ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೊಹರಂ: ನಿಯಮ ಪಾಲನೆ ಕಡ್ಡಾಯ

Last Updated 19 ಆಗಸ್ಟ್ 2021, 3:53 IST
ಅಕ್ಷರ ಗಾತ್ರ

ಯಾದಗಿರಿ: ಕೋವಿಡ್‌ ಹಬ್ಬುವ ಆತಂಕದಿಂದ ಈ ಬಾರಿ ಹಬ್ಬಗಳ ಆಚರಣೆಗೆ ಮಾರ್ಗಸೂಚಿಗಳನ್ನು ಸರ್ಕಾರ ಹೊರಡಿಸಿದ್ದು, ಈ ಮಾರ್ಗ ಸೂಚಿಯನ್ನು ಕಡ್ಡಾಯವಾಗಿ ಪಾಲಿಸಿ ಮೊಹರಂ ಹಬ್ಬವನ್ನು ಆಚರಿಸಬೇಕೆಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಸೂಚಿಸಿದರು.

ಮೊಹರಂ ಹಬ್ಬದ ಆಚರಣೆ ಕಾರಣ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಸಭೆಯಲ್ಲಿ ಅವರು ಮಾತನಾಡಿ ಮಾರ್ಗಸೂಚಿಗಳನ್ನು ವಿವರಿಸಿದರು.

ಸಾರ್ವಜನಿಕ ಸ್ಥಳಗಳಲ್ಲಿ ಅಲಂಗ ಳನ್ನು ಪಂಜಾವನ್ನು ಸ್ಥಾಪಿಸುವುದನ್ನು ತಾಜಿಯಾವನ್ನು ನಿರ್ಬಂಧಿಸಲಾಗಿದೆ. ಆಗಸ್ಟ್ 12 ರಿಂದ 20 ರವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮೊಹರಂ ಪ್ರಾರ್ಥನಾ ಮತ್ತು ಮೆರವಣಿಗೆಯನ್ನು ನಿಷೇಧಿಸಲಾಗಿದೆ. ಆಚರಣೆ ವೇಳೆ ಭಕ್ತರು ವ್ಯಕ್ತಿಗತ ಅಂತರ ಕಾಯ್ದುಕೊಂಡು ಕನಿಷ್ಠ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.

ಪಂಜ, ಅಲಂ ಮತ್ತು ತಾಜಿಯತ್‍ಗಳನ್ನು ಸಾರ್ವಜನಿಕರು ಮುಟ್ಟದೆ, ದೂರದಿಂದ ನೋಡಬೇಕು. ಖಬರಸ್ಥಾನ (ಸ್ಮಶಾನ) ಒಳಗೊಂಡಂತೆ ಯಾವುದೇ ಖಾಲಿ ಜಾಗಗಳಲ್ಲಿ, ಯಾವುದೇ ತರಹದ ಸಭೆ ಏರ್ಪಡಿಸು ವುದನ್ನು ನಿರ್ಬಂಧಿಸಲಾಗಿದೆ ಎಂದರು.

ಖಬರಸ್ಥಾನಗಳಲ್ಲಿ ಕೇವಲ ದಫನ ಮಾಡಲು ಅನುಮತಿ ನೀಡಿದ್ದು, ಮೊಹರಂಗೆ ಸಂಬಂಧಿಸಿದ ಆಚರಣೆಗಳಿಗೆ ಅನುಮತಿ ಇಲ್ಲ. ಹೀಗಾಗಿ ಪ್ರಾರ್ಥನಾ ಸ್ಥಳಗಳಲ್ಲಿ ಮುಖ ಗವಸು ಕಡ್ಡಾಯವಾಗಿ ಧರಿಸಬೇಕು. 60 ವರ್ಷಕ್ಕಿಂತ ಮೇಲ್ಪಟ್ಟವರು ಹಾಗೂ 10 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಮನೆಯಲ್ಲಿಯೇ ಪ್ರಾರ್ಥನೆ ಮಾಡಬೇಕು ಎಂದು ತಿಳಿಸಿದರು.

ಕೋವಿಡ್ ನಿಯಮಪಾಲ ನೆಯೊಂದಿಗೆ ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸಬೇಕು. ಒಂದು ವೇಳೆ ಹೆಚ್ಚು ಜನರು ಆಗಮಿಸಿದ್ದಲ್ಲಿ, ಎರಡು ಅಥವಾ ಹೆಚ್ಚಿನ ಪಾಳಿಯಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸಬೇಕು. ಮಸೀದಿಗಳಲ್ಲಿ ನಮಾಜ್ ನಿರ್ವಹಿಸುವವರ ನಡುವೆ ಕನಿಷ್ಠ 6 ಅಡಿ ಅಂತರ ಕಾಯ್ದುಕೊಳ್ಳ ಬೇಕು. ಆಗಾಗ ಕೈಗಳನ್ನು ಸೋಪು ಮತ್ತು ಸ್ಯಾನಿಟೈಸರ್‌ಗಳಿಂದ ಶುಚಿಗೊಳಿಸಿಕೊಳಬೇಕು. ಮಸೀದಿ ಗಳಲ್ಲಿ ಪ್ರವೇಶಿಸುವ ಮೊದಲು ದೇಹದ ತಾಪಮಾನವನ್ನು ತಪಾಸಣೆ ಮಾಡಬೇಕು ಎಂದರು.

ಮಸೀದಿಗಳಲ್ಲಿ ಪ್ರಾರ್ಥನೆಯಲ್ಲಿ ಭಾಗವಹಿಸುವವರು ತಮ್ಮ ತಮ್ಮ ಮನೆಯಿಂದ ಮುಸಲ್ಲಾವನ್ನು ಕಡ್ಡಾಯವಾಗಿ ತರಬೇಕು. ಪರಸ್ಪರ ಹಸ್ತಲಾಘವ ಮತ್ತು ಆಲಿಂಗನ ಮಾಡಲು ಅವಕಾಶವಿಲ್ಲ. ಮಸೀದಿಗಳನ್ನು ಹೊರತುಪಡಿಸಿ ಇತರ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಅಂದರೆ ಸಭಾಂಗಣ, ಸಮುದಾಯ ಭವನ, ಶಾದಿ ಮಹಲ್ ಮತ್ತಿತರ ತೆರೆದ ಜಾಗಗಳಲ್ಲಿ ಮೊಹರಂ ಹಬ್ಬದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆಯನ್ನು ಆಯೋಜಿಸುವಂತಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶಿಲ್ಪಾಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ವೇದಮೂರ್ತಿ, ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಉಪವಿಭಾಗಾಧಿಕಾರಿ ಪ್ರಶಾಂತ ಹನಗಂಡಿ, ನಗರಾಭಿವೃದ್ಧಿ ಯೋಜನಾ ನಿರ್ದೇಶಕ ಶಾ ಆಲಂ ಹುಸೇನ್, ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಮುಹಮ್ಮದ್ ಫಯಾಝುದ್ದೀನ್, ವಕ್ಫ್ ಅಧಿಕಾರಿ ಎಂ.ಎ.ರಬ್, ಗುಲಾಮ್ ಜಿಲಾನಿ, ರಿಯಾಜ್ ಅಹ್ಮದ್ ಕಲ್ಲೂರ್, ಮಕ್ಬೂಲ್ ಪಟೇಲ್ ಮುಂಡರಗಿ, ಅಹ್ಮದ್ ಪಟೇಲ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT