ಗುರುವಾರ , ಮೇ 6, 2021
23 °C
ದೇವತಕಲ್ಲ; ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಭೇಟಿ, ಪರಿಶೀಲನೆ

ಯಾದಗಿರಿ ಜಿಲ್ಲೆಯಲ್ಲಿ ಏಪ್ರಿಲ್‌ 17ರಂದು ಕಂದಾಯ ಸಚಿವರ ಗ್ರಾಮ ವಾಸ್ತವ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೇವತಕಲ್ಲ (ಹುಣಸಗಿ): ಸಮೀಪದ ದೇವತಕಲ್ಲ ಗ್ರಾಮಕ್ಕೆ ಏಪ್ರಿಲ್ 17 ರಂದು ಕಂದಾಯ ಸಚಿವ ಆರ್.ಅಶೋಕ ಅವರ ಪ್ರವಾಸ ನಿಗದಿಯಾಗಿದ್ದು, ಪೂರ್ವಸಿದ್ಧತೆ ಹಾಗೂ ಗ್ರಾಮ ವಾಸ್ತವ್ಯ ಕುರಿತು ಪರಿಶೀಲಿಸಲು ಆಗಮಿಸಿರುವುದಾಗಿ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ.ಆರ್ ಅವರು ಮಾಹಿತಿ ನೀಡಿದರು.

ಈ ಕುರಿತು ಹುಣಸಗಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ದೇವತಕಲ್ಲ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ನಮ್ಮನಡೆ ಹಳ್ಳಿ ಕಡೆ ಜನಜಾಗೃತಿ ಸಭೆ ನಡೆಯಲಿದ್ದು, ಆ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ ನಡೆಸಲಾಗಿದೆ. ಅಲ್ಲದೇ ಈ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಮೂಲಭೂತ ಸೌಲಭ್ಯ, ಕೋವಿಡ್ ನಿಯಮ ಪಾಲನೆ ಸೇರಿದಂತೆ ಕೆಲ ವಿಷಯಗಳ ಕುರಿತು ಸೂಚನೆ ನೀಡಲಾಗಿದೆ ಎಂದರು.

ಇದಕ್ಕೂ ಮುಂಚೆ ಜಿಲ್ಲಾಧಿಕಾರಿಯವರು ದೇವತಕಲ್ಲ ಗ್ರಾಮ ಪಂಚಾಯಿತಿ ಕಚೇರಿಯ ಸಭಾಂಗಣದಲ್ಲಿ ಕಂದಾಯ ಸಚಿವರ ಗ್ರಾಮವಾಸ್ತವ್ಯ ಕಾರ್ಯಕ್ರಮ ಕುರಿತು ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಜನರ ಮನೆ ಬಾಗಿಲಿಗೆ ಜಿಲ್ಲಾಡಳಿತ ಎಂಬ ಘೋಷ ವಾಕ್ಯದಡಿ ಆಯೋಜಿಸಿರುವ ‘ಜಿಲ್ಲಾಧಿಕಾರಿ ನಡೆ-ಹಳ್ಳಿ ಕಡೆ’ ಕಾರ್ಯಕ್ರಮದಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ಜಿಲ್ಲಾಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಏಪ್ರಿಲ್ 17 ರ ರಂದು ದೇವತಕಲ್ಲ ಗ್ರಾಮದಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಗ್ರಾಮ ವಾಸ್ತವ್ಯ ಮಾಡಲಿದ್ದು, ಕೂಡಲೇ ದೇವತಕಲ್ಲ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಬೇಕೆಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಗ್ರಾಮ ವಾಸ್ತವ್ಯದಲ್ಲಿನ ಕಾರ್ಯಗಳು: ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರರು ಭೇಟಿ ನೀಡಿ, ಗ್ರಾಮದ ಪಹಣಿಗಳಲ್ಲಿರುವ ಲೋಪದೋಷಗಳನ್ನು ಸರಿಪಡಿಸಲು ಕ್ರಮ ಕೈಗೊಳ್ಳುವುದು. ಗ್ರಾಮದಲ್ಲಿ ಪೌತಿ ಹೊಂದಿದ ಖಾತೆದಾರರ ಹೆಸರನ್ನು ಪಹಣಿಯ ಕಾಲಂ 9 ರಿಂದ ತೆಗೆದು ನೈಜ ವಾರಸುದಾರರ ಹೆಸರಿಗೆ ಖಾತೆ ಮಾಡಲು ಕ್ರಮವಹಿಸುವುದು. ಗ್ರಾಮದ ಎಲ್ಲಾ ಅರ್ಹ ವ್ಯಕ್ತಿಗಳಿಗೆ ಪಿಂಚಣಿ ಸೌಲಭ್ಯ ದೊರೆಯುತ್ತಿರುವ ಬಗ್ಗೆ ಪರಿಶೀಲಿಸುವುದು ಮತ್ತು ಬಿಟ್ಟು ಹೋದಂಥ ಅರ್ಹ ಪ್ರಕರಣಗಳಿಗೆ ಸ್ಥಳದಲ್ಲಿಯೇ ಆದೇಶ ನೀಡುವುದು. ಗ್ರಾಮದಲ್ಲಿ ಸ್ಮಶಾನ ಲಭ್ಯತೆಯ ಬಗ್ಗೆ ಪರಿಶೀಲಿಸುವುದು ಹಾಗೂ ಸ್ಮಶಾನವಿಲ್ಲದಿದ್ದಲ್ಲಿ ಸರ್ಕಾರದ ಆದೇಶದಂತೆ ಕ್ರಮವಹಿಸುವುದು. ಸರ್ಕಾರದಿಂದ ಸಾರ್ವಜನಿಕರಿಗೆ ದೊರೆಯಬಹುದಾದ ಸವಲತ್ತುಗಳ ಬಗ್ಗೆ ಅರಿವು ಮೂಡಿಸುವುದು. ಮತದಾರರ ಪಟ್ಟಿ ಪರಿಷ್ಕರಣೆ, ಬರ, ಪ್ರವಾಹ ಇದ್ದಲ್ಲಿ ಪರಿಹಾರ ಒದಗಿಸಲು ಕ್ರಮ, ಪ್ರವಾಹದ ಹಾನಿ ತಡೆಗಟ್ಟಲು ಕ್ರಮ, ಅತಿವೃಷ್ಟಿ, ಅನಾವೃಷ್ಟಿ ಎದುರಿಸಲು ಮುಂಜಾಗ್ರತೆ ಕ್ರಮವಹಿಸುವುದರ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಗುತ್ತದೆ ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್, ಉಪವಿಭಾಗಾಧಿಕಾರಿ ಶಂಕರಗೌಡ ಸೋಮನಾಳ, ಸುರಪುರ ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ, ಹುಣಸಗಿ ತಹಶೀಲ್ದಾರ್ ವಿನಯಕುಮಾರ ಪಾಟೀಲ, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ದೇವಿಕಾ ಆರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಭಾರಿ ಉಪನಿರ್ದೇಶಕ ಅಶೋಕ ಭಜಂತ್ರಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಎಸ್‌.ಎಸ್‌. ಚನ್ನಬಸವ, ಆಹಾರ ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ನಾಯಕ, ಯುವಜನ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜು ಭಾವಿಕಟ್ಟಿ, ಲೋಕೋಪಯೋಗಿ ಎಇಇ ಎಸ್.ಜಿ.ಪಾಟೀಲ ಇದ್ದರು.

ವಿವಿಧ ಕಾಲೊನಿಗಳ ವೀಕ್ಷಣೆ
ದೇವತಕಲ್ಲ ಗ್ರಾಮದಲ್ಲಿ ಕಂದಾಯ ಸಚಿವ ಆರ್.ಅಶೋಕ ಅವರು ಗ್ರಾಮ ವಾಸ್ತವ್ಯ ಮಾಡಲಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ದೇವತಕಲ್ಲ ಗ್ರಾಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ಮಾಡಿ ನಂತರ ವಿವಿಧ ಕಾಲೊನಿಗಳನ್ನು ವೀಕ್ಷಿಸಿದರು.

ನಂತರ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ವಿವಿಧ ತರಗತಿಗಳು ಹಾಗೂ ಕಂಪ್ಯೂಟರ್ ಕೊಠಡಿ ವೀಕ್ಷಿಸಿ ವಿದ್ಯಾರ್ಥಿಗಳೊಂದಿಗೆ ಸಂವಹನ ನಡೆಸಿದರು.

***

ಅಂದು ದೇವತಕಲ್ಲ ಗ್ರಾಮ ವಾಸ್ತವ್ಯದಲ್ಲಿ ವಿವಿಧ ಇಲಾಖೆಗಳು ತಮ್ಮ-ತಮ್ಮ ಯೋಜನೆಗಳ ಬಗ್ಗೆ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಳಿಗೆಗಳನ್ನು ಆರಂಭಿಸಬೇಕು.
-ಡಾ.ರಾಗಪ್ರಿಯಾ ಆರ್‌, ಜಿಲ್ಲಾಧಿಕಾರಿ

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು