ಯಾದಗಿರಿ: ಅಕ್ರಮ ಮದ್ಯ ಸಾಗಾಣಿಕೆ ಹಾಗೂ ಇತರೆ ಚುನಾವಣಾ ಸಂಬಂಧಿತ ಕಾನೂನು ಬಾಹಿರ ಚಟುವಟಿಕೆಗಳ ಮೇಲೆ ತೀವ್ರ ನಿಗಾ ವಹಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ, ಜಿಲ್ಲಾ ಚುನಾವಣಾಧಿಕಾರಿ ಸ್ನೇಹಲ್ ಆರ್. ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸುಗಮವಾಗಿ ನಡೆಸುವ ಕುರಿತಂತೆ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.
ಚುನಾವಣಾ ಆಯೋಗವು ಚುನಾವಣಾ ಪ್ರಕ್ರಿಯೆ ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದುಕೊಂಡು ಅಗತ್ಯ ಸಲಹೆ ಸೂಚನೆಗಳನ್ನು ನೀಡಿದ್ದು, ಮುಖ್ಯವಾಗಿ ಚುನಾವಣಾ ನೀತಿ ಸಂಹಿತೆ ಪೂರ್ವ ಹಲವು ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಅಂತರರಾಜ್ಯ ಚೆಕ್ ಫೋಸ್ಟ್ ಗುರುತಿಸಿ. ಈ ಚೆಕ್ ಪೋಸ್ಟ್‌ಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸುವುದೂ ಸೇರಿದಂತೆ ಅಗತ್ಯ ಸಿಬ್ಬಂದಿ ನಿಯೋಜನೆ ಹಾಗೂ ಮೂಲ ಸೌಕರ್ಯ ಕಲ್ಪಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಪಾರದರ್ಶಕ, ನಿರ್ಭೀತ, ನ್ಯಾಯ ಸಮ್ಮತ ಹಾಗೂ ಸುವ್ಯವಸ್ಥಿತ ಚುನಾವಣೆ ನಡೆಯುವಂತೆ ನೋಡಿಕೊಳ್ಳುವ ಮೂಲಕ ಚುನಾವಣೆಯನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಿದರು.
ಚೆಕ್‌ಪೋಸ್ಟ್‌ನಲ್ಲಿ ನಿಯೋಜಿತ ತಂಡವು ಪ್ರತಿ ವರದಿಯನ್ನು ತಪ್ಪದೇ ಸಲ್ಲಿಸುವುದು. ತುರ್ತು ಸಂದರ್ಭದಲ್ಲಿ ತಕ್ಷಣ ವರದಿ ನೀಡುವುದು. ಪೊಲೀಸ್ ಇಲಾಖೆ, ಅಬಕಾರಿ, ವಾಣಿಜ್ಯ ತೆರಿಗೆ ಇಲಾಖೆಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಲು ಸೂಚನೆ ನೀಡಿದರು. ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ನಿಯಮಾನುಸಾರ ವರದಿ ನೀಡಬೇಕು ಎಂದು ಸೂಚಿಸಿದರು.
ಚುನಾವಣಾ ಕಾರ್ಯಕ್ಕೆ ನಿಯೋಜಿತ ತಂಡಗಳು ಸಮನ್ವಯತೆಯಿಂದ ಖುದ್ದಾಗಿ ಪರಿಶೀಲಿಸಿ, ವರದಿ ನೀಡುವಂತೆಯೂ, ಚುನಾವಣಾ ವಿಷಯಗಳನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು. ಯಾವುದೇ ಕರ್ತವ್ಯ ಲೋಪವಾಗದಂತೆ ಚುನಾವಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಚುನಾವಣೆಗೆ ನೇಮಿಸಿದ ಚುನಾವಣಾಧಿಕಾರಿಗಳು ಕ್ರೀಯಾಶೀಲತೆಯಿಂದ ಕಾರ್ಯ ನಿರ್ವಹಿಸಬೇಕು. ಮಾದರಿ ನೀತಿ ಸಂಹಿತೆ, ಚುನಾವಣಾ ವೆಚ್ಚದ ಮೇಲ್ವಿಚಾರಣೆ ಮತಗಟ್ಟೆಗಳಿಗೆ ಮೂಲ ಸೌಕರ್ಯ ಒದಗಿಸುವುದೂ ಸೇರಿದಂತೆ ವಿವಿಧ ಚುನಾವಣಾ ಕಾರ್ಯದ ಮೇಲುಸ್ತುವಾರಿಗಾಗಿ ನಿಯೋಜನೆಗೊಂಡಿರುವ ನೋಡಲ್ ಅಧಿಕಾರಿಗಳು ತಮ್ಮ ತಮ್ಮ ಕಾರ್ಯ ಕ್ಷೇತ್ರಕ್ಕನುಗುಣವಾಗಿ ಸಿದ್ಧತೆ ಕೈಗೊಳ್ಳಬೇಕು ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಮರೇಶ ಆರ್ ನಾಯ್ಕ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಚುನಾವಣೆ ತಹಶೀಲ್ದಾರ್ ಸಂತೋಷರಾಣಿ, ಆರ್‌ಟಿಒ ಅಧಿಕಾರಿ ವಿನಯ್ ಕಾಟೋಕರ್ ಆರ್, ಯಾದಗಿರಿ ತಹಶೀಲ್ದಾರ್ ಅಣ್ಣಾರಾವ್ ಪಾಟೀಲ, ಸುರಪುರ ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ, ಹುಣಸಗಿ ತಹಶೀಲ್ದಾರ್ ಜಗದೀಶ್ ಚೌರ್, ವಡಗೇರಾ ತಹಶೀಲ್ದಾರ್ ಹಲೀಮ್, ಶಹಾಪುರ ತಹಶೀಲ್ದಾರ್ ಉಮಾಶಂಕರ್ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.