ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ: ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಆಗದಿರಲಿ -ಬಸನಗೌಡ ಪಾಟೀಲ

ಜಿಲ್ಲಾ ಮಟ್ಟದ ಅಧಿಕಾರಿಗಳೇ ಖುದ್ದು ಸ್ಥಳಕ್ಕೆ ಭೇಟಿ ನೀಡುವಂತೆ ಸೂಚನೆ
Last Updated 18 ಮಾರ್ಚ್ 2021, 3:11 IST
ಅಕ್ಷರ ಗಾತ್ರ

ಯಾದಗಿರಿ: ಬೇಸಿಗೆ ಕಾಲ ಆರಂಭವಾಗಿದ್ದು, ಜಿಲ್ಲೆಯ ಯಾವುದೇ ಹಳ್ಳಿಗಳಲ್ಲಿ ನೀರಿನ ಸಮಸ್ಯೆಯಾಗದಂತೆ ಗಮನ ಹರಿಸಬೇಕು ಎಂದು ಗ್ರಾಮೀಣ ಮತ್ತು ಕುಡಿಯುವ ನೀರು ಇಲಾಖೆ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಸನಗೌಡ ಪಾಟೀಲ ಯಡಿಯಾಪುರ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಮಾಸಿಕ ಪ್ರಗತಿ ಪರಿಶೀಲನಾ (ಕೆಡಿಪಿ) ಸಭೆಯಲ್ಲಿ ಮಾತನಾಡಿದ ಅವರು, ಬೇಸಿಗೆ ಕಾಲದಲ್ಲಿ ಹೆಚ್ಚು ತಾಪಮಾನ ಹೊಂದಿರುವ ಜಿಲ್ಲೆಯಲ್ಲಿ ಈ ಬಾರಿ ನೀರಿನ ಅಭಾವ ಉಂಟಾಗದಂತೆ ನೋಡಿಕೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ಯಾವ ಗ್ರಾಮಗಳಲ್ಲಿ ನೀರಿನ ಸಮಸ್ಯೆಯಾಗಿದೆ ಎಂಬುವುದನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಂದ ವರದಿ ತರಿಸಿಕೊಳ್ಳದೆ, ಖುದ್ದಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳೇ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ತಿಳಿದುಕೊಂಡು ಪರಿಹರಿಸಲು ಮುಂದಾಗಬೇಕು ಎಂದು ತಿಳಿಸಿದರು.

ಜಿ.ಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಶಿವಲಿಂಗಪ್ಪ ಪುಟಗಿ ಮಾತನಾಡಿ, ಜಿಲ್ಲೆಯಲ್ಲಿ ಬಹುತೇಕ ಅಂಗನವಾಡಿ ಮತ್ತು ಶಾಲೆಗಳಿಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಿಲ್ಲ. ಕೇವಲ ಸಿಂಟೆಕ್ಸ್‌ಗಳನ್ನು ಅಳವಡಿಸಲಾಗಿದೆ. ಪೈಪ್‍ಲೈನ್ ಸಂಪರ್ಕ ಇಲ್ಲ ಎಂದು ಆರೋಪಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿಲ್ಪಾ ಶರ್ಮಾ, ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರ ಎಲ್ಲಾ ಅಂಗನವಾಡಿ ಮತ್ತು ಶಾಲೆಗಳಲ್ಲಿ ಮಕ್ಕಳಿಗೆ ನೀರು ಸಿಗುವಂತಾಗಬೇಕು. ನೀರು ಪೂರೈಸುತ್ತಿರುವ ಬಗ್ಗೆ ಸ್ಥಳದ ಛಾಯಾಚಿತ್ರ ತೆಗೆದು ಕಳುಹಿಸಬೇಕು. ಇಲ್ಲವಾದರೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಜಿ.ಪಂನ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಅಮರದೀಪ ಮಾತನಾಡಿ, ರಾಮಸಮುದ್ರ ಜಿ.ಪಂ ಕ್ಷೇತ್ರ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆಯಿದ್ದು, ಇದರ ಕುರಿತು ಗಮನ ಹರಿಸಿ ಪರಿಹಾರ ನೀಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಜೆಸ್ಕಾಂ ಅಧಿಕಾರಿಗಳು ಕುಡಿಯುವ ನೀರಿನ ಸಂಬಂಧ ಅಗತ್ಯವಿರುವ ವಿದ್ಯುತ್ ಅನ್ನು ಸಮರ್ಪಕವಾಗಿ ನೀಡಬೇಕು. ಕೆಲವು ಹಳ್ಳಿಗಳಲ್ಲಿ ವೋಲ್ಟೇಜ್ ಸಮಸ್ಯೆಯಾಗುತ್ತಿದ್ದು, ಇದನ್ನು ಸರಿಪಡಿಸಲು ಕ್ರಮವಹಿಸಬೇಕು. ಕೆಲ ಹಳ್ಳಿಗಳಲ್ಲಿ ಹೈ ಟೆನ್ಷನ್ ವೈರ್ ಮನೆಗಳ ಮೇಲೆ ಹಾದು ಹೋಗಿದ್ದು, ಮುನ್ನೆಚ್ಚರಿಕೆಯಾಗಿ ಅನಾಹುತ ಸಂಭವಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ಜೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ಅಧ್ಯಕ್ಷ ಬಸನಗೌಡ ಯಡಿಯಾಪುರ ಮಾತನಾಡಿ, ಸುರಪುರ ತಾಲ್ಲೂಕಿನ ಮುದನೂರ ಭಾಗದಲ್ಲಿ ವಿದ್ಯುತ್ ತಂತಿ ಮತ್ತು ಕಂಬಗಳು ತುಂಬಾ ಹಳೆಯದಾಗಿದ್ದು, ಅನಾಹುತ ಸಂಭವಿಸುವ ಮುನ್ನ ಬದಲಾವಣೆ ಮಾಡುವಂತೆಸೂಚಿಸಿದರು.

ಕೃಷಿ ಇಲಾಖೆ ಅಭಿವೃದ್ಧಿ ವಿಷಯ ಕೈಗೆತ್ತಿಕೊಂಡಾಗ ಸಿರಿಧಾನಗಳ ಬಗ್ಗೆ ರೈತರಿಗೆ ಮಾಹಿತಿ ನೀಡುವುದು ಮತ್ತು ರೈತ ಸಂಪರ್ಕ ಕೇಂದ್ರಗಳಲ್ಲಿ ಸಿಗುವಂತಾಗಬೇಕು ಎಂದು ಶಹಾಪುರ ತಾ.ಪಂ ಅಧ್ಯಕ್ಷರು ಸಭೆಯ ಗಮನ ಸೆಳೆದರು.

ಈ ಕುರಿತು ಮಾತನಾಡಿದ ಜಿ.ಪಂ ಅಧ್ಯಕ್ಷ ಬಸನಗೌಡ ಪಾಟೀಲ ಯಡಿಯಾಪುರ ಮಾರ್ಚ್ 8ರಂದು ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಫಲಪುಷ್ಪ ಪ್ರದರ್ಶನ ಮತ್ತು ಸಿರಿಧ್ಯಾನ ಮೇಳದಲ್ಲಿ ರೈತರಿಗೆ ಮಾಹಿತಿ ನೀಡಲಾಗಿದೆ.ಜಿಲ್ಲೆಯಲ್ಲಿ ಸಿರಿಧಾನ್ಯಗಳನ್ನು ನ್ಯಾಯಬೆಲೆ ಅಂಗಡಿಗಳ ಮೂಲಕ ಸಾರ್ವಜನಿಕರಿಗೆ ವಿತರಿಸಲು ಅಧಿಕಾರಿಗಳು ಕ್ರಮವಹಿಸಬೇಕುಎಂದರು.

ಕನ್ನಡ, ಹಿಂದಿ, ಇಂಗ್ಲಿಷ್‌ ಅಧ್ಯಯನಗಳ ಬಗ್ಗೆ ಸಂಗೀತ ಶಿಕ್ಷಕರಿಂದ ಕಂಠಪಾಠ ಮಾಡಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಸಲಹೆ ನೀಡಿದರು.

ಈ ವೇಳೆ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಗಿರಿಜಮ್ಮಗೌಡ ರೋಟ್ನಡಗಿ, ಜಿಲ್ಲಾ ಪಂಚಾಯಿತಿ ಸಾಮಾಜಿಕ ಮತ್ತು ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಸರಸ್ವತಿ ಸುಭಾಶಚಂದ್ರ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸುನೀಲ್ ಬಿಸ್ವಾಸ್ ಸೇರಿದಂತೆ ಅಧಿಕಾರಿಗಳು ಇದ್ದರು.

‘ಅಧಿಕಾರಿಗಳಿಗೆ ನೋಟಿಸ್ ನೀಡಿ’
ಕೆಡಿಪಿ ಸಭೆ ಆಯೋಜಿಸುವುದು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು. ಹೀಗಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಸಭೆಗೆ ಹಾಜರಾಗಬೇಕು. ಆದರೆ, ಬುಧವಾರ ಕೆಡಿಪಿ ಸಭೆ ಹಾಜರಾಗದ 25 ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ಜಿ.ಪಂ ಅಧ್ಯಕ್ಷ ಬಸನಗೌಡ ಪಾಟೀಲ ಯಡಿಯಾಪುರ ಸಂಬಂಧಿಸಿದವರಿಗೆ ಸೂಚಿಸಿದರು.

***

ಎಸ್ಸೆಸ್ಸೆಲ್ಸಿ ಪಠ್ಯ ಬೋಧಿಸುವ ಶಿಕ್ಷಕರು ಆಡಳಿತ್ಮಾಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದನ್ನು ಬಿಟ್ಟು ಬೋಧನೆ ಕಡೆ ಹೆಚ್ಚಿನ ಗಮನ ನೀಡಿ.
-ಬಸನಗೌಡ ಪಾಟೀಲ ಯಡಿಯಾಪುರ, ಜಿ.ಪಂ ಅಧ್ಯಕ್ಷ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT