ಹುಣಸಗಿ: ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಮೀಸಲಿಟ್ಟ ನಿಗಮದ ಹಣವನ್ನು ಅನ್ಯ ಯೋಜನೆಗಳಿಗೆ ಬಳಸದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಹುಣಸಗಿಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ಈ ಕುರಿತು ವಿಭಾಗೀಯ ಸಂಚಾಲಕ ರಾಮಣ್ಣ ಕಲ್ಲದೇವನಹಳ್ಳಿ ಮಾತನಾಡಿ, 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿ ಎಂದು ಹಾಗೂ ದಲಿತರ ಹಲವು ಬೇಡಿಕೆಗಳು ಈಡೇರಿಸಲು ಸಂಘಟನೆಗಳು ಬೆಂಬಲ ನೀಡಿದವು. ಇದರ ಪ್ರತಿಫಲವಾಗಿ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆಯಾಗಿದೆ. ಈ ಸರ್ಕಾರದಲ್ಲಿ ಪರಿಶಿಷ್ಟರಿಗೆ ಮೀಸಲಾದ ಹಣವನ್ನು ಬೇರೆ ಯೋಜನೆಗೆ ಬಳಸಿಕೊಳ್ಳುವ ಮೂಲಕ ಅನ್ಯಾಯ ಎಸಗುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮಿಸಲಿರುವ ಹುದ್ದೆಗಳನ್ನು ಕಾಲ ಮಿತಿಯೊಳಗೆ ಭರ್ತಿ ಮಾಡುವ ಮೂಲಕ ಸಾಮಾಜಿಕ ನ್ಯಾಯವದಗಿಸಬೇಕು ಎಂದರು.
ಕಲ್ಯಾಣ ಕರ್ನಾಟಕ ಭಾಗದಲ್ಲಿ 10 ವರ್ಷಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಕೋಟ್ಯಾಂತರ ಹಣ ಖರ್ಚಾಗಿದೆ. ಅದು ಸಮರ್ಪಕವಾಗಿ ಇಂದಿಗೂ ನಮ್ಮ ಸಮುದಾಯಗಳಿಗೆ ಮುಟ್ಟಿಲ್ಲ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಅಮಲಪ್ಪ ಹಳ್ಳಿ ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಪ್ರೋತ್ಸಾಹ ಧನಕ್ಕೆ ವಿಧಿಸಿದ ಆದಾಯ ಮಿತಿಯನ್ನು ಹಿಂದಿನಂತೆ ಜಾರಿಗೊಳಿಸಬೇಕು ಎಂದರು. ಸಮಾಜ ಕಲ್ಯಾಣ ಇಲಾಖೆಯಿಂದ ಬಿಡುಗಡೆ ಮಾಡುತ್ತಿರುವ ಎಲ್ಲಾ ಅನುದಾನ ನಿರ್ವಹಣೆ ಮತ್ತು ಪರಿವೀಕ್ಷಣೆ ಮಾಡಲು ಸ್ವತಂತ್ರ ಕಾವಲು ಸಮಿತಿ ನೇಮಿಸಬೇಕು ಎಂದು ಒತ್ತಾಯಿಸಿದರು.
ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ಬಸಲಿಂಗಪ್ಪ ನಾಯ್ಕೋಡಿ ಅವರಿಗೆ ಸಲ್ಲಿಸಲಾಯಿತು. ಮುಖಂಡರಾದ ಯಲ್ಲಪ್ಪ ಕಡದರ ಗಡ್ಡಿ, ಮಾಳಪ್ಪ ಕಿರದಳ್ಳಿ, ಲಕ್ಷ್ಮಣ್ ರಾಂಪುರ್, ಶರಣು ವಜ್ಜಲ, ಸಿದ್ದರಾಮಪ್ಪ ಚನ್ನುರ್ ಸೇರಿದಂತೆ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.