ಶನಿವಾರ, ಸೆಪ್ಟೆಂಬರ್ 18, 2021
30 °C
ಜಿಲ್ಲಾ ಕೌಶಲ ಮಿಷನ್ ವತಿಯಿಂದ ಜಿಲ್ಲಾಡಳಿತ ಸಭಾಂಗಣದಲ್ಲಿ ಕಿರು ಉದ್ಯೋಗ ಮೇಳ

ಯಾದಗಿರಿ ಜಿಲ್ಲೆಯಲ್ಲಿ ವಿಪುಲ ಉದ್ಯೋಗಾವಕಾಶ: ಜಿಲ್ಲಾಧಿಕಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಬಹಳಷ್ಟು ಉದ್ಯೋಗ ಅವಕಾಶಗಳು ಇವೆ. ಯುವಜನತೆ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಮುಂದೆ ಬರಬೇಕು ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ತಿಳಿಸಿದರು.

ಜಿಲ್ಲಾಡಳಿತ ಹಾಗೂ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಕೌಶಲ ಮಿಷನ್ ಯಾದಗಿರಿ ವತಿಯಿಂದ ಜಿಲ್ಲಾಡಳಿತ ಸಭಾಂಗಣದಲ್ಲಿ ನಡೆದ ಕಿರು ಉದ್ಯೋಗ ಮೇಳವನ್ನು ಉದ್ಘಾಟಿಸಿ ಅವರು
ಮಾತನಾಡಿದರು.

ಆಸಕ್ತಿ ಇದ್ದು, ಅವಕಾಶಗಳು ಸಿಗದ ಕಾರಣ ಯಾದಗಿರಿ ಹಿಂದುಳಿದ ಜಿಲ್ಲೆಯಾಗಿದೆ. ಸ್ವಯಂ ಉದ್ಯೋಗ ಮಾಡುವಲ್ಲಿ ವಿದ್ಯಾರ್ಥಿಗಳು ಆಸಕ್ತಿ ಹೊಂದಿದ್ದಾರೆ. ಕೇಂದ್ರ ಸರ್ಕಾರದಿಂದ ಜಿಲ್ಲೆಯ ಕಡೇಚೂರು ಬಳಿ ವಿಶ್ವದರ್ಜೆಯ ಔಷಧಿ ಪಾರ್ಕ್ ನಿರ್ಮಾಣವಾಗಲಿದ್ದು, ಜಿಲ್ಲೆಯ ವಿದ್ಯಾರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬೇಕು. ಜಿಲ್ಲೆಯ ವಿದ್ಯಾರ್ಥಿಗಳಿಗೆ ಇಲ್ಲಿ ಹೆಚ್ಚಿನ ಉದ್ಯೋಗ ಸಿಗಲು ಗಮನಹರಿಸಲಾಗುವುದು ಎಂದು ಹೇಳಿದರು.

ಮಹಿಳೆಯರಿಗೆ ವಿಶೇಷ ಕೆಲಸವನ್ನು ನಿಗದಿಪಡಿಸಿ, ತರಬೇತಿ ನೀಡಬೇಕು. ಮಾನವ ಸಂಪನ್ಮೂಲಗಳ ಬಳಕೆ ಆಗಬೇಕು ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶಿಲ್ಪಾ ಶರ್ಮಾ ಮಾತನಾಡಿ, ಸ್ವಯಂ ಉದ್ಯೋಗ ಬಯಸುವವರಿಗೆ ಸಾಲದ ವ್ಯವಸ್ಥೆ ಮಾಡಲಾಗುವುದು. ಬಂದ ಅವಕಾಶಗಳನ್ನು ಬಿಡದೆ ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು ಎಂದು ಹೇಳಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ.ವೇದಮೂರ್ತಿ ಜಿಲ್ಲೆಯು ಸಂಪನ್ಮೂಲಗಳಿಂದ ಕೂಡಿದೆ. ಎಲ್ಲಾ ರೀತಿಯ ಸೌಲಭ್ಯಗಳಿವೆ. ಅದರ ಸದುಪಯೋಗ ಪಡೆದುಕೊಳ್ಳಬೇಕು. ಯುವಕರಿಗೆ ಉದ್ಯೋಗಗಳ ಬಗ್ಗೆ ಸಲಹೆ, ಮಾಹಿತಿಯನ್ನು ನೀಡಬೇಕು. ಆಸಕ್ತಿಯಿಂದ, ಉತ್ಸಾಹದಿಂದ ಬಂದ ಅವಕಾಶಗಳನ್ನು ಬಳಸಿಕೊಳ್ಳಬೇಕು ಎಂದು ಅವರು
ಹೇಳಿದರು.

ಶೇ 65 ನೀರಾವರಿ ಇರುವಂಥ ಜಿಲ್ಲೆಯಿದು. ಇಲ್ಲಿ ಸಂಪನ್ಮೂಲಕ್ಕೆ ಕೊರತೆಯಿಲ್ಲ. ಕೌಶಲಗಳಿಲ್ಲದೆ ಭವಿಷ್ಯವಿಲ್ಲ. ಜಿಲ್ಲೆಯಲ್ಲಿ ಉನ್ನತ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವವರಿಗೆ ಎಸ್‌ಪಿ ಕಚೇರಿಯಲ್ಲಿ ತರಬೇತಿ ಕೇಂದ್ರ ಸ್ಥಾಪಿಸಲಾಗುವುದು. ಇಂದಿನ ಉದ್ಯೋಗ ಜಗತ್ತಿನಲ್ಲಿ ಅಂಕ ಗಳಿಸುವುದಕ್ಕಿಂತಲೂ ನೈಪುಣ್ಯತೆ ಪ್ರಾಮುಖ್ಯವಾಗಿದೆ. ಇದರಿಂದ ಜೀವನದಲ್ಲಿ ಮುಂದೆ ಬರಬಹುದು ಎಂದರು.

ಕಿರು ಉದ್ಯೋಗ ಮೇಳದಲ್ಲಿ 20 ಖಾಸಗಿ ಕಂಪನಿಗಳು ಭಾಗವಹಿಸಿದ್ದು, 530 ಹುದ್ದೆಗಳಿಗೆ ನೇಮಕಾತಿ ನಡೆಸಿವೆ. 1,050 ಮಂದಿ ಅರ್ಜಿಗಳನ್ನು ನೋಂದಾಯಿಸಿದ್ದಾರೆ.

ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಉಪ ವಿಭಾಗಾಧಿಕಾರಿ ಪ್ರಶಾಂತ ಹನಗಂಡಿ, ಜಿಲ್ಲಾ ಕೌಶಲ ಅಭಿವೃದ್ಧಿ ಅಧಿಕಾರಿ ಪ್ರಭು ದೊರೆ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಚನ್ನಬಸವ, ನಗರಾಭಿವೃದ್ಧಿ ಯೋಜನಾ ನಿರ್ದೇಶಕ ಶಾಲಂ ಹುಸೇನ್, ಜಿಲ್ಲಾ ಕೈಗಾರಿಕಾ ಕೇಂದ್ರ ಅಧಿಕಾರಿ ಮಾಣಿಕ್ ವಿ.ರಘೋಜಿ ಅವರು
ಕಾರ್ಯಕ್ರಮದಲ್ಲಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು