ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಬಿತ್ತನೆ ಬೀಜ, ರಸಗೊಬ್ಬರ ಕೊರತೆ ಆಗದಿರಲಿ’

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಜಿಲ್ಲಾಧಿಕಾರಿ ಸೂಚನೆ
Last Updated 3 ಜೂನ್ 2020, 17:12 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲೆಯಲ್ಲಿ ಮುಂಗಾರು ಆರಂಭವಾಗಿದೆ. ರೈತರಿಗೆ ರಿಯಾಯಿತಿ ದರದಲ್ಲಿ ವಿತರಿಸುವ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳ ಕೊರತೆ ಆಗದಂತೆ ಕೃಷಿ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ಸಂಬಂಧಿಸಿದಂತೆ 2020-21ನೇ ಸಾಲಿನ ಮುಂಗಾರು ಹಂಗಾಮಿನ ಸನ್ನದ್ಧತೆ ಹಾಗೂ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳ ಪೂರ್ವಸಿದ್ಧತೆ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯ 16 ಹೋಬಳಿಗಳಲ್ಲಿರುವ ರೈತ ಸಂಪರ್ಕ ಕೇಂದ್ರಗಳು ಮತ್ತು 6 ಹೆಚ್ಚುವರಿ ಕೇಂದ್ರಗಳ ಮೂಲಕ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜಗಳನ್ನು ವಿತರಿಸಬೇಕು. ಬಿತ್ತನೆ ಬೀಜ ಬೇಡಿಕೆ ಹೆಚ್ಚಿರುವ ಹೋಬಳಿಗಳ ವ್ಯಾಪ್ತಿಯಲ್ಲಿ ಆದ್ಯತೆ ಮೇರೆಗೆ ಇನ್ನಷ್ಟು ಹೆಚ್ಚುವರಿ ಕೇಂದ್ರಗಳನ್ನು ತೆರೆಯಬೇಕು ಎಂದು ನಿರ್ದೇಶಿಸಿದರು.

ಜಿಲ್ಲೆಯಲ್ಲಿ ಸಾರ್ವಜನಿಕ ಸೇವೆ ನೀಡುವ ಮತ್ತು ಹೆಚ್ಚಿನ ಜನರ ಓಡಾಟ ಇರುವಂತಹ ಆರ್.ಟಿ.ಒ ಕಚೇರಿ, ನಾಡಕಚೇರಿಗಳು, ರೈತ ಸಂಪರ್ಕ ಕೇಂದ್ರಗಳು, ಉಪ ನೋಂದಣಾಧಿಕಾರಿ ಕಚೇರಿ, ಕರ್ನಾಟಕ ಒನ್ ಹಾಗೂ ಬ್ಯಾಂಕ್‍ಗಳ ಮುಂದೆ ಕೋವಿಡ್-19 ಸಂಬಂಧ ಅಂತರ ಕಾಪಾಡುವ ನಿಟ್ಟಿನಲ್ಲಿ ಬ್ಯಾರಿಕೇಡ್ ಅಳವಡಿಸಬೇಕು. ಪೊಲೀಸ್ ಸಿಬ್ಬಂದಿ ನಿಯೋಜಿಸಬೇಕು. ಸಿಬ್ಬಂದಿ ಹಾಗೂ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಜಂಟಿ ಕೃಷಿ ನಿರ್ದೇಶಕಿದೇವಿಕಾ ಆರ್. ಮಾತನಾಡಿ, ಜೂನ್ 1ರಂದು ಮುಂಗಾರು ಆರಂಭವಾಗಿದೆ. 2 ದಿನಗಳಲ್ಲಿ ವಾಡಿಕೆ 5 ಮಿ.ಮೀ ಮಳೆಗಿಂತ ಹೆಚ್ಚಿನ ಮಳೆ (22 ಮಿ.ಮೀ) ಸುರಿದಿದೆ. ಜಿಲ್ಲೆಯಲ್ಲಿ 2,90,897 ಹೆಕ್ಟೇರ್ ಪ್ರದೇಶ ಬಿತ್ತನೆ ಗುರಿ ಹೊಂದಿದ್ದು, ಈಗಾಗಲೇ ಹೆಸರು ಬಿತ್ತನೆ ಆರಂಭವಾಗಿದೆ. ಕೋವಿಡ್-19 ಸಂಬಂಧ ಮುಂಜಾಗ್ರತಾ ಕ್ರಮಗಳೊಂದಿಗೆ ರಿಯಾಯಿತಿ ದರದ ಬಿತ್ತನೆ ಬೀಜ ವಿತರಣೆ ಮಾಡಲಾಗುತ್ತಿದೆ. ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಕೊರತೆ ಇಲ್ಲ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನವಣೆ, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ, ಸಹಾಯಕ ಆಯುಕ್ತ ಶಂಕರಗೌಡ ಎಸ್.ಸೋಮನಾಳ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

***

ಅನಧಿಕೃತವಾಗಿ ಹತ್ತಿ ಬೀಜ ಹಾಗೂ ಇನ್ನಿತರೆ ಬಿತ್ತನೆ ಬೀಜಗಳ ಮಾರಾಟ ಕಂಡುಬಂದಲ್ಲಿ ಜಾಗೃತದಳಗಳ ಮೂಲಕ ದಾಳಿ ನಡೆಸಿ, ಪ್ರಕರಣ ದಾಖಲಿಸಬೇಕು

ಎಂ.ಕೂರ್ಮಾರಾವ್,ಜಿಲ್ಲಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT