ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮೀಣ ಜನರಿಗೆ ಜಾಗೃತಿ ಮೂಡಿಸಿ: ಶಾಸಕ ನಾಗನಗೌಡ ಕಂದಕೂರ ಸಲಹೆ

10 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ
Last Updated 13 ಮೇ 2021, 16:25 IST
ಅಕ್ಷರ ಗಾತ್ರ

ಗುರುಮಠಕಲ್: ಕೋವಿಡ್ ಮೊದಲನೇಅಲೆ ಸಮಯದಲ್ಲಿ ಲಾಕ್‌ಡೌನ್ ಜಾರಿಯಾದಾಗ ಜನರು ಜಾಗೃತರಾಗಿದ್ದರು. ಆದರೆ, ಎರಡನೇ ಅಲೆಯಲ್ಲಿ ಸಾವಿನ ಸಂಖ್ಯೆ ಹೆಚ್ಚುತ್ತಿದ್ದರೂ ಜನರಲ್ಲಿ ಜಾಗೃತಿಯಿಲ್ಲ. ಆದ್ದರಿಂದ ಅಧಿಕಾರಿಗಳು ಗ್ರಾಮೀಣ ಪ್ರದೇಶದ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಆದ್ಯತೆಯಲ್ಲಿ ಮಾಡಬೇಕು ಎಂದು ಶಾಸಕ ನಾಗನಗೌಡ ಕಂದಕೂರ ಅಧಿಕಾರಿಗಳಿಗೆ ಸೂಚಿಸಿದರು.

ಪಟ್ಟಣದ ಸಮುದಾಯ ಆರೊಗ್ಯ ಕೇಂದ್ರದಲ್ಲಿ ಗುರುವಾರ 10 ಆಮ್ಲಜನಕ ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿ ಜನ ದೇವಸ್ಥಾನ, ಕಟ್ಟೆಗಳು ಸೇರಿದಂತೆ ಅಲ್ಲಲ್ಲಿ ಗುಂಪು ಗೂಡುವುದನ್ನು ನಿಲ್ಲಿಸಿಲ್ಲ. ಜನರಲ್ಲಿ ಎರಡನೇ ಅಲೆಯ ಭೀಕರತೆಯ ಅರಿವು ಮೂಡಿಸುವ ಮೂಲಕ ಜಾಗೃತಿಗೆ ಕ್ರಮ ಕೈಗೊಳ್ಳುವುವಂತೆ ಹೇಳಿದರು.

ಪಟ್ಟಣದ ಸಮುದಾಯ ಆರೊಗ್ಯ ಕೇಂದ್ರ ಹಾಗೂ ಕೋವಿಡ್ ಕೇರ್ ಸೆಂಟರ್‌ಗೆ ಬೇಕಾದ ಅರವಳಿಕೆ ತಜ್ಞ, ತಾಂತ್ರಿಕ ಸಿಬ್ಬಂದಿ, ಆರೋಗ್ಯ ಸಿಬ್ಬಂದಿ ಹಾಗೂ ವೈದ್ಯರನ್ನು ಕೂಡಲೇನೇಮಕ ಮಾಡಿ ಹಾಗೂ ಇಲ್ಲಿನ ವೈದ್ಯರನ್ನು ಬೇರೆಡೆ ಸೇವೆಗೆ ನಿಯೋಜಿಸಿದ್ದರೆ ಕೂಡಲೆ ಇಲ್ಲಿಗೆ ವಾಪಾಸ್‌ ಕಳುಹಿಸುವಂತೆ ತಾಲ್ಲೂಕು ವೈದ್ಯಾಧಿಕಾರಿಗಳಿಗೆ ತಾಕೀತು ಮಾಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿಲ್ಪಾಶರ್ಮಾ ಮಾತನಾಡಿ, ಆಮ್ಲಜನಕದ 5 ಸಿಲಿಂಡರ್‌ಗಳು ಅಳವಡಿಸಲಾಗಿದೆ. ತಜ್ಞರು ಪರಿಶೀಲಿಸಿದ್ದು 10 ಹಾಸಿಗೆಗಳಿಗೆ ಆಮ್ಲಜನಕ ಪೂರೈಕೆಯ ವ್ಯವಸ್ಥೆ ಸರಿಯಾಗಿದೆ, ಲಸಿಕೆಯ ಕೊರತೆಯು ದೇಶಾದ್ಯಂತ ಉಂಟಾಗಿತ್ತು. ಆದರೆ, ಈಗ ಲಸಿಕೆಯ ಕೊರತೆ ಉಂಟಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿಗಳ ಹಂತದಲ್ಲಿ ಗ್ರಾಮೀಣ ಟಾಸ್ಕ್ ಫೋರ್ಸ್ ರಚಿಸಲಾಗಿದೆ. ಅವರ ಮೂಲಕ ಜನರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತದೆ. ಎಲ್ಲರೂ ಸಹಕರಿಸುವ ಮೂಲಕ ಕೋವಿಡ್ ಅಲೆಯನ್ನು ಸಮರ್ಥವಾಗಿ ಎದುರಿಸಬೇಕಿದೆ. ಕೋವಿಡ್ ನಿಯಮಗಳು ಹಾಗೂ ಮಾರ್ಗಸೂಚಿಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸುವಂತೆ ಅವರು ಮನವಿ ಮಾಡಿದರು.

ಜಿಲ್ಲಾ ಮಲೇರಿಯ ನಿಯಂತ್ರಣಾಧಿಕಾರಿ ಡಾ.ಲಕ್ಷ್ಮೀಕಾಂತ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಭಗವಂತ ಅನ್ವರ್, ವೈದ್ಯಾಧಿಕಾರಿ ಡಾ.ಶಿವಪ್ರಸಾದ ಮೈತ್ರಿ, ಡಾ.ಬಾಗರೆಡ್ಡಿ, ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ಪುರಸಭೆ ಮುಖ್ಯಾಧಿಕಾರಿ ಶರಣಪ್ಪ ಮಡಿವಾಳ, ಜೆಡಿಎಸ್ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಜಿ.ತಮ್ಮಣ್ಣ, ಬ್ಲಾಕ್ ಘಟಕದ ಅಧ್ಯಕ್ಷ ಶರಣು ಅವಂಟಿ ಹಾಗೂ ಆರೋಗ್ಯ ಸಿಬ್ಬಂದಿ ಇದ್ದರು.

ಆರೋಗ್ಯ ಕೇಂದ್ರ ಪರಿಶಿಲಿಸಿದ ಸಿಇಒ

ಗುರುವಾರ ಪಟ್ಟಣದಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭಿಸಿದ ನಂತರ ಸಮುದಾಯ ಆರೋಗ್ಯ ಕೇಂದ್ರದ ಸಾಮಾನ್ಯ ವಾರ್ಡ್ ಗಳನ್ನು ಪರಿಶೀಲಿಸಿದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿಲ್ಪಾ ಶರ್ಮಾ ಅವರು, ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವಂತೆ, ಜನರಿಗೆ ಉತ್ತಮ ಸೇವೆಯನ್ನು ಒದಗಿಸುವುದು, ಸಾಮಾನ್ಯ ಹೊರರೋಗಿಗಳಿಗೆ ವೈದ್ಯರು ಲಭ್ಯವಿರುವಂತೆ ಸೂಚಿಸಿದರು.

ಜಿಲ್ಲಾ ಕೇಂದ್ರದಲ್ಲಿ ಸಿ.ಟಿ.ಸ್ಕ್ಯಾನ್ ಮಾಡಿಕೊಳ್ಳಲು ಸರ್ಕಾರ ನಿಗದಿಪಡಿಸಿದ ಶುಲ್ಕಕ್ಕಿಂತಲೂ ಹೆಚ್ಚಿನ ಹಣ ಪಡೆಯುತ್ತಿರುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕೂಡಲೇಅಂಥವರ ಮೇಲೆ ಕ್ರಮ ಕೈಗೊಳ್ಳುವ ಮೂಲಕ, ಸಾಮಾನ್ಯ ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT