ಸೋಮವಾರ, ಆಗಸ್ಟ್ 8, 2022
24 °C
ಎಡ ಮತ್ತು ಜಾತ್ಯಾತೀತ ಪ್ರಜಾಸತ್ತಾತ್ಮಕ ಪಕ್ಷಗಳ ಜಂಟಿ ಪ್ರತಿಭಟನೆ: ಸೋಮಶೇಖರ್

9 ಬೇಡಿಕೆಗಳ ಈಡೇರಿಕೆಗೆ ಜೂನ್‌ 15ರಂದು ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ‘9 ಬೇಡಿಕೆಗಳ ಈಡೇರಿಕೆಗಾಗಿ ಇದೇ 15ರಂದು ಮುಖ್ಯಮಂತ್ರಿ ಹಾಗೂ ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರ ಮತ್ತು ಶಾಸಕರ ಕಚೇರಿಗಳ ಮುಂದೆ ಎಡ ಮತ್ತು ಜಾತ್ಯಾತೀತ ಪ್ರಜಾಸತ್ತಾತ್ಮಕ ಪಕ್ಷಗಳು ಜಂಟಿ ಪ್ರತಿಭಟನೆ ನಡೆಸಲಿವೆ’ ಎಂದು ಎಸ್‍ಯುಸಿಐ(ಸಿ) ಜಿಲ್ಲಾ ಕಾರ್ಯದರ್ಶಿ ಕೆ.ಸೋಮಶೇಖರ್ ತಿಳಿಸಿದರು.

‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನ ವಿರೋಧಿ ನೀತಿಗಳನ್ನು ವಿರೋಧಿಸಿ ಹಾಗೂ ಕೋವಿಡ್ ನಿವಾರಣೆಗೆ ಅಗತ್ಯ ಕ್ರಮ ವಹಿಸದೇ ಇರುವ ನಿರ್ಲಕ್ಷ್ಯ ಖಂಡಿಸಿ, ಕೋವಿಡ್ ಹಾಗೂ ಲಾಕ್‌ಡೌನ್‌ಗೆ ಪರಿಣಾಮಕಾರಿ ಪರಿಹಾರಕ್ಕಾಗಿ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುವುದು’ ಎಂದು ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ಉಚಿತ ಹಾಗೂ ಸಾರ್ವತ್ರಿಕ ಲಸಿಕಾಕರಣಕ್ಕೆ ಕೂಡಲೇ ಕ್ರಮ ವಹಿಸಬೇಕು. ಬೆಡ್, ಲಸಿಕೆ, ಔಷಧಿ, ಆಮ್ಲಜನಕಗಳ ಹಗರಣಗಳು, ಜಾತಿ ಹಾಗೂ ರಾಜಕೀಯ ತಾರತಮ್ಯದ ಪ್ರಕರಣಗಳನ್ನು ಸ್ವತಂತ್ರ ಉನ್ನತ ನ್ಯಾಯಾಂಗ ತನಿಖೆಗೊಳಪಡಿಸಬೇಕು’ ಎಂದು ಆಗ್ರಹಿಸಿದರು.

‘ಆದಾಯ ತೆರಿಗೆಯಡಿ ಬಾರದ ಎಲ್ಲಾ ಕುಟುಂಬಗಳಿಗೆ ಮಾಸಿಕ ತಲಾ 10 ಕೆ.ಜಿ ಸಮಗ್ರ ಆಹಾರಧಾನ್ಯ ಮತ್ತು ಆರೋಗ್ಯ ಸುರಕ್ಷತಾ ಸಾಮಗ್ರಿಗಳ ಪೊಟ್ಟಣವನ್ನು ಮತ್ತು ಕೇಂದ್ರ ಸರ್ಕಾರದ ಸಹಾಯ ಪಡೆದು ₹10,000 ನೆರವನ್ನು ಕೋವಿಡ್ ನಿಯಂತ್ರಣಕ್ಕೆ ಬರುವವರೆಗೆ ನೀಡಬೇಕು. ದಲಿತರು, ಬಡವರ ಪ್ರದೇಶಗಳಲ್ಲಿ ಇಂದಿರಾ ಕ್ಯಾಂಟೀನ್‌ಗಳನ್ನು ವಿಸ್ತರಿಸಬೇಕು ಮತ್ತು ಬಲಗೊಳಿಸಬೇಕು’ ಎಂದು ಒತ್ತಾಯಿಸಿದರು.

‘ವಿದ್ಯುತ್, ಪೆಟ್ರೋಲ್, ಡೀಸೆಲ್ ದರ ಏರಿಕೆ ಹಿಂಪಡೆಯಬೇಕು. ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು. ರಾಜ್ಯದ ರೈತರು, ಕೂಲಿಕಾರರು, ಕಾರ್ಮಿಕರು, ಕಸುಬುದಾರರು, ದಲಿತರು, ಆದಿವಾಸಿಗಳು, ಅಲ್ಪ ಸಂಖ್ಯಾತರು ಮತ್ತು ಮಹಿಳೆಯರ ಎಲ್ಲ ರೀತಿಯ ಸಾಲಗಳನ್ನು ಕೇರಳದ ಋಣ ಮುಕ್ತ ಕಾಯ್ದೆ ಮಾದರಿಯಲ್ಲಿ ಮನ್ನಾ ಮಾಡಬೇಕು’ ಎಂದು ಆಗ್ರಹಿಸಿದರು.

ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ದಾವಲ್‍ಸಾಬ್ ನದಾಫ್ ಮಾತನಾಡಿ, ‘ಮಹತ್ಮಾಗಾಂಧಿ ಉದ್ಯೋಗ ಖಾತ್ರಿ ಯೋಜನೆ ಈಗ ಖಾತ್ರಿಯಾಗಿ ಉಳಿದಿಲ್ಲ. ಹಲವಾರು ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ಕೊಡುತ್ತಿಲ್ಲ. ಕೇಂದ್ರ ಸರ್ಕಾರ ಈ ಕಾಯ್ದೆಯನ್ನು ದುರ್ಬಲಗೊಳಿಸಲು ನೋಡುತ್ತಿದೆ. ಈ ಎಲ್ಲ ವಿಷಯಗಳನ್ನು ಇಟ್ಟುಕೊಂಡು ಪ್ರತಿಭಟನೆ ಮಾಡಲಾಗುವುದು’ ಎಂದು ಮಾಹಿತಿ ನೀಡಿದರು.

ಕರ್ನಾಟಕ ರಾಜ್ಯ ರೈತ ಸಂಘ-ಸ್ವರಾಜ್ ಇಂಡಿಯಾ ಜಿಲ್ಲಾ ಕಾರ್ಯದರ್ಶಿ ಮುದ್ದಣ್ಣ ಅಮ್ಮಾಪುರ ಸುದ್ದಿಗೋಷ್ಠಿಯಲ್ಲಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.