ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೆಕ್‍ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ

ಹತ್ತಿ ಖರೀದಿಗೆ ಅವಧಿ ನಿಗದಿ ಮಾಡುವುದಿಲ್ಲ: ಸಂಸದ‌ ಹೇಳಿಕೆ
Last Updated 5 ಮೇ 2020, 10:06 IST
ಅಕ್ಷರ ಗಾತ್ರ

ಯಾದಗಿರಿ: ಕೋವಿಡ್-19 ಪ್ರಕರಣ ಕಂಡುಬರದ ಕಾರಣ ಜಿಲ್ಲೆಯನ್ನು ಸರ್ಕಾರ ಹಸಿರು ವಲಯ ಎಂದು ಘೋಷಿಸಿದೆ. ಆದರೆ, ಪಕ್ಕದ ಜಿಲ್ಲೆಗಳಲ್ಲಿ ಸಾಕಷ್ಟು ಪ್ರಕರಣಗಳು ಕಂಡುಬರುತ್ತಿರುವುದರಿಂದ ಜಿಲ್ಲೆಯ ಗಡಿಭಾಗದಲ್ಲಿನ ಚೆಕ್‍ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸಂಸದ ರಾಜಾ ಅಮರೇಶ್ವರ ನಾಯಕ ಸೂಚಿಸಿದರು.

ಇಲ್ಲಿನ ಜಿಲ್ಲಾಡಳಿತ ಭವನದಲ್ಲಿರುವ ತಮ್ಮ ಕಚೇರಿಯಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿಗಳು ಕೊರೊನಾ ವೈರಸ್ ಹರಡುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಹಂತಹಂತವಾಗಿ ಲಾಕ್‍ಡೌನ್ ಮಾಡುತ್ತಿದ್ದಾರೆ. ಇದರ ಜೊತೆಗೆ ಆರ್ಥಿಕ ಸ್ಥಿತಿ ಮತ್ತು ಜನಸಾಮಾನ್ಯರ ಜೀವನ ಸ್ಥಿತಿ ಸರಿದೂಗಿಸುವ ನಿಟ್ಟಿನಲ್ಲಿ ಸ್ಥಳೀಯ ಪರಿಸ್ಥಿತಿಗನುಗುಣವಾಗಿ ಷರತ್ತಿಗೊಳಪಟ್ಟು ಲಾಕ್‍ಡೌನ್ ಸಡಿಲಿಕೆಗೆ ಸೂಚಿಸಿದ್ದಾರೆ. ಕೊರೊನಾ ವೈರಸ್ ಒಬ್ಬರಿಂದ ಒಬ್ಬರಿಗೆ ಹರಡುವ ಸಾಂಕ್ರಾಮಿಕ ರೋಗವಾಗಿರುವುದರಿಂದ ಲಾಕ್‍ಡೌನ್ ಸಡಿಲಿಕೆ ಇದ್ದರೂ ಸಾರ್ವಜನಿಕರು ಈ ಸಮಯದಲ್ಲಿ ಸರ್ಕಾರ ವಿಧಿಸಿರುವ ನಿಯಮಗಳನ್ನು ಪಾಲಿಸುವುದು ಅತ್ಯಗತ್ಯವಾಗಿದೆ ಎಂದು ಹೇಳಿದರು.

ಶಸ್ತ್ರಚಿಕಿತ್ಸೆಗೊಳಪಟ್ಟ ಕಾರಣ ಜಿಲ್ಲೆಗೆ ತಾವು ಬರಲಾಗಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಜಿಲ್ಲೆಯ ಪರಿಸ್ಥಿತಿಯ ಬಗ್ಗೆ ಅವಲೋಕನ ಮಾಡುತ್ತಿರುವುದಾಗಿ ತಿಳಿಸಿದ ಅವರು, ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಖಚಿತ ಕೊರೊನಾ ವೈರಸ್ ಪ್ರಕರಣ ಪತ್ತೆಯಾಗಿರುವುದಿಲ್ಲ. ಈ ನಿಟ್ಟಿನಲ್ಲಿ ಜಿಲ್ಲಾಡಳಿತದ ಕಾರ್ಯ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಬೇರೆ ಜಿಲ್ಲೆ ಮತ್ತು ಹೊರ ರಾಜ್ಯಗಳಲ್ಲಿ ಸಿಲುಕಿಕೊಂಡಿರುವ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು, ಪ್ರವಾಸಿಗರು, ಯಾತ್ರಿಗಳು ಜಿಲ್ಲೆಗೆ ಮರಳಲು ಅನುಮತಿ ನೀಡಲಾಗಿದೆ. ಈ ಸಮಯದಲ್ಲಿ ಜಿಲ್ಲೆಗೆ ಬಂದವರನ್ನು ಸೂಕ್ತ ತಪಾಸಣೆ ನಡೆಸಲು ತಿಳಿಸಲಾಗಿದೆ ಎಂದು ಹೇಳಿದರು.

ಕಡಲೆ, ತೊಗರಿ, ಹತ್ತಿ ಖರೀದಿ

ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಬೆಂಬಲಬೆಲೆಯಲ್ಲಿ ಕಡಲೆಕಾಳು, ತೊಗರಿ ಹಾಗೂ ಹತ್ತಿಯನ್ನು ಜಿಲ್ಲೆಯಲ್ಲಿ ತೆರೆಯಲಾದ ಖರೀದಿ ಕೇಂದ್ರಗಳ ಮೂಲಕ ಖರೀದಿ ಮಾಡಲಾಗುತ್ತಿದೆ. ಹಿಂಗಾರು ಹಂಗಾಮಿನ ಕಡಲೆಕಾಳನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಎಫ್‌ಪಿಓಗಳ ಮುಖಾಂತರ ಖರೀದಿಸಲಾಗುತ್ತಿದೆ. ತೊಗರಿಕಾಳನ್ನು ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿಯಮಿತ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಎಫ್‌ಪಿಓಗಳ ಮುಖಾಂತರ ತೊಗರಿಕಾಳನ್ನು ಖರೀದಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಶರಣಭೂಪಾಲರೆಡ್ಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT