ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಹೋರಾಟಗಾರರ ಶ್ರಮದಿಂದ ವಿಮೋಚನೆ’

ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ ಅಭಿಮತ
Last Updated 18 ಸೆಪ್ಟೆಂಬರ್ 2021, 4:00 IST
ಅಕ್ಷರ ಗಾತ್ರ

ಯಾದಗಿರಿ: ಸಹಸ್ರ ಹೋರಾಟಗಾರರ ತ್ಯಾಗ, ಬಲಿದಾನಗಳಿಂದ ಹೈದರಾಬಾದ್-ಕರ್ನಾಟಕ (ಕಲ್ಯಾಣ ಕರ್ನಾಟಕ) ವಿಮೋಚನಾ ಹೋರಾಟ ಈ ನಾಡಿನ ಭವ್ಯ ಇತಿಹಾಸವಾಗಿ ಉಳಿದಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ ಅವರು ಹೇಳಿದರು.

ನಗರದ ಜ್ಯೂನಿಯರ್‌ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದ ಆವರಣದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ನಗರಸಭೆ ಸಹಯೋಗದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡಿದ ನಂತರ ಅವರು ಮಾತನಾಡಿದರು.

ಕಲ್ಯಾಣ ಕರ್ನಾಟಕ ಪ್ರದೇಶದ ಜನತೆ ಎರಡೆರಡು ಬಾರಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದು, ಈ ಭಾಗದ ಜನರ ದೇಶಪ್ರೇಮ ಮತ್ತು ಕೆಚ್ಚೆದೆಯನ್ನು ಬಿಂಬಿಸುತ್ತದೆ. ಸ್ವಾತಂತ್ರ್ಯ ಹೋರಾಟದ ರೋಚಕ ಇತಿಹಾಸ ಹಾಗೂ ಅದರ ಮಹತ್ವವನ್ನು ನಾವೆಲ್ಲರೂ ಅರಿತು, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನವನ್ನು ಸ್ಮರಿಸಿ, ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.

ಸರ್ಕಾರ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಹಿಂದುಳಿದಿರುವಿಕೆಯನ್ನು ಮನಗಂಡು ವಿಶೇಷ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕಾಗಿಯೇ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸಿ, ಹಲವಾರು ಯೋಜನೆಗಳನ್ನು ಕೈಗೊಂಡು ಜನಪರ ನೀತಿ, ಸಾಮಾಜಿಕ ನ್ಯಾಯ ಮತ್ತು ರೈತರ ಹಿತಾಸಕ್ತಿಗೆ ಹೆಚ್ಚಿನ ಆದ್ಯತೆ ನೀಡುತ್ತಾ ಬಂದಿದ್ದು ಮೂಲ ಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ ಎಂದು ತಿಳಿಸಿದರು.

ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗಾಗಿ ಕಳೆದ 2 ವರ್ಷಗಳಲ್ಲಿ ಸುಮಾರು ₹2,632 ಕೋಟಿ ಅನುದಾನ ಮೀಸಲಿರಿಸಿತ್ತು. ಪ್ರಸಕ್ತ ಸಾಲಿನಲ್ಲೂ ₹1,493 ಕೋಟಿ ಅನುದಾನ ಮೀಸಲಿಡಲಾಗಿದೆ. ಅದರಂತೆ ರಾಜ್ಯ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ನೈರ್ಮಲ್ಯ, ರಸ್ತೆ ಸಂಪರ್ಕ, ಉದ್ಯೋಗ, ಕೌಶಲ್ಯಾಭಿವೃದ್ಧಿ, ಇತ್ಯಾದಿ ಅಂಶಗಳಿಗೆ ಮಹತ್ವದ ಸ್ಥಾನ ನೀಡಿ ಈ ಭಾಗದ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ ಎಂದರು.

ರೈತ, ನೇಕಾರ ಮತ್ತು ಮೀನುಗಾರರ ಉತ್ಪನ್ನಗಳ ಉತ್ಪಾದನೆ ಹಾಗೂ ಮಾರಾಟಕ್ಕೆ ವಿಶೇಷ ಪ್ರೋತ್ಸಾಹ ನೀಡಲು 750 ಅಮೃತ ರೈತ ಉತ್ಪಾದಕ ಸಂಸ್ಥೆಗಳನ್ನು ಸ್ಥಾಪಿಸಿ, ಪ್ರತಿ ಸಂಸ್ಥೆಗೆ ₹30 ಲಕ್ಷ ನಂತೆ ಮೂರು ವರ್ಷದ ಅವಧಿಗೆ ₹225 ಕೋಟಿ ಅನುದಾನ ನೀಡಲಾಗುವುದು. ಆಯ್ದ 750 ಶಾಲೆಗಳಿಗೆ ಸುಸಜ್ಜಿತ ಕಟ್ಟಡ, ಪ್ರಯೋ ಗಾಲಯ, ಗ್ರಂಥಾಲಯ, ಶೌಚಾಲಯ ಇತ್ಯಾದಿ ಸಮಗ್ರ ಸೌಲಭ್ಯ ಒದಗಿಸಲು ತಲಾ ₹10 ಲಕ್ಷದಂತೆ ಒಟ್ಟು ₹75ಕೋಟಿ ವೆಚ್ಚ ಮಾಡಲಾಗುವುದು ಎಂದರು.

ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ನೀಡುವ ಕಾರ್ಯ ಮುಂದುವರಿಯುತ್ತಿದೆ. ಕೋವಿಡ್‍ನ ಎರಡನೇ ಅಲೆಯನ್ನು ನಾವು ಒಗ್ಗಟ್ಟಾಗಿ ಎದುರಿಸಿರುವುದರಿಂದ ಮೂರನೇ ಅಲೆಯಲ್ಲಿಯೂ ಸಾರ್ವಜನಿಕರು ಹೆಚ್ಚಿನ ಮುಂಜಾಗ್ರತೆ ವಹಿಸಬೇಕು ಎಂದು ಮನವಿ ಮಾಡಿದರು.

ಇದಕ್ಕೂ ಮುನ್ನಪೊಲೀಸ್, ಅಬಕಾರಿ, ಅರಣ್ಯ ಇಲಾಖೆ, ಅಗ್ನಿಶಾಮಕ, ಡಿಎಆರ್ ತಂಡಗಳಿಂದ ಪಥಸಂಚಲನ ನಡೆಯಿತು. ಕೋವಿಡ್‌ ಕಾರಣದಿಂದ ಸಾಂಸ್ಕೃತಿಕ ಕಾರ್ಯಕ್ರಮ ರದ್ದುಗೊಳಿಸಲಾಗಿತ್ತು.

ರಾಯಚೂರು ಸಂಸದ ರಾಜಾ ಅಮರೇಶ್ವರ ನಾಯಕ, ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಜಿ.ಪಂ ಸಿಇಒ ಶಿಲ್ಪಾ ಶರ್ಮಾ, ಉಪವಿಭಾಗಾಧಿಕಾರಿ ಪ್ರಶಾಂತ ಹನಗಂಡಿ, ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ಯೂಡಾ ಅಧ್ಯಕ್ಷ ಬಸವರಾಜ ಚಂಡ್ರಕಿ, ನಗರಸಭೆ ಅಧ್ಯಕ್ಷ ವಿಲಾಸ ಪಾಟೀಲ, ಪೌರಾಯುಕ್ತ ಭೀಮಣ್ಣ ನಾಯಕ ಇದ್ದರು.

‘ನೇರ ರೈತರ ಖಾತೆಗೆ ಪರಿಹಾರ’

2021ರ ಜುಲೈ ಮತ್ತು ಆಗಸ್ಟ್‌ನಲ್ಲಿ ಸುರಿದ ಭಾರಿ ಮಳೆ ಹಾಗೂ ಪ್ರವಾಹದಿಂದ ಜಿಲ್ಲೆಯ ವಡಗೇರಾ, ಸುರಪುರ, ಶಹಾಪುರ, ಹುಣಸಗಿ ತಾಲ್ಲೂಕಿನಲ್ಲಿ ಪ್ರವಾಹ ಪರಿಸ್ಥಿತಿ ಉದ್ಭವಿಸಿತ್ತು. ಇಂಥ ಸಂದರ್ಭದಲ್ಲಿ ಕೃಷ್ಣಾ ನದಿ ಪಾತ್ರದ ಗ್ರಾಮಗಳಲ್ಲಿ ಜಿಲ್ಲಾಡಳಿತ ಕೈಗೊಂಡ ಮುನ್ನೆಚ್ಚರಿಕಾ ಕ್ರಮದಿಂದ ಜಿಲ್ಲೆಯಲ್ಲಿ ಯಾವುದೇ ಜನ-ಜಾನುವಾರು ಸಾವು ಸಂಭವಿಸಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ ಹೇಳಿದರು.

ಜಲ ಪ್ರವಾಹದಿಂದ ಸುಮಾರು 2,194 ಹೆಕ್ಟೇರ್ ಕೃಷಿ ಹಾಗೂ 5 ಹೆಕ್ಟೇರ್ ತೋಟಗಾರಿಕಾ ಬೆಳೆ ಹಾನಿಯಾಗಿದೆ. ಈ ರೈತರ ಮಾಹಿತಿಯನ್ನು ‘ಭೂಮಿ ಪರಿಹಾರ’ ತಂತ್ರಾಂಶದಲ್ಲಿ ದಾಖಲು ಮಾಡಲಾಗುತ್ತಿದ್ದು, ಬೆಳೆ ಹಾನಿಯಾದ ರೈತರಿಗೆ ನೇರವಾಗಿ ಪರಿಹಾರವನ್ನು ಬಿಡುಗಡೆ ಮಾಡಲಾಗುವುದು ಎಂದರು.

ನಾರಾಯಣಪುರ ಜಲಾಶಯದಿಂದ ಸುಮಾರು 4.20 ಲಕ್ಷ ಕ್ಯುಸೆಕ್ ನೀರನ್ನು ಕೃಷ್ಣಾ ನದಿಗೆ ಬಿಡಲಾಗಿದ್ದರಿಂದ ಹಾಗೂ ಭಾರಿ ಮಳೆಯಿಂದ ಜಿಲ್ಲೆಯಲ್ಲಿ ರಸ್ತೆ, ಸೇತುವೆ, ವಿದ್ಯುತ್ ಕಂಬ ಇತ್ಯಾದಿ ಮೂಲಸೌಕರ್ಯ ಹಾನಿ ಸೇರಿದಂತೆ ಜಿಲ್ಲೆಯಲ್ಲಿ ₹53 ಕೋಟಿಯಷ್ಟು ಹಾನಿಯಾಗಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT