ಗುರುವಾರ , ಜೂನ್ 24, 2021
28 °C
ಸ್ವಾತಂತ್ರ್ಯೋತ್ಸವ ದಿನಾಚರಣೆ: ಜಿಲ್ಲಾಧಿಕಾರಿಯಿಂದ ರಾಷ್ಟ್ರ ಧ್ವಜಾರೋಹಣ

‘ಕೊರೊನಾ ಮುಕ್ತ ಜಿಲ್ಲೆಯನ್ನಾಗಿಸಲು ಸಹಕರಿಸಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ಮನುಕುಲಕ್ಕೆ ಮಾರಕವಾಗಿರುವ ಕೋವಿಡ್-19 ಸೋಂಕು ದೇಶ ಹಾಗೂ ರಾಜ್ಯದ ಅಭಿವೃದ್ಧಿಯ ವೇಗಕ್ಕೆ ಭಾರಿ ತೊಡಕನ್ನು ಉಂಟು ಮಾಡಿದೆ. ಜನರು ಅಂತರ, ಮಾಸ್ಕ್, ಸ್ಯಾನಿಟೈಜರ್ ಬಳಸಬೇಕು. ಕೋವಿಡ್-19 ಸೋಂಕಿನ ಲಕ್ಷಣಗಳು ಕಂಡುಬಂದರೆ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಕೋವಿಡ್-19 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಮಾಡಿಸಿಕೊಳ್ಳವ ಮೂಲಕ ಜಿಲ್ಲೆಯನ್ನು ಕೊರೊನಾ ಮುಕ್ತವಾಗಿಸಲು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಅವರು ಹೇಳಿದರು.

ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಶನಿವಾರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ನಗರಸಭೆ ಹಾಗೂ ಭಾವೈಕ್ಯತಾ ಸಮಿತಿ ಸಹಯೋಗದಲ್ಲಿ ಆಯೋಜಿಸಿದ್ದ 74ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಕೋವಿಡ್-19 ಸೋಂಕಿತರನ್ನು ಪತ್ತೆ ಹಚ್ಚಲು ಆರ್‌ಟಿಪಿಸಿಆರ್ ಪ್ರಯೋಗಾಲಯವನ್ನು ಜಿಲ್ಲೆಯ ನೂತನ ಜಿಲ್ಲಾಸ್ಪತ್ರೆಯಲ್ಲಿ ಸ್ಥಾಪಿಸಲಾಗಿದ್ದು, ಇಲ್ಲಿ ಪ್ರತಿದಿನ ಸುಮಾರು 200ಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಿ ಫಲಿತಾಂಶ ನೀಡಲಾಗುತ್ತಿದೆ. ಸೋಂಕಿತರನ್ನು ಶೀಘ್ರವಾಗಿ ಪತ್ತೆ ಹಚ್ಚಿ ಚಿಕಿತ್ಸೆ ನೀಡಲು ರ್‍ಯಾಪಿಡ್ ಆ್ಯಂಟಿಜೆನ್ ಪರೀಕ್ಷೆಗಳನ್ನು ಜಿಲ್ಲಾಸ್ಪತ್ರೆ ಸೇರಿದಂತೆ ಜಿಲ್ಲೆಯ ವಿವಿಧೆಡೆ ಕೈಗೊಳ್ಳಲಾಗುತ್ತಿದೆ. ಇದುವರೆಗೆ 6,055 ಮಾದರಿಗಳ ಪರೀಕ್ಷೆ ನಡೆಸುವ ಮೂಲಕ 586 ಸೋಂಕಿತರನ್ನು ಪತ್ತೆ ಹಚ್ಚಲಾಗಿದೆ. ಜಿಲ್ಲೆಯಾದ್ಯಂತ ತ್ವರಿತಗತಿಯಲ್ಲಿ ಪರೀಕ್ಷೆ ನಡೆಸಲು ಹೆಚ್ಚಿನ ರ್‍ಯಾಪಿಡ್ ಆ್ಯಂಟಿಜೆನ್ ಕಿಟ್‍ಗಳಿಗೆ ಬೇಡಿಕೆ ಸಲ್ಲಿಸಲಾಗಿದೆ ಎಂದು ಹೇಳಿದರು.

ಪ್ರವಾಹ ತಡೆಗಟ್ಟಲು ಕ್ರಮ: ಜಿಲ್ಲಾಡಳಿತವು ಪ್ರವಾಹ ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಸಂಭವನೀಯ ಪ್ರವಾಹ ಪೀಡಿತ ಗ್ರಾಮಗಳ ನೊಡಲ್ ಅಧಿಕಾರಿಗಳಿಗೆ ಮುಂಜಾಗ್ರತ ಕ್ರಮವಾಗಿ ಗ್ರಾಮಗಳಿಗೆ ಭೇಟಿ ನೀಡಲು ಸೂಚಿಸಲಾಗಿದೆ. ಯಾವುದೇ ತುರ್ತು ಸಂದರ್ಭದಲ್ಲಿ ಜಿಲ್ಲಾಡಳಿತದ ಸಹಾಯವಾಣಿ–08473-253950 ಸಂಖ್ಯೆಗೆ ಕರೆ ಮಾಡಬಹುದು ಎಂದು ಕೋರಿದರು.

ವಿಶೇಷ ಪ್ಯಾಕೇಜ್: ಕೋವಿಡ್ ಕಾರಣದಿಂದ ಲಾಕ್‍ಡೌನ್ ಘೋಷಣೆಯಾದ ವೇಳೆ ನಿರುದ್ಯೋಗಿಗಳಾದ ಕಾರ್ಮಿಕರಿಗೆ ಪರಿಹಾರ ಧನವಾಗಿ ಪ್ರತಿ ಫಲಾನುಭವಿಗೆ ₹5 ಸಾವಿರ,  28,323 ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರಿಗೆ ₹14.16 ಕೋಟಿ  ಪರಿಹಾರವನ್ನು ಇದುವರೆಗೆ ವಿತರಿಸಲಾಗಿದೆ. ಅದೇ ರೀತಿ ಆಗಸ ವೃತ್ತಿ ಹಾಗೂ ಕ್ಷೌರಿಕ ವೃತ್ತಿಯಲ್ಲಿ ತೊಡಗಿರುವ ಅಸಂಘಟಿತ ವಲಯದ ಒಟ್ಟು 3,511 ಕಾರ್ಮಿಕರಿಗೆ ಒಂದು ಬಾರಿ ಪರಿಹಾರವಾಗಿ ತಲಾ ₹ 5,000 ಪರಿಹಾರವನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ. ತೋಟಗಾರಿಕೆ ಇಲಾಖೆಯಿಂದ ಸಂಕಷ್ಟಕ್ಕೊಳಗಾದ 22 ಹೂ ಬೆಳೆಗಾರರಿಗೆ ₹3.16 ಲಕ್ಷ, 33 ತರಕಾರಿ ಬೆಳೆಗಾರರಿಗೆ ₹3.27 ಲಕ್ಷ ಮತ್ತು 28 ಹಣ್ಣು ಬೆಳೆಗಾರರಿಗೆ ₹3.10 ಲಕ್ಷ ಪರಿಹಾರ ವಿತರಿಸಲಾಗಿದೆ ಎಂದು ಹೇಳಿದರು.

ನಾಲಾ ಹೂಳೆತ್ತುವ ಯೋಜನೆ: ಕೋವಿಡ್-19 ಸಂದರ್ಭದಲ್ಲಿ ಜಿಲ್ಲಾಡಳಿತವು ಭಾರತೀಯ ಜೈನ ಸಂಘಟನೆಯ ಸಹಯೋಗದೊಂದಿಗೆ ಜಿಲ್ಲೆಯ ಒಟ್ಟು 12 ಕೆರೆಗಳ ನಾಲಾ ಹೂಳೆತ್ತುವ ಕಾಮಗಾರಿ ಕೈಗೊಳ್ಳಲಾಗಿದೆ. ಸುಮಾರು ಹತ್ತು ವರ್ಷಗಳಿಂದ ತುಂಬದ ಯಾದಗಿರಿ ದೊಡ್ಡ ಕೆರೆ ಸಂಪೂರ್ಣ ಭರ್ತಿಯಾಗಿರುವುದು ವಿಶೇಷ. ಜಿಲ್ಲಾಡಳಿತದ ಈ ಕಾರ್ಯಕ್ಕೆ ರೈತರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿರುವುದು ಸಂತಸದ ಸಂಗತಿ ಎಂದು ತಿಳಿಸಿದರು.

ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆ: ಈ ಯೋಜನೆಯಡಿ ಅತಿ ಹೆಚ್ಚು ಪರಿಶಿಷ್ಟ ಜಾತಿಯ ಜನರು ವಾಸವಾಗಿರುವ ಜಿಲ್ಲೆಯ ಒಟ್ಟು 37 ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ. ಯಾದಗಿರಿ ತಾಲ್ಲೂಕಿನ- 13, ಶಹಾಪುರ ತಾಲ್ಲೂಕಿನ-7, ಸುರಪುರ ತಾಲ್ಲೂಕಿನ 17 ಗ್ರಾಮಗಳು ಆಯ್ಕೆಯಾಗಿವೆ. 2018-19ನೇ ಸಾಲಿಗೆ 10, 2019-20ನೇ ಸಾಲಿಗೆ 10 ಗ್ರಾಮಗಳು ಸೇರಿದಂತೆ ಇತ್ತೀಚಿಗೆ ಹೆಚ್ಚುವರಿಯಾಗಿ 17 ಗ್ರಾಮಗಳನ್ನು ಆದರ್ಶ ಗ್ರಾಮಗಳ ಪಟ್ಟಿಗೆ ಸೇರಿಸಲಾಗಿದೆ. ಇದಕ್ಕಾಗಿ ಒಟ್ಟಾರೆ ₹177 ಕೋಟಿ ಬಿಡುಗಡೆಯಾಗಿದ್ದು, ಕ್ರಿಯಾಯೋಜನೆ ಹಾಗೂ ಅಂದಾಜು ಪತ್ರಿಕೆ ತಯಾರಿಕೆಯಲ್ಲಿದೆ ಎಂದು ಹೇಳಿದರು.

ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಸನಗೌಡ ಪಾಟೀಲ ಯಡಿಯಾಪುರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ ಸೋನವಣೆ, ಪ್ರೋಬೇಷನರಿ ಐಎಎಸ್ ಅಧಿಕಾರಿ ಅಶ್ವಿಜಾ, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಸಾರ್ವಜನಿಕರು ಇದ್ದರು.

ಲಿಂಗೇರಿ ಸ್ಟೇಷನ್ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಂಗೀತ ಶಿಕ್ಷಕ ಚಂದ್ರಶೇಖರ ಗೋಗಿ ಹಾಗೂ ತಂಡದವರು ನಾಡಗೀತೆ ಹಾಡಿದರು. ಸಹಾಯಕ ಆಯುಕ್ತ ಶಂಕರಗೌಡ ಎಸ್.ಸೋಮನಾಳ ವಂದಿಸಿದರು. ಉಪನ್ಯಾಸಕಿ ಡಾ.ಜ್ಯೋತಿಲತಾ ತಡಿಬಿಡಿಮಠ ನಿರೂಪಿಸಿದರು.

ಜಿಲ್ಲೆ ದ್ವಿತೀಯ ಪಿಯುಸಿ ಶೇ 58.38 ಫಲಿತಾಂಶ ಬಂದಿದೆ. ಕಳೆದ ಬಾರಿಗೆ ಹೊಲಿಸಿದರೆ ಶೇ 5.38 ಪ್ರತಿಶತ ಹೆಚ್ಚಳವಾಗಿದ್ದು, 28ನೇ ಸ್ಥಾನಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.