ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಲಸಕ್ಕೆ ಮಕ್ಕಳ ನೇಮಿಸಿದರೆ ಕಠಿಣ ಕ್ರಮ: ರವೀಂದ್ರ ಹೊನೋಲೆ

Published 7 ಡಿಸೆಂಬರ್ 2023, 15:45 IST
Last Updated 7 ಡಿಸೆಂಬರ್ 2023, 15:45 IST
ಅಕ್ಷರ ಗಾತ್ರ

ಯಾದಗಿರಿ: ಬಾಲಕಾರ್ಮಿಕ ಪದ್ಧತಿ ನಿಷೇಧಿಸಲು ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ ಕಾಯ್ದೆ ಜಾರಿಗೆಯಲ್ಲಿದ್ದು, ಕಾಯ್ದೆಯನ್ವಯ ಎಲ್ಲ ಉದ್ಯೋಗ ಮತ್ತು ಪ್ರಕ್ರಿಯೆಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮತ್ತು 14ರಿಂದ 18 ವರ್ಷದ ಕಿಶೋರ ಕಾರ್ಮಿಕ ಮಕ್ಕಳನ್ನು ಕೆಲಸಕ್ಕೆ ನಿಯೋಜನೆ ಮಾಡಬಾರದು. ಕಾಯ್ದೆ ಉಲ್ಲಂಘಿಸಿದ್ದಲ್ಲಿ ಮಾಲೀಕರ ವಿರುದ್ಧ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ರವೀಂದ್ರ ಹೊನೋಲೆ ಹೇಳಿದರು.

ತಾಲ್ಲೂಕು ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಸಂಯುಕ್ತಾಶ್ರಯದಲ್ಲಿ ತಹಶೀಲ್ದಾರ್‌ ಕಚೇರಿಯಿಂದ ಸುಭಾಷ್ ವೃತ್ತದವರೆಗೆ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ತಿದ್ದುಪಡಿ 2016ರ ಕುರಿತು ಜಾಗೃತಿ ಹಾಗೂ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ತಹಶೀಲ್ದಾರ್‌ ಸುರೇಶ್ ಅಂಕಲಗಿ ಮಾತನಾಡಿ, ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಮಕ್ಕಳನ್ನು ಕೆಲಸಕ್ಕೆ ಇಟ್ಟುಕೊಂಡಲ್ಲಿ ಅಂಥ ಅಂಗಡಿ ಮಾಲೀಕರ ವಿರುದ್ಧ ₹ 20-50 ಸಾವಿರಗಳವರೆಗೆ ದಂಡ ಮತ್ತು 6 ತಿಂಗಳಿಂದ 2 ವರ್ಷದವರೆಗೆ ಜೈಲು ಶಿಕ್ಷೆ ಅಥವಾ ಎರಡನ್ನು ವಿಧಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಉಮಾಶ್ರೀ ಮಾತನಾಡಿ, ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಬೇಕೆಂದು ಕಾರ್ಮಿಕ ಇಲಾಖೆಯಿಂದ ನಿರಂತರ ಜನ-ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಆದರೆ, ಮಾಲೀಕರು ಕಾಯ್ದೆ ಲೆಕ್ಕಿಸದೆ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡಲ್ಲಿ ಅಂಥವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ನಗರದ ತಹಶೀಲ್ದಾರ್‌ ಕಚೇರಿಯಿಂದ ಸುಭಾಸ್ ವೃತ್ತದವರೆಗೆ ಜಾಥಾ ಮತ್ತು ರೈಡ್ ಕಾರ್ಯಕ್ರಮವನ್ನು ನಡೆಸಿ, 2 ಬಾಲಕಾರ್ಮಿಕ ಮಕ್ಕಳು ಮತ್ತು 3 ಕಿಶೋರ ಕಾರ್ಮಿಕ ಮಕ್ಕಳು ಸೇರಿ ಒಟ್ಟು 5 ಮಕ್ಕಳನ್ನು ರಕ್ಷಿಸಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಲಾಯಿತು.

ಈ ಸಂದರ್ಭದಲ್ಲಿ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕಿ ರೇಖಾ ಮ್ಯಾಗೇರಿ, ಮಕ್ಕಳ ರಕ್ಷಣಾಧಿಕಾರಿ ಪ್ರೇಮಮೂರ್ತಿ, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಹಣಮಂತ ರೆಡ್ಡಿ, ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕ ರಿಯಾಜ್ ಪಟೇಲ್ ವರ್ಕನಳ್ಳಿ, ಕಾರ್ಮಿಕ ನಿರೀಕ್ಷಕ ಸಾಬೇರಾ ಬೇಗಂ, ಬಿಆರ್‌ಪಿ ಮಲ್ಲಿಕಾರ್ಜುನ ಪೂಜಾರಿ ಹಾಗೂ ಶಿಕ್ಷಣ ಇಲಾಖೆಯ ಸಿಬ್ಬಂದಿ, ಪೊಲೀಸ್ ಇಲಾಖೆಯ ಸಿಬ್ಬಂದಿ, ಶಿಶು ಅಭಿವೃದ್ಧಿ ಯೋಜನಾ ಇಲಾಖೆಯ ಸಿಬ್ಬಂದಿ ಹಾಗೂ ಮಕ್ಕಳ ಸಹಾಯವಾಣಿ 1098ನ ಸಿಬ್ಬಂದಿ, ಕಾರ್ಮಿಕ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT