ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸ್‌ ಮಾಡಿ: ಎ.ಬಿ.ಇಬ್ರಾಹಿಂ

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಇಬ್ರಾಹಿಂ ಅಧ್ಯಕ್ಷತೆಯಲ್ಲಿ ಸಭೆ
Last Updated 14 ಜೂನ್ 2020, 16:28 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲೆಯಲ್ಲಿ ಜೂನ್ 18ರಂದು ನಡೆಯುವ ಪಿಯು ಮತ್ತು ಜೂನ್ 25ರಿಂದ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳನ್ನು ಕಡ್ಡಾಯವಾಗಿ ಸ್ಯಾನಿಟೈಸ್ ಮಾಡಬೇಕು ಎಂದು ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಸರ್ಕಾರದ ಕಾರ್ಯದರ್ಶಿ ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎ.ಬಿ.ಇಬ್ರಾಹಿಂ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್-19 ಸಂಬಂಧ ನಡೆದ ಸಭೆಯಲ್ಲಿ ಜಿಲ್ಲಾಡಳಿತ ಕೈಗೊಂಡ ಮುಂಜಾಗ್ರತಾ ಕ್ರಮಗಳ ಬಗ್ಗೆ ವಿವರವಾದ ಮಾಹಿತಿ ಪಡೆದುಕೊಂಡು ಅವರು ಮಾತನಾಡಿದರು.

ಪರೀಕ್ಷೆಗಳು ವಿದ್ಯಾರ್ಥಿಗಳ ಬಾಳಿನಲ್ಲಿ ಅತ್ಯಂತ ಮಹತ್ವದ ಪಾತ್ರವಹಿಸುತ್ತವೆ. ಹೀಗಾಗಿ ಕೋವಿಡ್ ಬಗ್ಗೆ ಅವರಲ್ಲಿ ಯಾವುದೇ ಆತಂಕದ ಛಾಯೆ ಇರಬಾರದು.ಕೋವಿಡ್ ನಿಯಂತ್ರಣದಲ್ಲಿ ಸರ್ಕಾರದ ಪ್ರಯತ್ನದ ಜೊತೆಗೆ ಸಂಘ-ಸಂಸ್ಥೆಗಳು ಮತ್ತು ಸಾರ್ವಜನಿಕರ ಸಹಕಾರ ಮುಖ್ಯವಾಗಿದೆ. ಸಾರ್ವಜನಿಕರ ಸಹಕಾರ ಇಲ್ಲವಾದಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಸರ್ಕಾರ ಯಾವುದೇ ಕ್ರಮ ತೆಗೆದುಕೊಂಡರೂ ಸಫಲತೆ ಸಾಧ್ಯವಿಲ್ಲ ಎಂದರು.

ಪ್ರತಿನಿತ್ಯ ಹೆಚ್ಚಿನ ಮಾದರಿಗಳ ಪರೀಕ್ಷೆ ನಡೆಸಬೇಕು. ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಗಳಲ್ಲಿರುವ ವಲಸಿಗರಿಗೆ ಆಹಾರ ಪೂರೈಕೆಯಲ್ಲಿ ಲೋಪ ಕಂಡುಬರಬಾರದು. ಅದೇ ರೀತಿ ಹೋಂ ಕ್ವಾರಂಟೈನ್‌ನಲ್ಲಿರುವ ಜನರ ಮೇಲೆ ಇನ್ನೂ ಹೆಚ್ಚಿನ ನಿಗಾವಹಿಸಬೇಕು. ಇದಕ್ಕಾಗಿ ಗ್ರಾಮ ಮಟ್ಟದಲ್ಲಿ ರಚಿಸಿರುವ ಟಾಸ್ಕ್ ಫೋರ್ಸ್ ಅನ್ನು ಸಕ್ರಿಯಗೊಳಿಸಬೇಕು ಎಂದು ಅವರು ಸೂಚಿಸಿದರು.

ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಮಾತನಾಡಿ, ಹೋಂ ಕ್ವಾರಂಟೈನ್‌ನಲ್ಲಿರುವ ವಲಸೆಗಾರರಿಗೆ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಲು ಮತ್ತು ಅವರ ಆರೋಗ್ಯ ಸ್ಥಿತಿ ವಿಚಾರಿಸಲು ಕರೆ ಮಾಡಲಾಗುತ್ತಿದ್ದು, ಇದುವರೆಗೆ 15,264 ಜನರಿಗೆ ಕರೆ ಮಾಡಲಾಗಿದೆ. ಅಲ್ಲದೇ, ಗ್ರಾಮ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಗಳಿಂದ ನಿಗಾವಹಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನವಣೆ, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್, ಉಪ ವಿಭಾಗಾಧಿಕಾರಿ ಶಂಕರಗೌಡ ಎಸ್.ಸೋಮನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಎಸ್. ಪಾಟೀಲ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿಶೇಷ ಅಧಿಕಾರಿ ಡಾ.ಶಂಕರಗೌಡ ಐರೆಡ್ಡಿ ಇದ್ದರು.

***

ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳಿಗೂ ಮಾಸ್ಕ್‌ಗಳನ್ನು ವಿತರಿಸಬೇಕು. ಪರೀಕ್ಷೆ ಸುಸೂತ್ರವಾಗಿ ನಡೆಯಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು

-ಎ.ಬಿ.ಇಬ್ರಾಹಿಂ,ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT