ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲೆಗಳನ್ನು ಸ್ಯಾನಿಟೈಸ್ ಮಾಡಲು ಸಚಿವ ಪ್ರಭು ಚೌವ್ಹಾಣ್ ಸೂಚನೆ

ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಸೂಚನೆ
Last Updated 12 ಜೂನ್ 2020, 15:46 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲೆಗೆ ಮಹಾರಾಷ್ಟ್ರ ಸೇರಿದಂತೆ ಹೊರ ರಾಜ್ಯಗಳಿಂದ ಬಂದ ವಲಸೆ ಕಾರ್ಮಿಕರನ್ನು ಶಾಲೆಗಳಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಜೂನ್ 25ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಆರಂಭ ಆಗುವುದರಿಂದ ಪರೀಕ್ಷಾ ಕೇಂದ್ರಗಳೆಲ್ಲವನ್ನೂ ಸ್ಯಾನಿಟೈಸ್ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೋವಿಡ್‌ಗೆ ಸಂಬಂಧಪಟ್ಟಂತೆ ಶುಕ್ರವಾರ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿ, ಕುರ್ಚಿ, ಟೇಬಲ್, ಶೌಚಾಲಯ ಸೇರಿ ಶಾಲೆಯಲ್ಲಿನ ಎಲ್ಲ ವಸ್ತುಗಳು ಜೂನ್ 15ರ ಒಳಗೆ ಸ್ಯಾನಿಟೈಸ್ ಆಗಬೇಕು. ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಮಾಸ್ಕ್ ವಿತರಿಸಬೇಕು ಎಂದು ಸೂಚಿಸಿದರು.

ಅಲ್ಲದೆ, ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಗಳಲ್ಲಿನ ವಲಸೆ ಕಾರ್ಮಿಕರಮೂಲಸೌಕರ್ಯಕ್ಕೆ ಯಾವುದೇ ಸಮಸ್ಯೆ ಉಂಟಾಗಬಾರದು
ಎಂದು ತಿಳಿಸಿದರು.

ವಿಶೇಷ ಪ್ಯಾಕೇಜ್ ಅರ್ಹರಿಗೆ ತಲುಪಲಿ:

ಲಾಕ್‍ಡೌನ್‍ನಿಂದ ಉಂಟಾದ ನಷ್ಟಕ್ಕೆ ಹೂವಿನ ಬೆಳೆಗಾರರಿಗೆ ಹೆಕ್ಟೇರ್‌ಗೆ ಗರಿಷ್ಠ ₹ 25,000 ಪರಿಹಾರ, ಹಣ್ಣು ಮತ್ತು ತರಕಾರಿ ಬೆಳೆಗಾರರ ಪ್ರತಿ ರೈತ ಫಲಾನುಭವಿಗೆ ಹೆಕ್ಟೇರ್‌ಗೆ ಗರಿಷ್ಠ ₹ 15,000 ಪರಿಹಾರ ನೀಡಲು ಮುಖ್ಯಮಂತ್ರಿ ಆದೇಶಿಸಿದ್ದಾರೆ. ಅರ್ಜಿ ಸಲ್ಲಿಕೆ ಅವಧಿ ಮುಗಿದಿದ್ದರೆ ವಿಸ್ತರಣೆ ಮಾಡಲು ಕ್ರಮ ವಹಿಸುವಂತೆ ತೋಟಗಾರಿಕೆ ಉಪನಿರ್ದೇಶಕ ಮಲ್ಲಿಕಾರ್ಜುನ ಬಾಬು ಅವರಿಗೆ ನಿರ್ದೇಶಿಸಿದರು.

ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ ಮಾತನಾಡಿ, ‘ಹತ್ತಿ ಬೀಜ ಮಾರಾಟದ ವಿರುದ್ಧ ಕ್ರಮ ಅಗತ್ಯವಾಗಿದೆ. ಜೆಸ್ಕಾಂ ಲೈನ್‍ಮೆನ್‍ಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಕರೆ ಮಾಡಿದರೆ ಮೊಬೈಲ್ ಸ್ವಿಚ್ ಆಫ್ ಬರುತ್ತದೆ. ಈ ಬಗ್ಗೆ ಜೆಸ್ಕಾಂ ಎಂಜಿನಿಯರ್‌ಗಳು ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದರು.

ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಮಾತನಾಡಿ, ‘ಜಿಲ್ಲೆಯಲ್ಲಿ ಹತ್ತಿ ಖರೀದಿ ಪ್ರಮಾಣ ಹೆಚ್ಚಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರ ಘೋಷಿಸಿರುವ ವಿಶೇಷ ಪ್ಯಾಕೇಜ್‍ಗಳು ಅರ್ಹ ಫಲಾನುಭವಿಗಳಿಗೆ ತಲುಪಲು ಗ್ರಾಮೀಣ ಮಟ್ಟದಲ್ಲಿ ಪಿಡಿಒ ಮತ್ತು ಗ್ರಾಮ ಲೆಕ್ಕಾಧಿಕಾರಿಗಳಿಂದ ಪ್ರಚಾರ ಮಾಡಬೇಕು’ ಎಂದು ಒತ್ತಾಯಿಸಿದರು.

ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಮಾತನಾಡಿ, ‘ಈ ಮೊದಲು ಸಾಂಸ್ಥಿಕ ಕ್ವಾರಂಟೈನ್‍ನಲ್ಲಿ ಅವಲೋಕನಾ ಅವಧಿ 14 ದಿನ ಮತ್ತು ಗೃಹ ದಿಗ್ಬಂಧನ ಅವಧಿ 7 ದಿನ ಇತ್ತು. ಈಗ ಸರ್ಕಾರದ ಹೊಸ ಮಾರ್ಗಸೂಚಿಯಂತೆ 7 ದಿನ ಸಾಂಸ್ಥಿಕ ಕ್ವಾರಂಟೈನ್ ಅವಧಿ ನಿಗದಿ ಮಾಡಲಾಗಿದೆ. ಶಾಸಕರ ಸಲಹೆ ಮೇರೆಗೆ ವಲಸೆ ಕಾರ್ಮಿಕರನ್ನು ಸಾಂಸ್ಥಿಕ ಕ್ವಾರಂಟೈನ್‍ನಲ್ಲಿ 14 ದಿನಗಳವರೆಗೆ ಇರಿಸಲಾಗುತ್ತಿದೆ’ ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನವಣೆ ಮಾತನಾಡಿ, ‘ಜಿಲ್ಲೆಯಲ್ಲಿ ಘೋಷಣೆ ಮಾಡಿದ 36 ಕಂಟೇನ್ಮೆಂಟ್ ಝೋನ್‍ಗಳಿಗೆ ಪೊಲೀಸ್ ಹಾಗೂ ಗೃಹರಕ್ಷಕ ಸಿಬ್ಬಂದಿ ನಿಯೋಜಿಸಲಾಗಿದೆ. ಇಡೀ ಪ್ರದೇಶ ಸೀಲ್ ಆಗಿರುವಂತೆ ನೋಡಿಕೊಳ್ಳಲಾಗುತ್ತಿದೆ. ಗೃಹ ದಿಗ್ಬಂಧನ ಬಿಟ್ಟು ಹೊರಗಡೆ ತಿರುಗಾಡುವುದು ಕಂಡುಬಂದಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.

ಇದೇ ವೇಳೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಪ್ರಗತಿ ಪರಿಶೀಲನೆ ಮಾಡಲಾಯಿತು. ಜಿಲ್ಲಾ ಪಂಚಾಯಿತಿ ಸಿಇಒ ಶಿಲ್ಪಾ ಶರ್ಮಾ, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್, ಉಪ ವಿಭಾಗಾಧಿಕಾರಿ ಶಂಕರಗೌಡ ಸೋಮನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಎಸ್.ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT