ ಅಧಿಕಾರಿ ಡಾ.ಭಗವಂತ ಅನವಾರ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಲಕ್ಷ್ಮಿಕಾಂತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರಭಾಕರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶ್ರೀನಿವಾಸ ರೆಡ್ಡಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಹಣಮಂತರಡ್ಡಿ ಇದ್ದರು.

ವಿದ್ಯಾರ್ಥಿನಿಯರಾದ ಮಹೇಶ್ವರಿ ಮತ್ತು ಸುಪ್ರಿಯಾ ಪ್ರಾರ್ಥಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿರಾದಾರ ಶಂಕರ ಅವರು ಕಾರ್ಯಕ್ರಮ ನಿರೂಪಿಸಿದರು. ಸ್ಟೇಷನ್ ಬಜಾರ್ ಸರ್ಕಾರಿ ಪ್ರೌಢಶಾಲೆಯ ಮುಖ್ಯಗುರು ಬಸಪ್ಪ ವಂದಿಸಿದರು.

***

ವಿಶ್ವ ಆರೋಗ್ಯ ಸಂಸ್ಥೆ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದಂದು ಈ ಮಾತ್ರೆ ತೆಗೆದುಕೊಳ್ಳಲು ಶಿಫಾರಸು ಮಾಡಿವೆ
-ಎಂ.ಕೂರ್ಮಾರಾವ್,ಜಿಲ್ಲಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT