ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನಾವಶ್ಯಕ ಓಡಾಡುವ ವಾಹನ ಜಪ್ತಿ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವರಿಂದ ಮುಂಜಾಗ್ರತಾ ಕ್ರಮಗಳ ಪರಿಶೀಲನೆ
Last Updated 5 ಏಪ್ರಿಲ್ 2020, 14:44 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲೆಯಲ್ಲಿ ಲಾಕ್‍ಡೌನ್ ಕಟ್ಟುನಿಟ್ಟಾಗಿ ಜಾರಿಯಾಗಬೇಕು. ಈ ಸಂಬಂಧ ಜಿಲ್ಲಾಡಳಿತ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಬಿ.ಚವ್ಹಾಣ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ಹರಡದಂತೆ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಭಾನುವಾರ ಪರಿಶೀಲನೆ ನಡೆಸಿ, ಅವರು ಮಾತನಾಡಿದರು.

ಬೀದರ್‌ನಲ್ಲಿ ಒಂದೇ ದಿನ ಕೊರೊನಾ ಸೋಂಕಿತರ ಸಂಖ್ಯೆ ಸ್ಫೋಟವಾಯಿತು. ಕೊರೊನಾ ಸಾಂಕ್ರಾಮಿಕ ರೋಗವಾಗಿರುವುದರಿಂದ ಇದರ ಗಂಭೀರತೆ ಅರಿತು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರು ಸಕಾರಣಗಳಿಲ್ಲದೆ ಮನೆಯಿಂದ ಹೊರಬಂದರೆ ಸೂಕ್ತ ಕ್ರಮ ಜರುಗಿಸಿ. ಅಲ್ಲದೇ, ಅನಾವಶ್ಯಕವಾಗಿ ಓಡಾಡುವ ವಾಹನಗಳನ್ನು ಜಪ್ತಿ ಮಾಡಿ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜನತೆಗೆ ಸಚಿವರ ಮನವಿ: ಕೊರೊನಾ ಮಹಾಮಾರಿಯನ್ನು ಹಿಮ್ಮೆಟ್ಟಿಸಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಾಕಷ್ಟು ಶ್ರಮ ಪಡುತ್ತಿದ್ದಾರೆ. ವೈರಸ್ ನಿಯಂತ್ರಣದಲ್ಲಿ ಸಾರ್ವಜನಿಕರ ಸಹಕಾರ ಅತ್ಯಗತ್ಯ. ನಿಷ್ಕಾಳಜಿಯಿಂದ ಜೀವಕ್ಕೆ ಅಪಾಯ ತಂದುಕೊಳ್ಳಬಾರದು. ಈ ನಿಟ್ಟಿನಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಲಾಕ್‍ಡೌನ್ ನಿಯಮಗಳನ್ನು ಮೀರಿ ಯಾರೂ ಮನೆಯಿಂದ ಹೊರಬರಬಾರದು ಎಂದು ಮನವಿ ಮಾಡಿದರು.

ಖಾಸಗಿ ವೈದ್ಯರ ಸೇವೆಗೆ ಮನವಿ: ಕೊವೀಡ್-19 ಪ್ರಕರಣಗಳಲ್ಲಿ ದಾಖಲಾಗುವ ರೋಗಿಗಳಿಗೆ ಅವಶ್ಯವಿರುವ ವೈದ್ಯಕೀಯ ಸೇವೆ ಒದಗಿಸಲು ಖಾಸಗಿ ವೈದ್ಯರು ಸಹಕಾರ ನೀಡಬೇಕೆಂದು ಮನವಿ ಮಾಡಿದರು.

ಸಂಸದ ಡಾ.ಉಮೇಶ್ ಜಿ.ಜಾಧವ ಮಾತನಾಡಿ, ಬೇಸಿಗೆ ಕಾಲ ಇರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ತೊಂದರೆಯಾಗಬಾರದು. ಕೊರೊನಾ ತಡೆ ಜೊತೆಗೆ ಕುಡಿಯುವ ನೀರಿನ ಸಮಸ್ಯೆ ಸಮರ್ಪಕವಾಗಿ ನಿಭಾಯಿಸುವಂತೆ ಸೂಚಿಸಿದರು.

ಶಾಸಕರಾದ ರಾಜೂಗೌಡ ಹಾಗೂ ವೆಂಕಟರೆಡ್ಡಿಗೌಡ ಮುದ್ನಾಳ ಮಾತನಾಡಿ, ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ವೈಯಕ್ತಿಕ ರಕ್ಷಣಾ ಸಾಧನಾ (ಪಿಪಿಇ), ಮಾಸ್ಕ್ ಸೇರಿದಂತೆ ವೈದ್ಯಕೀಯ ಸಾಮಗ್ರಿಗಳ ಕೊರತೆ ಇದೆ. ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಸಿಬ್ಬಂದಿ ಜೀವಭಯದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂಬುದಾಗಿ ಸಚಿವರ ಗಮನಕ್ಕೆ ತಂದು ಸುದೀರ್ಘ ಚರ್ಚೆ ನಡೆಸಿದರು.

ವಿಧಾನಪರಿಷತ್ ಸದಸ್ಯ ಬಿ.ಜಿ.ಪಾಟೀಲ, ಜಿಲ್ಲೆಯ ಮೇಲುಸ್ತುವಾರಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸರ್ಕಾರದ ಕಾರ್ಯದರ್ಶಿ ಎ.ಬಿ.ಇಬ್ರಾಹಿಂ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾ ಋಷಿಕೇಶ ಭಗವಾನ್ ಸೋನವಣೆ, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ, ಸಹಾಯಕ ಆಯುಕ್ತ ಶಂಕರಗೌಡ ಎಸ್.ಸೋಮನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಎಸ್.ಪಾಟೀಲ ಹಾಗೂ ಇತರರಿದ್ದರು.

***

ಹೊರಗಡೆಯಿಂದ ಬಂದವರನ್ನು ಕಡ್ಡಾಯವಾಗಿ ಹೋಮ್ ಕ್ವಾರಂಟೈನ್‌ನಲ್ಲಿಡಬೇಕು. ಅಗತ್ಯ ವೈದ್ಯಕೀಯ ಪರಿಕರಗಳನ್ನು ಖರೀದಿಸಲು ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರು ಮನೆಯಲ್ಲಿರುವ ಕಾರಣ ವಿದ್ಯುತ್ ಪೂರೈಕೆಯಲ್ಲಿ ತೊಂದರೆಯುಂಟಾಗಬಾರದು
ಪ್ರಭು ಬಿ.ಚವ್ಹಾಣ, ಜಿಲ್ಲಾ ಉಸ್ತುವಾರಿ ಸಚಿವ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT