ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ ಕಾಯ್ದೆ ತಿದ್ದುಪಡಿ ಬಗ್ಗೆ ಜಾಗೃತಿ ಮೂಡಿಸಿ

ಜಿಲ್ಲಾ ರೈತ ಮೋರ್ಚಾ ಕಾರ್ಯಕಾರಿಣಿ ಸಭೆಯಲ್ಲಿ ಕಡಾಡಿ ಸಲಹೆ
Last Updated 7 ಜುಲೈ 2021, 5:19 IST
ಅಕ್ಷರ ಗಾತ್ರ

ಯಾದಗಿರಿ: ಪಕ್ಷದ ಕಾರ್ಯಕರ್ತರು ಕೇಂದ್ರ ಸರ್ಕಾರ ಜಾರಿಗೊಳಿಸಿದ ಮೂರು ಕೃಷಿ ಕಾಯ್ದೆಗಳ ಬಗ್ಗೆ ರೈತಾಪಿ ವರ್ಗದಲ್ಲಿ ಜಾಗೃತಿ ಮೂಡಿಸುವ ಅವಶ್ಯಕತೆ ಇದೆ ಎಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಸಲಹೆ ನೀಡಿದರು.

ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜರುಗಿದ ಜಿಲ್ಲಾ ರೈತ ಮೋರ್ಚಾ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಭವಿಷ್ಯದಲ್ಲಿ ದೇಶದ ರೈತವರ್ಗಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಬಿಜೆಪಿ ಸರ್ಕಾರ ಪ್ರಮುಖ ಮೂರು ಕಾಯ್ದೆಗಳನ್ನು ಜಾರಿಗೊಳಿಸಿದೆ. ಆದರೆ, ಕಾಂಗ್ರೆಸ್‌ನವರು ಕಾಯ್ದೆಯ ಬಗ್ಗೆ ಅರಿತುಕೊಳ್ಳದೆ ರೈತರಲ್ಲಿ ಗೊಂದಲ ಮೂಡಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳಲು ಯೋಗ್ಯತೆ ಕಳೆದುಕೊಂಡಿದೆ. ಕೇಂದ್ರದ ಹಲವು ಯೋಜನೆಗಳು 2023ರ ರಾಜ್ಯ ವಿಧಾನಸಭೆ ಚುನಾವಣೆಯ ದಿಕ್ಸೂಚಿಯಾಗಲಿದೆ. ರೈತರ ಹಿತಕ್ಕಾಗಿ ದೂರದೃಷ್ಟಿಯುಳ್ಳ ಕಾನೂನು ಜಾರಿಗೆ ತಂದಿದ್ದೇವೆ. ನಮ್ಮ ಸರ್ಕಾರದ ಯೋಜನೆಗಳ ಬಗ್ಗೆ ಕಾರ್ಯಕರ್ತರು ಅಧ್ಯಯನ ಮಾಡಿ, ಜನರಿಗೆ ಮುಟ್ಟಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಕರೆ ನೀಡಿದರು.

ಬಿಜೆಪಿ ರೈತ ಮೋರ್ಚಾ ವಿಭಾಗದಲ್ಲಿ ವಯಸ್ಸಿನ ಮಿತಿಯಿಲ್ಲ. ಲಿಂಗಭೇದವಿಲ್ಲ. ಮಹಿಳೆ, ಪುರುಷರು ಎನ್ನದೆ ಎಲ್ಲ ಕಾರ್ಯಕರ್ತರು ಪಾಲ್ಗೊಳ್ಳಲು ಅವಕಾಶವಿದೆ ಎಂದು ಹೇಳಿದರು.

ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಚಂದ್ರಶೇಖರಗೌಡ ಮಾಗನೂರ ಪ್ರಸ್ತಾವಿಕ ಮಾತನಾಡಿ, ರಾಜ್ಯ ಹಾಗೂ ಕೇಂದ್ರ ಸರ್ಕಾರ ರೈತರ ಕಲ್ಯಾಣಕ್ಕಾಗಿ ಜಾರಿಗೆ ತಂದ ಯೋಜನೆಗಳ ಬಗ್ಗೆ ಜಿಲ್ಲಾದ್ಯಂತ ಬೂತ್ ಮಟ್ಟದಲ್ಲಿ ಜಾಗೃತಿ ಮಾಡಲಾಗುವುದು ಎಂದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಶರಣಭೂಪಾಲರಡ್ಡಿ ನಾಯ್ಕಲ್ ಮಾತನಾಡಿ, ಸದ್ಯದಲ್ಲೇ ಎದುರಾಗಲಿರುವ ಜಿ.ಪಂ ಹಾಗೂ ತಾ.ಪಂ ಚುನಾವಣೆಗೆ ಕಾರ್ಯಕರ್ತರು ಸನ್ನದ್ಧರಾಗಬೇಕು ಎಂದು ಹೇಳಿದರು.

ಮೋರ್ಚಾ ಜಿಲ್ಲಾ ಘಟಜದ ಅಧ್ಯಕ್ಷ ಶೇಖರ ದೊರಿ, ಪ್ರಧಾನ ಕಾರ್ಯದರ್ಶಿ ವೆಂಕಟರಡ್ಡಿ ಅಬ್ಬೆತುಮಕೂರ, ಗುರು ಕಾಮಾ, ನಾಗರತ್ನ ಕುಪ್ಪಿ, ಸಾಯಿಬಣ್ಣ ಬೋರಬಂಡಾ, ಲಲಿತಾ ಅನಪುರ, ಶಂಕರ ಕರಣಗಿ, ಶರಣಗೌಡ ಮದರಕಲ್, ರಾಘವೇಂದ್ರ ಯಕ್ಷಂತಿ, ಮೌನೇಶ ಬೆಳಗೇರಾ ಇದ್ದರು.

ನಾಗನಗೌಡ ಪಾಟೀಲ ಕನ್ಯಾಕೊಳ್ಳೂರು ನಿರೂಪಿಸಿದರು. ಚಂದ್ರಶೇಖರ ಮುಂಡರಗಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT