ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಸಿಯು ಬೆಡ್‍ಗಳ ಸಂಖ್ಯೆ ಹೆಚ್ಚಿಸಲು ಸೂಚನೆ

ಅಧಿಕಾರಿಗಳೊಂದಿಗೆ ಕೋವಿಡ್, ಆರ್ಥಿಕತೆ ಕುರಿತು ಸಭೆ
Last Updated 12 ಮೇ 2021, 17:03 IST
ಅಕ್ಷರ ಗಾತ್ರ

ಯಾದಗಿರಿ: ಕೊರೊನಾ 2ನೇ ಅಲೆ ದಿನೇ ದಿನೆ ಹೆಚ್ಚಾಗುತ್ತಿದ್ದು, ಜಿಲ್ಲಾಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕ (ಐಸಿಯು) ಬೆಡ್‍ಗಳ ಸಂಖ್ಯೆಯನ್ನು ಹೆಚ್ಚಿಸಲು ಕ್ರಮ ವಹಿಸುವಂತೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಸಿ ಪಾಟೀಲ ರೇವೂರ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್ ಮತ್ತು ಆರ್ಥಿಕ ವಿಷಯಗಳ ಕುರಿತು ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಕೊರೊನಾ 2ನೇ ಅಲೆ ಬಹಳ ವ್ಯಾಪಕವಾಗಿ ಹರಡುತ್ತಿದ್ದು, ಇದರಿಂದ ರೋಗಿಗಳಿಗೆ ತೊಂದರೆಯಾಗದಂತೆ ಜಿಲ್ಲಾಸ್ಪತ್ರೆಯಲ್ಲಿ ಐಸಿಯು ಬೆಡ್‍ಗಳ ಸಂಖ್ಯೆಯನ್ನು 50ಕ್ಕೆ ಏರಿಸಬೇಕು ಮತ್ತು ಇದಕ್ಕೆ ಬೇಕಾಗುವ ಅನುದಾನವನ್ನು ಮಂಡಳಿ ವತಿಯಿಂದ ನೀಡುವುದಾಗಿ ಭರವಸೆ ನೀಡಿದರು.

ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್ ಮಾತನಾಡಿ, ಕೋವಿಡ್ ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಬೇಕಾಗುವ ವೈದ್ಯಕೀಯ ಉಪಕರಣಗಳನ್ನು ಮಂಡಳಿ ವತಿಯಿಂದ ನೀಡಲು ರೇವೂರ ಅವರಿಗೆ ಮನವಿ ಸಲ್ಲಿಸಿದರು.

ಶಾಸಕ ವೆಂಕಟರೆಡ್ಡಿ ಮುದ್ನಾಳ ಮಾತನಾಡಿ, ವಡಗೇರಾ ಸಮುದಾಯ ಆರೋಗ್ಯ ಕೇಂದ್ರ ಬೆಡ್‍ಗಳ ಸಂಖ್ಯೆಯನ್ನು ಹೆಚ್ಚಿಸಬೇಕು ಮತ್ತು ಮಿನಿ ಆಮ್ಲಜನಕ ಪ್ಲಾಂಟ್ ಸ್ಥಾಪಿಸಬೇಕು ಎಂದು ಸಭೆಯ ಗಮನಕ್ಕೆ ತಂದರು.

ಇದಕ್ಕೆ ಪ್ರತಿಕ್ರಿಯಿಸಿದ ದತ್ತಾತ್ರೇಯ ಸಿ ಪಾಟೀಲ ರೇವೂರ, ಬೆಡ್‍ಗಳ ಸಂಖ್ಯೆ 50ಕ್ಕೆ ಹೆಚ್ಚಿಸಿ ಮತ್ತು ಮಿನಿ ಆಮ್ಲಜನಕ ಪ್ಲಾಂಟ್ ಕ್ರಿಯಾ ಯೋಜನೆ ರೂಪಿಸಿ ಮಂಡಳಿಗೆ ಪ್ರಸ್ತಾವನೆ ಸಲ್ಲಿಸುವಂತೆ ಅವರು ಡಿಎಚ್‍ಒಗೆ ಸೂಚಿಸಿದರು.

ಮೆಡಿಕಲ್ ಕಾಲೇಜಿಗೆ ವೈದ್ಯಕೀಯ ಉಪಕರಣಗಳಿಗೆ ಅನುದಾನವಿಲ್ಲ. ಹೀಗಾಗಿ ನಿಮ್ಮ ಮಂಡಳಿಯ ವತಿಯಿಂದ ನೀಡಬೇಕು ಎಂದು ಅಧಿಕಾರಿಯೊಬ್ಬರು ರೇವೂರ ಅವರಿಗೆ ಮನವಿ ಮಾಡಿದಾಗ, ಅನುದಾನಕ್ಕಾಗಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಒಂದು ವೇಳೆ ಅವರು ಕೊಡದೆ ಮೆಡಿಕಲ್ ಕಾಲೇಜು ಸ್ಥಳಾಂತರ ಮಾಡುವ ನೆಪವೊಡ್ಡಿದರೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ನೀಡುವುದಾಗಿ ಭರವಸೆ ನೀಡಿದರು.

ಶಾಸಕ ವೆಂಕಟರೆಡ್ಡಿ ಮುದ್ನಾಳ ಮಾತನಾಡಿ, ಕೆಕೆಆರ್‌ಡಿಬಿ ವತಿಯಿಂದ ಹತ್ತಿಕುಣಿ ಗ್ರಾಮದಲ್ಲಿ 2 ಕಾಮಗಾರಿಗಳು ಇನ್ನೂ ಕಾರ್ಯಾರಂಭ ಮಾಡಿಲ್ಲ ಎಂದು ಸಭೆಯಲ್ಲಿ ಅಸಮಾಧಾನ ಹೊರಹಾಕಿದರು.

ದತ್ತಾತ್ರೇಯ ರೇವೂರ ಮಾತನಾಡಿ, ಈ ಬಗ್ಗೆ ಗಮನಹರಿಸಿ ಸ್ಥಳ ಪರಿಶೀಲನೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮಂಡಳಿ ವತಿಯಿಂದ ನೀಡಿದ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತೆ ತಿಳಿಸಿದರು.

ಈ ವೇಳೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿಲ್ಪಾ ಶರ್ಮಾ, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ ಜಿ ರಜಪೂತ್, ಡಿಎಚ್‍ಒ ಇಂದುಮತಿ ಕಾಮಶೆಟ್ಟಿ, ಜಿಲ್ಲಾ ಶಸ್ತ್ರಚಿಕಿತ್ಸಕ ಸಂಜೀವ್‌ಕುಮಾರ್ ರಾಯಚೂರಕರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT