ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಪರಿಹಾರ ಮೊತ್ತ ತಲುಪಿಸಲು ಗ್ರಾಮಗಳಿಗೆ ತೆರಳಿ ಫಲಾನುಭವಿ ಗುರುತಿಸಿ

ಅರ್ಹರಿಗೆ ಕೋವಿಡ್ ಪರಿಹಾರ ಮೊತ್ತ ಕೈ ಸೇರಬೇಕು: ಸಚಿವ ಶಂಕರ್ ಸೂಚನೆ
Last Updated 12 ಜೂನ್ 2021, 16:37 IST
ಅಕ್ಷರ ಗಾತ್ರ

ಯಾದಗಿರಿ: ಕೋವಿಡ್ ಪ್ಯಾಕೇಜ್‍ಗೆ ಅರ್ಹರನ್ನು ಗುರುತಿಸುವಂತಾಗಲು ಪ್ರತಿ ಗ್ರಾಮಗಳಿಗೆ ತೆರಳಿ ಫಲಾನುಭವಿಗಳನ್ನು ಗುರುತಿಸಿ ಪಟ್ಟಿ ಮಾಡಿ ಪರಿಹಾರ ಮಂಜೂರು ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್. ಶಂಕರ್ ಸೂಚಿಸಿದ್ದಾರೆ.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಕುರಿತು ಶನಿವಾರ ನಡೆದ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ರಾಜ್ಯ ಸರ್ಕಾರ ಘೋಷಿಸಿರುವ ಕೋವಿಡ್ ಪರಿಹಾರ ಪ್ಯಾಕೇಜ್ ಅಡಿಯಲ್ಲಿ ಫಲಾನುಭವಿಗಳನ್ನು ತ್ವರಿತಗತಿಯಲ್ಲಿ ಗುರುತಿಸಿ ಪರಿಹಾರ ಮೊತ್ತ ಮಂಜೂರು ಮಾಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಅರ್ಹರಿಗೆ ಯಾವುದೇ ಶ್ರಮವಿಲ್ಲದೇ, ಪರಿಹಾರ ಮೊತ್ತ ಕೈಸೇರಬೇಕು ಎಂಬುದು ಸರ್ಕಾರದ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತವು ಎಲ್ಲಾ ಅಧೀನ ಅಧಿಕಾರಿ, ಸಿಬ್ಬಂದಿಯನ್ನು ಬಳಸಿ ಈ ಕಾರ್ಯವನ್ನು ಪರಿಣಾಮಕಾರಿಯಾಗಿಸಬೇಕು ಎಂದು ನಿರ್ದೇಶಿಸಿದರು.

ಕೋವಿಡ್ ಸೋಂಕಿತರ ಪ್ರಮಾಣದಲ್ಲಿ ಜಿಲ್ಲೆಯು ರಾಜ್ಯದಲ್ಲಿ ಅತ್ಯಂತ ಕಡಿಮೆ ಸೋಂಕಿತರನ್ನು ಹೊಂದಿರುವುದು ಶ್ಲಾಘನೀಯ. ಈ ನಿಟ್ಟಿನಲ್ಲಿ ಜಿಲ್ಲೆಯ ಸಾರ್ವಜನಿಕರನ್ನು ಹಾಗೂ ಸೋಂಕು ನಿಯಂತ್ರಣಕ್ಕೆ ಕರ್ತವ್ಯ ನಿರ್ವಹಿಸಿದ ಅಧಿಕಾರಿ, ಸಿಬ್ಬಂದಿ ಹಾಗೂ ಜಿಲ್ಲಾಡಳಿತದೊಂದಿಗೆ ಕೈಜೋಡಿಸಿದ ಸಂಘ–ಸಂಸ್ಥೆಗಳನ್ನು ಅಭಿನಂದಿಸುವುದಾಗಿ ತಿಳಿಸಿದರು.

ಕೋವಿಡ್ ಸೋಂಕಿತರ ಚಿಕಿತ್ಸೆಗೆ ಜಿಲ್ಲೆಯಲ್ಲಿ ಎಲ್ಲಾ ರೀತಿಯ ವ್ಯವಸ್ಥೆಗಳಿವೆ. ಎಲ್ಲಾ ಆಸ್ಪತ್ರೆಗಳನ್ನು ಇದಕ್ಕಾಗಿ ಸಜ್ಜುಗೊಳಿಸಲಾಗಿದೆ. ಎಲ್ಲ ರೀತಿಯ ಔಷಧಿಗಳು, ಚಿಕಿತ್ಸಾ ಉಪಕರಣಗಳು ಹಾಗೂ ವೈದ್ಯರನ್ನು ಇದಕ್ಕಾಗಿ ನೀಡಲಾಗಿದೆ. ಜಿಲ್ಲೆಗೆ ಅಗತ್ಯವಿರುವ ಎಲ್ಲ ರೀತಿಯ ನೆರವನ್ನು ರಾಜ್ಯ ಸರ್ಕಾರ ನೀಡಲಿದೆ ಎಂದು ಸಚಿವರು ತಿಳಿಸಿದರು.

ಕೋವಿಡ್ ಲಸಿಕಾಕರಣದಲ್ಲಿ ನಿಗದಿತ ಗುರಿ ಸಾಧಿಸಲು ಪ್ರಯತ್ನಿಸಬೇಕು. ಮುಂಚೂಣಿ ಕಾರ್ಯಕರ್ತರ ಲಸಿಕಾಕರಣವನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ಪರ ಊರಿಗೆ ತೆರಳಿದ್ದರೆ, ಎರಡನೇ ಲಸಿಕೆ ಅಲ್ಲಿಯೇ ಪಡೆಯಲು ತಿಳಿಸಬೇಕು ಎಂದು ತಿಳಿಸಿದರು.

‌ಸಭೆಯಲ್ಲಿ ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ ಮಾತನಾಡಿ, ಕೋವಿಡ್ ಸಂಭಾವ್ಯ ಮೂರನೇ ಅಲೆಯನ್ನು ಎದುರಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯು ಮುತುವರ್ಜಿ ವಹಿಸಿ ಸಿದ್ಧತೆಗಳನ್ನು ಕೈಗೊಳ್ಳಬೇಕು. ಮುಖ್ಯವಾಗಿ ಮಕ್ಕಳ ಆರೋಗ್ಯದ ರಕ್ಷಣೆಯನ್ನು ಆದ್ಯತೆಯಲ್ಲಿ ಗಮನಹರಿಸುವ ಅಗತ್ಯವಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್. ಮಾತನಾಡಿ, ಜಿಲ್ಲೆಯ ಸಾರ್ವಜನಿಕರ ಸಹಕಾರದಿಂದ ಕೋವಿಡ್ ಸೋಂಕು ಹರಡುವಿಕೆ ನಿಯಂತ್ರಣದಲ್ಲಿದೆ. ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಲು ಜಿಲ್ಲೆಯ ಪ್ರಮುಖ ಸರ್ಕಾರಿ ಆಸ್ಪತ್ರೆಗಳಿಗೆ ಸಿಟಿ ಸ್ಕ್ಯಾನ್ ಯಂತ್ರ, ಆಮ್ಲಜನಕ ಘಟಕ ಯಂತ್ರಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಕೋವಿಡ್ ಸ್ಥಿತಿಗತಿ, ಆರೋಗ್ಯ ಇಲಾಖೆಯ ಮೂಲಸೌಲಭ್ಯಗಳ ಬಗ್ಗೆಜಿಲ್ಲಾ ಆರೋಗ್ಯಾಧಿಕಾರಿ ಡಾ.ಇಂದುಮತಿ ಕಾಮಶೆಟ್ಟಿ ಸಭೆಗೆ ವಿವರ ನೀಡಿದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ, ನಿಜಶರಣ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರ, ನಗರಸಭೆ ಅಧ್ಯಕ್ಷ ವಿಲಾಸ ಬಿ. ಪಾಟೀಲ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಬಸವರಾಜ ಚಂಡ್ರಿಕಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿಲ್ಪಾ ಶರ್ಮಾ, ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ವೇದಮೂರ್ತಿ
ಇದ್ದರು.

ವಿವಿಧ ಸೌಲಭ್ಯಗಳಿಗೆ ಸಚಿವರಿಂದ ಚಾಲನೆ
ಜಿಲ್ಲಾ ಉಸ್ತುವಾರಿ ಸಚಿವ ಆರ್. ಶಂಕರ್ ಅವರು ಶನಿವಾರ ನಗರದಲ್ಲಿ ವಿವಿಧ ಯೋಜನೆ, ಸೌಲಭ್ಯಗಳಿಗೆ ಚಾಲನೆ ನೀಡಿದರು.

ಜಿಲ್ಲಾಡಳಿತ ಭವನದಲ್ಲಿ ಕೋವಿಡ್ ಪ್ಯಾಕೇಜ್ -1 ಅಡಿಯಲ್ಲಿ ಅರ್ಹರಿಗೆ ಪರಿಹಾರಧನ ಮತ್ತು ಆಹಾರ ಕಿಟ್‍ಗಳನ್ನು ವಿತರಿಸಿದರು. ಧಾರ್ಮಿಕ ದತ್ತಿ ಇಲಾಖೆಯ ಸಿ ವರ್ಗದ ಆರ್ಚಕರಿಗೆ ಆಹಾರ ಕಿಟ್ ವಿತರಣೆ, ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯ ಫಲಾನುಭವಿಗಳಿಗೆ ಆಹಾರ ಸಾಮಗ್ರಿ ವಿತರಿಸಿದರು.

ತೋಟಗಾರಿಕೆ ಇಲಾಖೆಯಿಂದ ಅರ್ಹ ಬೆಳೆಗಾರರಿಗೆ ಹಾಗೂ ಕಾರ್ಮಿಕ ಇಲಾಖೆಯಿಂದ ಅಸಂಘಟಿತ ಕಾರ್ಮಿಕರಿಗೆ ಪರಿಹಾರ ಮೊತ್ತ ಮಂಜೂರು ಸ್ವೀಕೃತಿ ಪತ್ರವನ್ನು ಸಚಿವರು ಫಲಾನುಭವಿಗಳಿಗೆ ವಿತರಿಸಿದರು.

ಇದೇ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನೀಡಿದ ಆಮ್ಲಜನಕ ಸಾಂದ್ರಕ ಯಂತ್ರ ಹಾಗೂ 3 ಟನ್ ಆಮ್ಲಜನಕ ಲಿಕ್ವಿಡ್‌ ಅನ್ನು ಸಚಿವರು ಜಿಲ್ಲಾ ಆರೋಗ್ಯಾಧಿಕಾರಿಗೆ ಹಸ್ತಾಂತರಿಸಿದರು.

ಜಿಲ್ಲೆಯ ಗ್ರಾಮ ಪಂಚಾಯಿತಿಗಳಿಗೆ ಎನ್ 95 ಮಾಸ್ಕ್ ಹಾಗೂ ಪಲ್ಸ್ ಆಕ್ಸಿಮೀಟರ್ ಉಪಕರಣಗಳನ್ನು ಸಚಿವರು ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ಸಾಂಕೇತಿಕವಾಗಿ ವಿತರಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಸಹಾಯವಾಣಿಯನ್ನು ಉದ್ಘಾಟಿಸಿದರು.

***

ಈಗಾಗಲೇ ಮೊದಲನೇ ಡೋಸ್ ಲಸಿಕೆ ಪಡೆದವರು ಎರಡನೇ ಲಸಿಕೆಯನ್ನು ನಿಗದಿತ ಅವಧಿಯಲ್ಲಿ ಪಡೆಯುವಂತಾಗಲು ಆರೋಗ್ಯ ಇಲಾಖೆ ನಿಗಾ ವಹಿಸಬೇಕು.
–ಆರ್. ಶಂಕರ್, ಜಿಲ್ಲಾ ಉಸ್ತುವಾರಿ ಸಚಿವ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT