ಯಾದಗಿರಿ: ಮಹಿಳಾ ಸಬಲೀಕರಣ ಮತ್ತು ಯುವ ಸಮುದಾಯದ ಶ್ರೇಯೋಭಿವೃದ್ಧಿಗಾಗಿ ರಾಜ್ಯ ಸರ್ಕಾರವು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು, ಅರ್ಹ ಫಲಾನುಭವಿಗಳಿಗೆ ಇದರ ಲಾಭ ದೊರಕಿಸುವಂತೆ ರಾಜ್ಯ ಗ್ಯಾರಂಟಿ ಯೋಜನೆಗಳು ಅನುಷ್ಠಾನ ಪ್ರಾಧಿಕಾರದ ಕಲಬುರಗಿ ವಿಭಾಗದ ಉಪಾಧ್ಯಕ್ಷ ಎಸ್.ಆರ್.ಮೆಹರೋಜ್ ಖಾನ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಪಂಚ ಗ್ಯಾರಂಟಿ ಯೋಜನೆಗಳು ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳಾದ ಶಕ್ತಿ ಯೋಜನೆ, ಅನ್ನಭಾಗ್ಯ ಯೋಜನೆ, ಗೃಹಜ್ಯೋತಿ ಯೋಜನೆ ಹಾಗೂ ಗೃಹಲಕ್ಷ್ಮೀ ಯೋಜನೆಯಡಿ ಶೇ 97 ರಷ್ಟು ಪ್ರಗತಿ ಸಾಧಿಸಿರುವುದಕ್ಕೆ ಅಧಿಕಾರಿಗಳಿಗೆ ಅಭಿನಂದಿಸಿದ ಅವರು, ಯುವನಿಧಿ ಯೋಜನೆ ಅಡಿಯ ಕೆಲವು ತೊಡಕುಗಳನ್ನು ನಿವಾರಿಸಿಕೊಳ್ಳುವಂತೆ ತಿಳಿಸಿದರು.
ಮಹಿಳೆಯರ ಮತ್ತು ಯುವ ಸಮುದಾಯದ ಸಬಲೀಕರಣಕ್ಕಾಗಿ ದೇಶದಲ್ಲಿಯೇ ಮಹತ್ವಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ ರಾಜ್ಯ ಕರ್ನಾಟಕವಾಗಿದೆ. ಸಾಮಾಜಿಕ ಚಿಂತನೆಯೊಂದಿಗೆ ಈ ಯೋಜನೆ ಸರ್ಕಾರ ರೂಪಿಸಿದ್ದು ಸಂಬಂಧ ಪಟ್ಟ ಅಧಿಕಾರಿಗಳು ಪಂಚ ಗ್ಯಾರಂಟಿ ಯೋಜನೆಯಡಿ ಶೇ 100 ರಷ್ಟು ಪ್ರಗತಿ ಸಾಧಿಸಲು ವಿಶೇಷ ಗಮನ ನೀಡುವಂತೆ ಸೂಚಿಸಿದರು.
ಜಿಲ್ಲೆಯ ತಾಲ್ಲೂಕು ಹಾಗೂ ಗ್ರಾಮ ಮಟ್ಟದಲ್ಲಿ ಸಭೆಗಳನ್ನು ನಡೆಸುವುದರ ಜೊತೆಗೆ ಸಂಬಂಧಿಸಿದ ಪಂಚ ಗ್ಯಾರಂಟಿ ಯೋಜನೆಗಳಡಿ ಸೌಲಭ್ಯದ ಬಗ್ಗೆ ಸಂವಾದ ನಡೆಸಿ ಸೂಕ್ತ ಅರಿವು ಮೂಡಿಸುವಂತೆ ತಿಳಿಸಿದರು.
ಮಹಿಳೆಯರಿಗೆ ಶಕ್ತಿ ತುಂಬುವ ಕಾರ್ಯವನ್ನು ಸರ್ಕಾರ ಮಾಡಿದ್ದು, ಫಲಾನುಭವಿಗಳಿಗೆ ಇದರ ಲಾಭ ದೊರಕಿಸಲು ಸಂಬಂಧಿಸಿದ ಅಧಿಕಾರಿಗಳು ಇನ್ನಷ್ಟು ಪ್ರಯತ್ನ ಮಾಡುವಂತೆ ಸಲಹೆ ನೀಡಿದರು.
ಜಿಲ್ಲೆಯಲ್ಲಿ ಶಕ್ತಿ ಯೋಜನೆಯಡಿ 2.96 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದು, ₹101.23 ಕೋಟಿ ಆದಾಯವಾಗಿದೆ. ಅನ್ನಭಾಗ್ಯ ಯೋಜನೆಯ 2.33 ಲಕ್ಷ ಪಡಿತರ ಚೀಟಿಗಳ ಫಲಾನುಭವಿಗಳಿಗೆ ₹171.05 ಕೋಟಿ ವೆಚ್ಚ ಭರಿಸಲಾಗಿದೆ. ಗೃಹಜ್ಯೋತಿ ಯೋಜನೆಯಡಿ 1.92 ಲಕ್ಷ ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದು, ಜೂನ್ ಅಂತ್ಯದವರೆಗೆ ಸಬ್ಸಿಡಿ ಮೂಲಕ ಒಟ್ಟು ₹76.58 ಕೋಟಿ ರೂಪಾಯಿಗಳನ್ನು ಈ ಯೋಜನೆಯಲ್ಲಿ ಪಾವತಿಸಲಾಗಿದೆ. ಅದರಂತೆ ಗೃಹಲಕ್ಷ್ಮಿ ಯೋಜನೆಯಡಿ 2.53 ಲಕ್ಷ ಮನೆಯ ಒಡತಿಯರಿಗೆ ತಲಾ ₹ 2 ಸಾವಿರ ಡಿಬಿಟಿ ಮೂಲಕ ₹517.43 ಕೋಟಿ ಪಾವತಿಸಲಾಗಿದೆ. ಯುವನಿಧಿ ಯೋಜನೆಯಡಿ 4,840 ಫಲಾನುಭವಿಗಳಿಗೆ ಈ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದರು.
ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ., ಜಿಲ್ಲಾ ಪಂಚಾಯಿತಿ ಸಿಇಒ ಲವೀಶ್ ಒರ್ಡಿಯಾ, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿಯ ಅಧ್ಯಕ್ಷ ಶ್ರೇಣಿಕ ಕುಮಾರ ದೋಖಾ, ಉಪಾಧ್ಯಕ್ಷ ಬಸವರಾಜ ಬಿಳ್ಹಾರ, ಸದಸ್ಯರಾದ ರಮೇಶ ದೊರೆ, ಹಳ್ಳೆಪ್ಪ ಹವಾಲ್ದಾರ್, ಸಂಜೀವಕುಮಾರ ಕಾವಲಿ, ವಿಜಯಕುಮಾರ ಸೇರಿದಂತೆ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸರ್ಕಾರ ₹53 ಸಾವಿರ ಕೋಟಿ ಮೀಸಲಿಟ್ಟಿದ್ದು 4.25 ಕೋಟಿ ಜನ ಇದರ ಲಾಭ ಪಡೆಯುತ್ತಿದ್ದಾರೆಎಸ್.ಆರ್.ಮೆಹರೋಜ್ ಖಾನ್ ಉಪಾಧ್ಯಕ್ಷ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಕಲಬುರಗಿ ವಿಭಾಗ
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳೊಂದಿಗೆ ಮಹರೋಜ್ ಖಾನ್ ಸಂವಾದ ನಡೆಸಿದರು. ಈಗಾಗಲೇ ಈ ಯೋಜನೆಯಿಂದ ಹಲವು ಕುಟುಂಬಗಳಿಗೆ ನೆರವಾಗಿದೆ. ಕೌಟುಂಬಿಕ ನಿರ್ವಹಣೆ ಮಕ್ಕಳ ವಿದ್ಯಾಭ್ಯಾಸ ಔಷಧಿ ನೆರವು ಸೇರಿದಂತೆ ಶಸ್ತ್ರ ಚಿಕಿತ್ಸೆಗೂ ಹಲವು ರೂಪದಲ್ಲಿ ಗೃಹಲಕ್ಷ್ಮಿ ಯುವನಿಧಿ ಶಕ್ತಿ ಯೋಜನೆಗಳು ನೆರವು ಆಗಿರುವ ಬಗ್ಗೆ ಫಲಾನುಭವಿಗಳಿಂದ ಮಾಹಿತಿ ಪಡೆದ ಅವರು ಯುವನಿಧಿ ಯೋಜನೆ ಅಡಿ ಸಣ್ಣಪುಟ್ಟ ತೊಡಕುಗಳನ್ನು ನಿವಾರಿಸಿ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ದೊರಕಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅದರಂತೆ ಈ ಯೋಜನೆಗಳ ಅಡಿ ಯಾವುದೇ ರೀತಿಯ ದೂರುಗಳಿದ್ದಲ್ಲಿ ಸಾಕ್ಷ್ಯಗಳ ಆಧಾರದಲ್ಲಿ ಅವಶ್ಯಕ ಕ್ರಮ ಕೈಗೊಳ್ಳಲು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.