ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂವಿಧಾನ ಓದಿ ಅರ್ಥೈಸಿಕೊಳ್ಳುವುದು ಮುಖ್ಯ

ಸಂವಿಧಾನ ಓದು ಕಾರ್ಯಾಗಾರ, ಸಂವಾದದಲ್ಲಿ ನ್ಯಾ.ನಾಗಮೋಹನದಾಸ ಅಭಿಪ್ರಾಯ
Last Updated 11 ಡಿಸೆಂಬರ್ 2019, 9:57 IST
ಅಕ್ಷರ ಗಾತ್ರ

ಯಾದಗಿರಿ: ‘ಪ್ರಸ್ತುತ ಸಮಾಜದಲ್ಲಿ ಸಂವಿಧಾನವನ್ನು ಓದಿ ಸರಿಯಾದ ರೀತಿಯಲ್ಲಿ ಅರ್ಥೈಸಿಕೊಳ್ಳುವ ಜೊತೆಗೆ ಅದರಲ್ಲಿನ ಅಂಶಗಳನ್ನು ಜಾರಿ ಮಾಡುವ ಅಥವಾ ಸಂವಿಧಾನದ ಆಶಯದಂತೆ ನಡೆದುಕೊಳ್ಳುವ ಅಗತ್ಯವಿದೆ’ ಎಂದು ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್‌ ಹೇಳಿದರು.

ಜಿಲ್ಲಾಡಳಿತ ಭವನ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪೊಲೀಸ್ ಇಲಾಖೆ ವತಿಯಿಂದ ಸೋಮವಾರ ಆಯೋಜಿಸಿದ್ದ ಸಂವಿಧಾನ ಓದು ಕಾರ್ಯಾಗಾರ ಹಾಗೂ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ನಮ್ಮ ಸಂವಿಧಾನವನ್ನು ಯಾವುದೇ ಭಾಷೆಯಲ್ಲಿ ಹತ್ತು ಬಾರಿ ಓದಿದರೂ ಬೇಗ ಅರ್ಥವಾಗುವುದಿಲ್ಲ. ಅದೊಂದು ಕಥೆ, ಕಾದಂಬರಿ ಅಥವಾ ಕವಿತೆಯಲ್ಲ. ಅದೊಂದು ರಾಜಕೀಯ, ಆರ್ಥಿಕ ಹಾಗೂ ಸಾಮಾಜಿಕ ಕಾರ್ಯಕ್ರಮವಾಗಿದೆ. ಸಂವಿಧಾನ ಅರ್ಥವಾಗಲು ಅದರ ಹಿನ್ನೆಲೆ, ಪ್ರಸ್ತುತತೆ ತಿಳಿದಿರಬೇಕು. ದೇಶವನ್ನು ಅರ್ಥ ಮಾಡಿಕೊಳ್ಳದ ಹೊರತು, ಸಂವಿಧಾನ ಅರ್ಥವಾಗುವುದಿಲ್ಲ’ ಎಂದರು.

‘ಸಂವಿಧಾನ ಅನುಷ್ಠಾನಕ್ಕೆ ಬಂದು 69 ವರ್ಷಗಳು ಕಳೆದರೂ ಪ್ರಸ್ತುತವಾಗಿದೆ. ಸಂವಿಧಾನದ ಮೂಲ ತತ್ವಗಳೇ ನಮ್ಮ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗದ ನಿತ್ಯದ ಕೆಲಸಗಳನ್ನು ಮುನ್ನಡೆಸುತ್ತವೆ. ಆದರೆ, ದೇಶದ ಬಹುಪಾಲು ಜನ ಸಂವಿಧಾನವನ್ನು ಓದಲಿಲ್ಲ. ಸರ್ಕಾರಗಳು ಕೂಡ ಸಂವಿಧಾನದ ಕಾರ್ಯಗಳನ್ನು ತಿಳಿಸಿಲ್ಲ. ಹೀಗಾಗಿ ನಾವೆಲ್ಲರೂ ನಮ್ಮ ಸಂವಿಧಾನವನ್ನು ಸರಿಯಾದ ರೀತಿಯಲ್ಲಿ ಅರ್ಥೈಸಿ, ಅದರಂತೆ ನಡೆದುಕೊಂಡರೆ ಕೆಲವೇ ವರ್ಷಗಳಲ್ಲಿ ನಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದು’ ಎಂದು ಅಭಿಪ್ರಾಯಪಟ್ಟರು.

ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಮಾತನಾಡಿ, ‘ದೇಶ ವಿವಿಧತೆಯಲ್ಲಿ ಏಕತೆ ಹೊಂದಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರು ಬರೆದ ಸಂವಿಧಾನವು ಲಿಖಿತ ಮತ್ತು ವಿಶ್ವದಲ್ಲಿಯೇ ಅತಿದೊಡ್ಡ ಸಂವಿಧಾನವಾಗಿದೆ. ಇದರಲ್ಲಿ ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಅವರ ರಕ್ಷಣೆಗಾಗಿ ಹೆಚ್ಚಿನ ಆದ್ಯತೆ ನೀಡಲಾಗಿದೆ. ಪ್ರಾದೇಶಿಕ ಸಮತೋಲನೆಗಾಗಿ ಕಲಂ 371 (ಜೆ) ಜಾರಿಗೆ ತರಲಾಗಿದೆ. ಒಟ್ಟಿನಲ್ಲಿ ಎಲ್ಲ ಸಮಸ್ಯೆಗಳಿಗೂ ಸಂವಿಧಾನದಲ್ಲಿ ಪರಿಹಾರಗಳಿವೆ’ ಎಂದರು.

ಸಮುದಾಯ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ದೇವಿಂದ್ರಪ್ಪಗೌಡ ಮಾತನಾಡಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ ಅರ್ಜುನ ಬನಸೊಡೆ ಸಂವಿಧಾನದ ಪೀಠಿಕೆ ಬೋಧಿಸಿದರು.

ಅಖಿಲ ಭಾರತ ವಕೀಲರ ಸಂಘದ ಕೆ.ಆರ್.ವೆಂಕಟೇಶಗೌಡ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಶಿವನಗೌಡ, ಜಿಲ್ಲಾ ಪಂಚಾಯಿತಿ ಸಿಇಒ ಶಿಲ್ಪಾ ಶರ್ಮಾ, ಎಸ್ಪಿ ಋಷಿಕೇಶ್ ಭಗವಾನ್ ಸೋನವಣೆ, ಹಿರಿಯ ಸಿವಿಲ್ ನ್ಯಾಯಾಧೀಶ ನಾಮದೇವ ಕೆ.ಸಾಲಮಂಟಪಿ, ಸಿವಿಲ್ ನ್ಯಾಯಾಧೀಶರಾದ ಲೋಕೇಶ್ ಧನಪಾಲ ಹವಲೆ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಸ್ಮೀತಾ ಮಾಲಗಾಂವೆ, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಬಸವರಾಜ ಪಾಟೀಲ ಕ್ಯಾತನಾಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಪ್ರಭಾಕರ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಚನ್ನಬಸವ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಸಿ.ಎಸ್.ಮಾಲಿಪಾಟೀಲ ಇದ್ದರು.

ವಕೀಲ ಎಸ್.ಪಿ.ನಾಡೇಕರ್ ಸ್ವಾಗತಿಸಿದರು. ಉಪನ್ಯಾಸಕಿ ಡಾ.ಜ್ಯೋತಿಲತಾ ತಡಿಬಿಡಿಮಠ ನಿರೂಪಿಸಿದರು. ವಕೀಲ ಬಿ.ಜಿ.ಪಾಟೀಲ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT