ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ಲಾಸ್ಟಿಕ್, ತಂಬಾಕು ಮಾರಾಟ: 18 ಪ್ರಕರಣ ದಾಖಲು

ಯಾದಗಿರಿ ನಗರದ ವಿವಿಧ ಅಂಗಡಿಗಳ ಮೇಲೆ ಅನಿರೀಕ್ಷಿತ ದಾಳಿ
Last Updated 1 ಆಗಸ್ಟ್ 2019, 14:16 IST
ಅಕ್ಷರ ಗಾತ್ರ

ಯಾದಗಿರಿ: ನಗರದ ರೈಲು ನಿಲ್ದಾಣ ಏರಿಯಾ, ಮಾರುಕಟ್ಟೆ ಪ್ರದೇಶ, ಸುಭಾಷ್ ವೃತ್ತ, ಮುದ್ನಾಳ ಪೆಟ್ರೋಲ್ ಪಂಪ್, ಹಳೆ ಬಸ್ ನಿಲ್ದಾಣ ಹಾಗೂ ಹೊಸ ಬಸ್ ನಿಲ್ದಾಣದ ಸುತ್ತಮುತ್ತಲಿನ ಸ್ಟಾಲ್, ಮಳಿಗೆ, ಅಂಗಡಿಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಪ್ಲಾಸ್ಟಿಕ್, ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಂಡಿದ್ದಾರೆ.

ಅನಿರೀಕ್ಷಿತ ದಾಳಿ, ತಪಾಸಣೆ ಸಂದರ್ಭದಲ್ಲಿ ಅಂಗಡಿಗಳ ಮಾಲೀಕರ ವಿರುದ್ಧ ಒಟ್ಟು 18 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, ₹3600 ದಂಡ ವಿಧಿಸಿದ್ದಾರೆ.

ಜಿಲ್ಲಾ ಬಾಲಕಾರ್ಮಿಕ ಇಲಾಖೆ ಯೋಜನಾ ನಿರ್ದೇಶಕ ರಘುವೀರ ಸಿಂಗ್ ಠಾಕೂರ್ ಈ ಸಂದರ್ಭದಲ್ಲಿ ಮಾತನಾಡಿ, ಸರ್ಕಾರದ ನಿರ್ದೇಶನದಂತೆ ಜಿಲ್ಲಾಧಿಕಾರಿ ಆದೇಶ ಪಡೆದು ದಾಳಿ ನಡೆಸಲಾಗಿದೆ. ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಬಳಸುವುದು ಕಾನೂನು ಪ್ರಕಾರ ಅಪರಾಧವಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕುವುದು ನಿಷೇಧಿಸಲಾಗಿದ್ದು, ಉಲ್ಲಂಘಿಸಿದಲ್ಲಿ ₹25000 ವರೆಗೆ ದಂಡ ವಿಧಿಸುವುದರ ಜೊತೆಗೆ ಶಿಕ್ಷೆಗೆ ಒಳಪಡಬೇಕಾಗುತ್ತದೆ ಎಂದು ಹೇಳಿದರು.

ಸಾಕಷ್ಟು ಬಾರಿ ಜಾಥಾ ಮೂಲಕ, ಆಟೋ ಪ್ರಚಾರ, ಕರಪತ್ರಗಳ ವಿತರಣೆ, ಕಾನೂನು ಅರಿವು- ನೆರವು ಕಾರ್ಯಕ್ರಮಗಳು ಮತ್ತು ಹಲವಾರು ಬಾರಿ ಅನಿರೀಕ್ಷಿತ ತಪಾಸಣೆ, ದಾಳಿ ಮಾಡಿ ಸಾರ್ವಜನಿಕರಿಗೆ ಹಾಗೂ ಸಬಂಧಿಸಿದ ಅಂಗಡಿ ಮಾಲೀಕರುಗಳಿಗೆ ಮಾಹಿತಿ ನೀಡಿದರೂ ಸಹ ಹಲವಾರು ಅಂಗಡಿ ಮಾಲೀಕರು ನಿಯಮ ಉಲ್ಲಂಘಿಸಿ, ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಬಳಸುತ್ತಿರುವುದು, ಬಹಿರಂಗವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಹಾಗೂ ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿ, ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರರಾದ ಮಹಾಲಕ್ಷ್ಮಿ ಸಜ್ಜನ್ ಮಾತನಾಡಿ, ಕೋಟ್ಪಾ-2003 ಕಾಯ್ದೆಯಡಿಯಲ್ಲಿ ಸೆಕ್ಷನ್ 4, 5, 6, 6ಎ, 6ಬಿ ಮತ್ತು 7ರ ಪ್ರಕಾರ ಸಂಬಂಧಿಸಿದ ಕಾಯ್ದೆಗಳನುಸಾರ ಹೋಟೆಲ್, ರೆಸ್ಟೊರೆಂಟ್, ಬಾರ್, ದಾಬಾ, ಅಂಗಡಿಗಳಲ್ಲಿ ಮತ್ತು ಶಾಲಾ-ಕಾಲೇಜು ಪ್ರದೇಶದ 100 ಮೀಟರ್ ಅಂತರದಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕಿಗೆ ಸಂಬಂಧಿಸಿದ ಉತ್ಪನ್ನಗಳನ್ನು ಬಹಿರಂಗವಾಗಿ ಮಕ್ಕಳಿಂದ ಮಾರುವುದಕ್ಕೆ ಪ್ರಚೋದನೆ ನೀಡುವುದು, ದುಡಿಸಿಕೊಳ್ಳುವುದು ಮತ್ತು ಸೇದುವುದು ಕಾನೂನಿನ ಪ್ರಕಾರ ನಿಷೇಧಿಸಲಾಗಿರುತ್ತದೆ. ನಿಯಮಗಳನ್ನು ಉಲ್ಲಂಘಿಸಿದಲ್ಲಿ ದಂಡ ವಿಧಿಸುವುದರ ಜೊತೆಗೆ ಶಿಕ್ಷೆಗೆ ಒಳಪಡಬೇಕಾಗುತ್ತದೆ ಎಂದು ತಿಳಿವಳಿಕೆ ನೀಡಿದರು.

ಪರಿಸರ ಎಂಜಿನಿಯರ್ ಸಂಗಮೇಶ, ಎ.ಎಸ್.ಐ ಕಲ್ಯಾಣಿ, ವಾಯು ಮಾಲಿನ್ಯ ನಿಯಂತ್ರಣ ಸಹಾಯಕ ಪರಿಸರ ಅಧಿಕಾರಿ ಬಸವರಾಜ ಮತ್ತು ನಗರಸಭೆ ಸಿಬ್ಬಂದಿ ದಾಳಿಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT