ಗುರುವಾರ , ಸೆಪ್ಟೆಂಬರ್ 16, 2021
24 °C
ಸಂಯುಕ್ತ ಹೋರಾಟ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ

ಯಾದಗಿರಿ: ‘ಕಾರ್ಮಿಕರಿಗೆ ಸಮಾನ ವೇತನ ನೀಡಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ಕಾರ್ಮಿಕ ವಿರೋಧಿ - ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆದುಕೊಳ್ಳಬೇಕು. ಸ್ಕೀಮ್ ಕಾರ್ಯಕರ್ತೆಯರನ್ನು ಸರ್ಕಾರಿ ನೌಕರರಂದು ಪರಿಗಣಿಸಿ, ಎಲ್ಲಾ ಕಾರ್ಮಿಕರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿಮಾಡಿ ಎಂದು ಒತ್ತಾಯಿಸಿ ವಿವಿಧ ಕಾರ್ಮಿಕ ಸಂಘಟನೆಗಳಿಂದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು.

ರೈತ ಮತ್ತು ಕಾರ್ಮಿಕ ಸಂಘಟನೆಗಳನ್ನು ಒಳಗೊಂಡಿರುವ ಸಂಯುಕ್ತ ಹೋರಾಟ ಸಮಿತಿ ವತಿಯಿಂದ ರೈತ ಕೃಷಿಕಾರ್ಮಿಕರ ಸಂಘಟನೆ (ಆರ್‌ಕೆಎಸ್) ಮತ್ತು ಎಐಯುಟಿಯುಸಿ ಸಂಯೋಜಿತಗೊಂಡಿರುವ ಆಶಾ, ಅಂಗನವಾಡಿ, ಬಿಸಿಯೂಟ, ಹಾಸ್ಟೆಲ್ ಮತ್ತು ಕಟ್ಟಡ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳು ಸೋಮವಾರ ಜಂಟಿಯಾಗಿ ಪ್ರತಿಭಟನೆ ನಡೆಸಿದರು.

ಗುತ್ತಿಗೆ ಹೊರ ಗುತ್ತಿಗೆ ಪದ್ಧತಿ ರದ್ದು, ಎಲ್ಲರನ್ನೂ ಸರ್ಕಾರಿ ನೌಕರರೆಂದು ಪರಿಗಣಿಸಿ, ಸರ್ಕಾರಿ ಸಂಸ್ಥೆಗಳ ಖಾಸಗೀಕರಣ ನಿಲ್ಲಿಸಬೇಕು. ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಂಬಲ ಬೆಲೆ ನಿಗದಿಪಡಿಸಬೇಕು. ಅಗತ್ಯ ವಸ್ತುಗಳ ಬೆಲೆ ಏರಿಕೆ ತಡೆಗಟ್ಟಿ, ಸಾರ್ವಜನಿಕ ಸಂಸ್ಥೆಗಳ ಮಾರಾಟ ನಿಲ್ಲಿಸಿ. ರೈತರಿಗೆ ವಹಿವಾಟುದಾರಿ ಸಮಸ್ಯೆ ಪರಿಹರಿಸಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು.

ಸಂಯುಕ್ತ ಹೋರಾಟ ಕರ್ನಾಟಕ ಮತ್ತು ಕೇಂದ್ರ ಕಾರ್ಮಿಕ ಸಂಘಟನೆಗಳ ಕರೆಯಾದ ‘ಕಾರ್ಪೋರೇಟ್ ಕಂಪನಿಗಳೇ, ಭಾರತ ಬಿಟ್ಟು ತೊಲಗಿ’ ಚಳವಳಿ ನಡೆಸಿದರು.

ನಂತರ ಹೆಚ್ಚುವರಿ ಜಿಲ್ಲಾಧಿಕಾರಿ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಆರ್‌ಕೆಎಸ್‌ ಜಿಲ್ಲಾ ಘಟಕದ ಅಧ್ಯಕ್ಷ ಶರಣಗೌಡ ಗೂಗಲ್, ಎಐಯುಟಿಯುಸಿ ಜಿಲ್ಲಾಧ್ಯಕ್ಷೆ ಡಿ.ಉಮಾದೇವಿ, ಜಿಲ್ಲಾ ಕಾರ್ಯದರ್ಶಿ ರಾಮಲಿಂಗಪ್ಪ ಬಿ.ಎನ್, ಸಿದ್ದಣ್ಣ, ನಿರ್ಮಲಾ, ಶಾರದಾದೇವಿ, ಕಾವೇರಿ, ಚಂದ್ರಕಲಾ ಸೇರಿದಂತೆ ಆಶಾ, ಅಂಗನವಾಡಿ, ಬಿಸಿಯೂಟ, ಹಾಸ್ಟೆಲ್ ಮತ್ತು ಕಟ್ಟಡ ಕಾರ್ಮಿಕರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.