ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಂಬಾಕು ಉತ್ಪನ್ನ ನಿಯಂತ್ರಣಕ್ಕೆ ಸೂಚನೆ

ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ತಂಬಾಕು ನಿಯಂತ್ರಣ ತ್ರೈಮಾಸಿಕ ಸಭೆ
Last Updated 6 ಡಿಸೆಂಬರ್ 2019, 14:24 IST
ಅಕ್ಷರ ಗಾತ್ರ

ಯಾದಗಿರಿ: ‘ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಅಧಿನಿಯಮ-2003 (ಕೊಟ್ಪಾ-2003) ಕಾಯ್ದೆಯನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು. ತಂಬಾಕು ಉತ್ಪನ್ನಗಳ ಮಾರಾಟ ನಿಯಂತ್ರಣಕ್ಕೆ ತರಬೇಕು’ ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಳ್ಳಲು ಅಧಿಕಾರಿಗಳು ದಾಳಿ ಮಾಡಿದ ಸಂದರ್ಭದಲ್ಲಿ ನಿಷೇಧಿತ ಪ್ಲಾಸ್ಟಿಕ್‍ಗಳನ್ನು ಸಹ ವಶಪಡಿಸಿಕೊಂಡು ದಂಡ ವಿಧಿಸಬೇಕು. ಜೊತೆಗೆ ಅಂಗಡಿ, ಶಾಪ್‍ಗಳಲ್ಲಿ ಬಾಲ ಕಾರ್ಮಿಕರು ಕಂಡುಬಂದರೆ ಕ್ರಮ ಕೈಗೊಳ್ಳಬೇಕು. ಶಿಕ್ಷಕರ ಸಭೆ, ಗ್ರಾಮ ಪಂಚಾಯಿತಿ ಹಾಗೂ ನಗರಸಭೆಗಳಲ್ಲಿ ಈ ಬಗ್ಗೆ ಮಾಹಿತಿ ನೀಡುವಂತೆ’ ಅವರು ನಿರ್ದೇಶಿಸಿದರು.

‘ಸಾರ್ವಜನಿಕ ಶಿಕ್ಷಣ ಇಲಾಖೆಯಡಿ ಬರುವ ಸರ್ಕಾರಿ ಮತ್ತು ಸರ್ಕಾರೇತರ ಶಾಲೆಗಳಲ್ಲಿ ಕಡ್ಡಾಯವಾಗಿ ಸೆಕ್ಷನ್-4 ಮತ್ತು 6(ಬಿ) ಅಡಿ ನಾಮಫಲಕ ಅಳವಡಿಸಬೇಕು. ಸೆಕ್ಷನ್ 6(ಎ) ಪ್ರಕಾರ 18 ವರ್ಷದೊಳಗಿನ ಮಕ್ಕಳು ತಂಬಾಕು ಉತ್ಪನ್ನದ ವಸ್ತುಗಳನ್ನು ಸೇವನೆ ಮಾಡುವಂತಿಲ್ಲ. 6(2)ಎ ಪ್ರಕಾರ ಮಕ್ಕಳಿಗೆ ತಂಬಾಕು ಉತ್ಪನ್ನಗಳು ಕಾಣುವಂತೆ ಪ್ರದರ್ಶಿಸಬಾರದು ಎಂದು ಸೂಚಿಸುವ ಜಾಹೀರಾತು ನಾಮಫಲಕ ಅಳವಡಿಸಬೇಕು’ ಎಂದರು.

‘ಎಲ್ಲ ಸರ್ಕಾರಿ ಮತ್ತು ಸರ್ಕಾರೇತರ ಕಚೇರಿಗಳಲ್ಲಿ ಬೋರ್ಡ್ ಅಳವಡಿಸಬೇಕು. ನಗರಸಭೆಯ ಅಧೀನದ ಎಲ್ಲ ಅಂಗಡಿ, ಹೋಟೆಲ್, ಪಾನ್‍ಶಾಪ್‍ಗಳಲ್ಲಿ ಸೆಕ್ಷನ್-4ರ ಪ್ರಕಾರ ಸಾರ್ವಜನಿಕರಿಗೆ ಕಾಣುವಂತೆ ಬೋರ್ಡ್ ಅಳವಡಿಸಬೇಕು. ಬಿಡಿಬಿಡಿಯಾಗಿ ಮಾರಾಟವಾಗುವ ತಂಬಾಕು ಪದಾರ್ಥಗಳನ್ನು ವಶಕ್ಕೆ ಪಡೆದು ಮಾರಾಟಗಾರರಿಂದ ದಂಡ ವಸೂಲಿ ಮಾಡಬೇಕು’ ಎಂದು ಸೂಚಿಸಿದರು.

‘ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನ ಸೇವನೆ ಮಾಡುವ ವ್ಯಕ್ತಿಗಳ ವಿರುದ್ಧ ಸೆಕ್ಷನ್ 21ರ ಪ್ರಕಾರ
₹ 200 ದಂಡ ವಿಧಿಸಬೇಕು. ಸರ್ಕಾರಿ ಕಚೇರಿಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆ ಮುಕ್ತ ಪ್ರದೇಶವೆಂದು ನಿರ್ಮಾಣ ಮಾಡಲು ಅಲ್ಲಿನ ಅಧಿಕಾರಿ ಮತ್ತು ಸಿಬ್ಬಂದಿಗಳು ಮನಸು ಮಾಡಬೇಕು’ ಎಂದರು.

ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ವಿವೇಕಾನಂದ ಟೆಂಗೆ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ನಾರಾಯಣಪ್ಪ, ನಗರಸಭೆ ಪೌರಾಯುಕ್ತ ರಮೇಶ ಸುಣಗಾರ, ಆಹಾರ ಸುರಕ್ಷತಾ ಅಧಿಕಾರಿ ಆಂಜನೇಯ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರ್ತಿ ಮಹಾಲಕ್ಷ್ಮಿ ಸಜ್ಜನ್, ಜಿಲ್ಲಾ ಬಾಲ ಕಾರ್ಮಿಕ ಇಲಾಖೆ ಯೋಜನಾ ನಿರ್ದೇಶಕ ರಘುವೀರಸಿಂಗ್ ಠಾಕೂರ್, ಆಪ್ತ ಸಮಾಲೋಚಕ ನಟರಾಜ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT