ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಂಭಾವ್ಯ ಅತಿವೃಷ್ಠಿ, ಪ್ರವಾಹ ಪರಿಸ್ಥಿತಿ ಎದುರಿಸಲು ಸಿದ್ಧತೆ ಮಾಡಿಕೊಳ್ಳಿ’

Last Updated 6 ಜೂನ್ 2021, 4:56 IST
ಅಕ್ಷರ ಗಾತ್ರ

ಯಾದಗಿರಿ: ಪ್ರಸಕ್ತ ಮುಂಗಾರು ಮಳೆ ಪ್ರಾರಂಭವಾಗಿದ್ದು, ಮುಂದಿನ ದಿನಗಳಲ್ಲಿ ಉಂಟಾಗಬಹುದಾದ ಅತಿವೃಷ್ಠಿ, ಪ್ರವಾಹ, ಬಿರುಗಾಳಿ, ಸಿಡಿಲು ಇತ್ಯಾದಿಗಳಿಂದ ಸಾರ್ವಜನಿಕರಿಗೆ ಹಾಗೂ ಆಸ್ತಿ- ಪಾಸ್ತಿಗಳಿಗೆ ಉಂಟಾಗುವ ಪ್ರಾಕೃತಿಕ ವಿಕೋಪ ಎದುರಿಸಲು ಮುಂಜಾಗ್ರತಾ ಹಾಗೂ ರಕ್ಷಣಾ ಕ್ರಮಗಳ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ 2021ನೇ ಸಾಲಿನ ಮುಂಗಾರು ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಕೈಗೊಳ್ಳಬೇಕಾದ ಪೂರ್ವ ಸಿದ್ಧತಾ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಕೋವಿಡ್- 19 ಸಾಂಕ್ರಾಮಿಕ ರೋಗ ಹರಡದಂತೆಯೂ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಹೇಳಿದರು.

ಗ್ರಾಮೀಣ ಪ್ರದೇಶಗಳಲ್ಲಿ ಚರಂಡಿ ಸ್ವಚ್ಛಗೊಳಿಸಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಮ್ಮ ಗ್ರಾಮಗಳಲ್ಲಿ ಕೆರೆಗಳನ್ನು ಮತ್ತು ನೀರಿನ ಗುಂಡಿಗಳ ಸುತ್ತ ತಡೆಬೇಲಿಗಳನ್ನು ಹಾಕಬೇಕು ಮತ್ತು ಎಚ್ಚರಿಕೆ ಫಲಕಗಳನ್ನು ಅಳವಡಿಸುವ ಇನ್ನಿತರ ಕ್ರಮಗಳ ಕೈಗೊಳ್ಳಬೇಕು ಎಂದು ಸೂಚಿಸಿದರು.

ನಗರ ಪ್ರದೇಶಗಳಲ್ಲೂ ಮಳೆಗಾಲದಲ್ಲಿ ಸ್ವಚ್ಛತೆ ಕಾಪಾಡಿ ರೋಗ-ರುಜಿನಗಳು ಹರಡದಂತೆ ಎಚ್ಚರಿಕೆ ವಹಿಸುವಂತೆ ಪೌರಾಯುಕ್ತರಿಗೆ ಸೂಚಿಸಿದರು.

ಹೆದ್ದಾರಿ, ರಸ್ತೆ, ಕಟ್ಟಡಗಳ ಮೇಲೆ ಮಳೆ ಬಂದಾಗ, ಗಾಳಿ ಮಳೆಯಿಂದ, ದೊಡ್ಡ ದೊಡ್ಡ ಮರಗಳು ಉರುಳಿ ಬಿದ್ದಾಗ ತಕ್ಷಣಕ್ಕೆ ಸ್ಪಂದಿಸಿ ಮರಗಳನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿ ಕೊಡಬೇಕು. ವಿದ್ಯುತ್ ತಂತಿಗಳಿಗೆ ಅಪಾಯಕಾರಿಯಾಗುವ ಮರದ ಕೊಂಬೆಗಳನ್ನು ಕಡಿಯಲು ಮತ್ತು ಬೇರುಗಳ ಮೇಲೆ ಬಂದು ಬೀಳುವ ಹಂತದಲ್ಲಿರುವ ಮರಗಳನ್ನು ತೆಗೆಯುವ ಬಗ್ಗೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಮುನ್ನಚ್ಚರಿಕೆ ವಹಿಸಿ ತಡೆಗೆ ಕ್ರಮ ಕೈಗೊಳ್ಳುವುದು. ಎಲ್ಲಾ ಕಾಯಿಲೆಗಳಿಗೆ ಬೇಕಾಗುವ ಔಷಧ ಚುಚ್ಚುಮದ್ದು ಇತ್ಯಾದಿ ಸಾಕಷ್ಟು ಪ್ರಮಾಣದಲ್ಲಿ ಸಂಗ್ರಹಿಸಿಡುವುದು. ವೈದ್ಯಕೀಯ ಸೌಲಭ್ಯಗಳ ಸಹಿತ ಆಂಬುಲೆನ್ಸ್‌ಗಳು ಸನ್ನದ್ಧರಾಗಿರಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಅಯಾ ತಾಲ್ಲೂಕು ತಹಶೀಲ್ದಾರರಿಗೆ ಬಿಡುಗಡೆ ಮಾಡಿರುವ ಅನುದಾನದಿಂದ ಪ್ರಾಕೃತಿಕ ವಿಕೋಪ ಸಂತ್ರಸ್ತರಿಗೆ ಪರಿಹಾರ ಪಾವತಿ ಮಾಡಬೇಕು. ಕಚೇರಿಯಲ್ಲಿ ವಿಪತ್ತು ನಿರ್ವಹಣೆಗಾಗಿ ಕಂಟ್ರೋಲ್ ರೂಮ್ ತೆರೆದು 24 ಗಂಟೆಯೂ ಕಾರ್ಯನಿರ್ಹವಣೆ ಸಿಬ್ಬಂದಿಗಳನ್ನು ನಿಯೋಜಿಸಬೇಕು. ಪ್ರತಿದಿನದ ಮಳೆ ಮತ್ತು ಹಾನಿಯ ವರದಿಗಳನ್ನು ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಬೇಕು ಎಂದುತಿಳಿಸಿದರು.

ಜಿಲ್ಲೆಯಲ್ಲಿ ಗಣಿಗಾರಿಕೆ ನಡೆದಂಥ ಪ್ರದೇಶದಲ್ಲಿ ಆಗಿರುವ ಗುಂಡಿಗಳಲ್ಲಿ ನಿಂತ ನೀರಿನಲ್ಲಿ ಈಜಾಡಲು ಹೋಗುವುದರಿಂದ ಜೀವಹಾನಿ ಆಗುತ್ತಿರುವುದರಿಂದ ಗಣಿಗಾರಿಕೆ ನಡೆಸಿದ ಪ್ರದೇಶಗಳಲ್ಲಿ ಈಜಾಟ ನಿಷೇಧಿಸಿದೆ ಎಂಬ ಎಚ್ಚರಿಗೆ ನಾಮಫಲಕ ಅಳವಡಿಸಬೇಕು. ಏನಾದರೂ ಅವಘಡ ಸಂಭವಿಸಿದಲ್ಲಿ ಸಂಬಂಧಪಟ್ಟ ಮಾಲಿಕರು, ಗುತ್ತಿಗೆದಾರರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು ಮಾಡುವಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಅಧಿಕಾರಿಗಳಿಗೆ ಸೂಚಿಸಿದರು.

ಮಳೆಗಾಲಕ್ಕೆ ರಕ್ಷಣಾ ಸಾಮಾಗ್ರಿಯೊಂದಿಗೆ ಸನ್ನದ್ಧರಾಗಿರುವುದು. ನೆರೆ ಉಂಟಾದಲ್ಲಿ ಅವಶ್ಯಕ ಬೋಟುಗಳ ಶೇಖರಣೆ ಮಾಡಿಸಿಟ್ಟುಕೊಳ್ಳುವುದು. ನುರಿತ ಈಜುಗಾರರ ಮಾಹಿತಿಯನ್ನು ತಾಲ್ಲೂಕುವಾರು ಇಟ್ಟುಕೊಳ್ಳಬೇಕೆಂದು ಅಗ್ನಿಶಾಮಕ ಅಧಿಕಾರಿಗಳಿಗೆ ತಿಳಿಸಿದರು.

ಸೇತುವೆಗಳ ಬದಿಗಳು, ನದಿ ದಂಡೆಗಳು ಮುಂತಾದವು ಶಿಥಿಲಾವಸ್ಥೆಯಲ್ಲಿರುವುದನ್ನು ಪತ್ತೆ ಹಚ್ಚಿ ದುರಸ್ತಿಗಾಗಿ ಕಾಮಗಾರಿಗಳನ್ನು ಕೈಗೊಳ್ಳಬೇಕು. ನದಿಗಳಲ್ಲಿ ನೀರು ಸರಾಗವಾಗಿ ಹರಿದು ಹೋಗಲು ಹಲಗೆ, ಗೇಟ್‌ಗಳನ್ನು ತೆರವುಗೊಳಿಸಬೇಕೆಂದು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶಿಲ್ಪಾಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ವೇದಮೂರ್ತಿ, ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಮುಕ್ಕಣ್ಣ ಕರಿಗಾರ, ಉಪವಿಭಾಗಾಧಿಕಾರಿ ಪ್ರಶಾಂತ ಹನಗಂಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT