ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯೋತ್ಸವ ಅರ್ಥಪೂರ್ಣ ಆಚರಣೆಗೆ ಆಗ್ರಹ

ಸಾಧಕರಿಗೆ ‘ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ’ ಪ್ರದಾನಕ್ಕೆ ಸಾಹಿತಿ ಚಂದ್ರಕಾಂತ ಕರದಳ್ಳಿ ಒತ್ತಾಯ
Last Updated 26 ಅಕ್ಟೋಬರ್ 2018, 15:34 IST
ಅಕ್ಷರ ಗಾತ್ರ

ಯಾದಗಿರಿ: ‘ಕರ್ನಾಟಕ ರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಇರುವ ಸಾಧಕರನ್ನು ಗುರುತಿಸಿ ಜಿಲ್ಲಾಮಟ್ಟದ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಬೇಕು’ ಎಂದು ಮಕ್ಕಳ ಸಾಹಿತಿ ಚಂದ್ರಕಾಂತ ಕರದಳ್ಳಿ ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.

‘ರಾಜ್ಯದ ಎಲ್ಲಾ ಜಿಲ್ಲಾಕೇಂದ್ರಗಳಲ್ಲಿ ಸ್ಥಳೀಯ ಸಾಧಕರನ್ನು ಗೌರವಿಸುತ್ತಾ ಬಂದಿವೆ. ಆದರೆ, ಯಾದಗಿರಿ ಜಿಲ್ಲೆಯಾಗಿ ಒಂಬತ್ತು ವರ್ಷ ಕಳೆದರೂ ಜಿಲ್ಲಾಡಳಿತ ಈ ನಿಟ್ಟಿನಲ್ಲಿ ಮುಂದಾಗಿಲ್ಲ. ಜಿಲ್ಲೆಯಲ್ಲಿ ಶಿಕ್ಷಣ, ಆರೊಗ್ಯ, ಕೃಷಿ, ಜನಪದ, ಸಮಾಜಸೇವೆ, ಪತ್ರಿಕಾ ಮಾಧ್ಯಮ, ಗ್ರಾಮೀಣ ಕಲೆ, ಕುಶಲ ಕೈಗಾರಿಕೆ, ಸಂಗೀತ, ಭರತನಾಟ್ಯ ಇನ್ನೂ ಹಲವು ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರು ಇದ್ದಾರೆ. 50ಕ್ಕೂ ಹೆಚ್ಚು ವಯೋಮಾನದ ಸಾಧಕರನ್ನು ಗುರುತಿಸಿ ಗೌರವಿಸುವ ಕೆಲಸವನ್ನು ಜಿಲ್ಲಾಡಳಿತ ಮಾಡಬೇಕಿದೆ’ ಎಂದು ಅವರು ಸಲಹೆ ನೀಡಿದ್ದಾರೆ.

‘ಜಿಲ್ಲಾ ಮತ್ತು ಕನ್ನಡ ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್‌ಗಳಿಂದ ಮಾಹಿತಿ ಪಡೆದು ಒಂದು ತಾತ್ಕಾಲಿಕ ಆಯ್ಕೆ ಸಮಿತಿ ರಚಿಸಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಅರ್ಹರನ್ನು ಆಯ್ಕೆ ಮಾಡಬಹುದು. ಸಾಧನೆ, ಇದುವರೆಗೂ ಪಡೆದ ಪ್ರಶಸ್ತಿ, ಸಲ್ಲಿಸುತ್ತಿರುವ ಸೇವೆ ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಬಹುದು. ಆಗ ರಾಜ್ಯೋತ್ಸವ ಆಚರಣೆಗೆ ಒಂದು ಅರ್ಥ ಸಿಗಲಿದೆ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಅರ್ಥಪೂರ್ಣವಾಗಿ ಆಚರಣೆ ಆಗಲಿ ಎಂದು ಜಿಲ್ಲೆಯ ಸಾಹಿತಿಗಳು ಎದುರು ನೋಡುತ್ತಿದ್ದಾರೆ. ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು ಅರ್ಥಪೂರ್ಣ ಆಚರಣೆ ಹೆಚ್ಚು ಒತ್ತು ನೀಡಬೇಕು’ ಎಂದು ಅವರು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT