ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ನಿಯಂತ್ರಿಸಲು ವಿಫಲ: ಶಾಸಕ ಶರಣಬಸಪ್ಪ ದರ್ಶನಾಪುರ ಟೀಕೆ

ಸರ್ಕಾರದ ವಿರುದ್ಧ ಶಾಸಕ ಶರಣಬಸಪ್ಪ ದರ್ಶನಾಪುರ ಟೀಕೆ
Last Updated 22 ಏಪ್ರಿಲ್ 2021, 7:01 IST
ಅಕ್ಷರ ಗಾತ್ರ

ಭೀಮರಾಯನಗುಡಿ (ಶಹಾಪುರ): ಕೊರೊನಾ ಸೋಂಕು ಹೆಚ್ಚು ಹರಡುತ್ತಿದ್ದು, ಜನರು ಆತಂಕಕ್ಕೆ ಒಳಗಾಗಿದ್ದಾರೆ. ಕೋವಿಡ್ ರೋಗಿಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ಔಷಧಿ ಹಾಗೂ ಇನ್ನಿತರ ಸೌಲಭ್ಯಗಳ ಕೊರತೆ ಎದ್ದು ಕಾಣುತ್ತಿದೆ. ಸರ್ಕಾರ ಜನತೆಯ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಶಾಸಕ ಶರಣಬಸಪ್ಪ ದರ್ಶನಾಪುರ ಆರೋಪಿಸಿದರು.

ತಾಲ್ಲೂಕಿನ ಭೀಮರಾಯನಗುಡಿ ಅತಿಥಿಗೃಹದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಈಗ ನಗರ ಪ್ರದೇಶದಲ್ಲಿ ಹೆಚ್ಚು ಕೊರೊನಾ ಪ್ರಕರಣ ಜಾಸ್ತಿಯಾಗುತ್ತಿರುವ ಬಗ್ಗೆ ವರದಿ ಬರುತ್ತಿವೆ. ಮುಂದೆ ಗ್ರಾಮೀಣ ಪ್ರದೇಶಕ್ಕೆ ಸೋಂಕು ಹರಡಿದರೆ ಹೆಚ್ಚಿನ ಸಂಕಷ್ಟ ಎದುರಾಗಬಹುದು. ಸರ್ಕಾರ ಎಚ್ಚೆತ್ತುಕೊಂಡು ಪ್ರತಿ ಪ್ರಾಥಮಿಕ ಆರೋಗ್ಯ ಕೆಂದ್ರಗಳಲ್ಲಿ ಸೂಕ್ತ ಸೌಕರ್ಯಗಳನ್ನು ನೀಡಬೇಕು ಎಂದು ಮನವಿ ಮಾಡಿದರು.

ಕೊರೊನಾ ನಿಯಂತ್ರಣಕ್ಕೆ ಸಾರ್ವಜನಕರ ಪಾತ್ರವು ಮುಖ್ಯವಾಗಿದೆ. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸುರಕ್ಷಿತ ಅಂತರ ಕಾಯ್ದುಕೊಳ್ಳಬೇಕು. ಧಾರ್ಮಿಕ ಹಾಗೂ ರಾಜಕೀಯ ಸಮಾರಂಭದಿಂದ ಕೆಲ ದಿನ ದೂರ ಉಳಿದುಕೊಳ್ಳಬೇಕು ಎಂದರು.

ಲಸಿಕೆ ಹಾಕಿಸಿಕೊಳ್ಳಿ: ಕೊರೊನಾ ವೈರಸ್ ದೇಹದಲ್ಲಿ ಹೆಚ್ಚು ಪ್ರಭಾವ ಶಾಲಿಯಾಗದಂತೆ ತಡೆಗಟ್ಟುವ ಮುಂಜಾಗ್ರತಾ ಕ್ರಮವಾಗಿ ಪ್ರತಿಯೊಬ್ಬರು ಲಸಿಕೆ ಹಾಕಿಸಿಕೊಳ್ಳಬೇಕು. ಕಾಳ ಸಂತೆಯಲ್ಲಿ ಲಸಿಕೆಯನ್ನು ದುಬಾರಿ ಬೆಲೆಗೆ ಮಾರಾಟವಾಗುವುದನ್ನು ತಡೆಯಬೇಕು. ಸರ್ಕಾರ ಜಾರಿಗೆ ತರಲು ಹೊರಟಿರುವ ರಾತ್ರಿ ಕರ್ಪ್ಯೂ ಅವೈಜ್ಞಾನಿಕವಾಗಿದೆ. ವೇಗವಾಗಿ ಕೊರೊನಾ ಹರಡುವುದನ್ನು ತಡೆಯಲು ಲಾಕ್‌ಡೌನ್ ಅಗತ್ಯವಾಗಿದೆ ಎಂದು ಅವರು ಸಲಹೆ ನೀಡಿದರು.

ಕಾಂಗ್ರೆಸ್ ಪಕ್ಷದ ಮಾಧ್ಯಮ ವಕ್ತಾರ ಮಲ್ಲಪ್ಪ ಉಳಂಡಗೇರಿ ಗೋಗಿ ಮತ್ತು ಪ್ರಮುಖರು ಇದ್ದರು.

‘ಕೋಮಾಕ್ಕೆ ಜಾರಿದ ರಾಜ್ಯ ಸರ್ಕಾರ’

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೋವಿಡ್‌ನಿಂದಾಗಿ ಆಸ್ಪತ್ರೆ ಸೇರಿದ್ದಾರೆ. ಮೂವರು ಉಪ ಮುಖ್ಯಮಂತ್ರಿಗಳಿದ್ದರೂ ರಾಜ್ಯಪಾಲರು ಸರ್ವ ಪಕ್ಷಗಳ ಸಭೆಯಲ್ಲಿ ಮಧ್ಯೆ ಪ್ರವೇಶ ಮಾಡಿದ್ದು, ಸರಿಯಲ್ಲ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಮರಿಗೌಡ ಪಾಟೀಲ ಹುಲಕಲ್ ತಿಳಿಸಿದರು.

ಈ ಘಟನೆ ರಾಜ್ಯ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದನ್ನು ಸೂಚಿಸುತ್ತದೆ. ಕೊರೊನಾದಿಂದಾಗಿ ಜನರು ಸಂಕಷ್ಟದಲ್ಲಿದ್ದಾರೆ. ಇಂಥ ಸಂದರ್ಭದಲ್ಲಿ ಅವರಿಗೆ ನೆರವಿಗೆ ನಿಲ್ಲಬೇಕಾದ ಸರ್ಕಾರ ಕೋಮಾ ಸ್ಥಿತಿಗೆ ಜಾರಿದೆ ಎಂದು ಅವರು ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT