ಏಪ್ರಿಲ್ 22 ರಿಂದ ದ್ವಿತೀಯ ಪಿಯು ಪರೀಕ್ಷೆ, 10,428 ವಿದ್ಯಾರ್ಥಿಗಳು ನೋಂದಣಿ
ಯಾದಗಿರಿ: ಪ್ರಸಕ್ತ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಏಪ್ರಿಲ್ 22ರಿಂದ ಮೇ 18ರ ವರೆಗೆ ನಡೆಯಲಿದ್ದು, 17 ಪರೀಕ್ಷಾ ಕೇಂದ್ರಗಳಲ್ಲಿ 95 ಕಾಲೇಜುಗಳ 10,428 ವಿದ್ಯಾರ್ಥಿಗಳು ಹೆಸರು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ತಿಳಿಸಿದರು.
ದ್ವಿತೀಯ ಪಿಯುಸಿ ಪರೀಕ್ಷೆ ಸಿದ್ಧತೆ ಕುರಿತಂತೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಅಧಿಕಾರಿಗಳು ಪರೀಕ್ಷಾ ನಿಯಮಗಳಂತೆ ಕಾರ್ಯನಿರ್ವಹಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿಯ ಮಾಹಿತಿಯ ಚಿತ್ರೀಕರಣ ಮಾಡಿ ಸಮೂಹ ಮಾಧ್ಯಮ, ಸಮಾಜಿಕ ಜಾಲತಾಣಗಳಲ್ಲಿ ಹರಿದಾಡುವಂತೆ ಮಾಡುವುದು ಅಪರಾಧ. ಇಂತಹ ಕೃತ್ಯಗಳು ಕಂಡುಬಂದಲ್ಲಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದರು.
ಪರೀಕ್ಷೆ ವೇಳೆ ಕೇಂದ್ರದ ಸುತ್ತಲಿನ 200 ಮೀಟರ್ ವ್ಯಾಪ್ತಿಯು ನಿಷೇಧಿ ಪ್ರದೇಶವಾಗಿರುತ್ತದೆ. ಸುತ್ತಲಿನ ಝಿರಾಕ್ಸ್, ಕಂಪ್ಯೂಟರ್ ಮಳಿಗೆಗಳನ್ನು ಮುಚ್ಚಬೇಕು. ಸುರಕ್ಷತೆಯ ದೃಷ್ಟಿಯಿಂದ ಪೊಲೀಸರು ಬಂದೋಬಸ್ತ್ಗೆ ಸಮಯಕ್ಕಿಂತ ಮುಂಚಿತವಾಗಿಯೇ ತೆರಳಬೇಕು ಎಂದು ಸೂಚಿಸಿದರು.
ಪರೀಕ್ಷಾ ಕೇಂದ್ರಗಳಲ್ಲಿ ನೀರು ವಿತರಕರ ನೇಮಕ ರದ್ದುಪಡಿಸಲಾಗಿದೆ. ಕುಡಿಯುವ ನೀರಿನ ವ್ಯವಸ್ಥೆಯನ್ನು ಕೋಣೆಯ ಹೊರಗೆ ಮಾಡಬೇಕು ಎಂದರು.
ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಬಳಕೆ ನಿಷೇಧಿಸಲಾಗಿದೆ. ಕೇಂದ್ರದ ಮುಖ್ಯ ಅಧಿಕ್ಷಕರು ಬೆಸಿಕ್ ಸೆಟ್ ಮೊಬೈಲ್ ಮಾತ್ರ ಬಳಸಬಹುದು. ಆದರೆ, ಸ್ಮಾರ್ಟ್ ಫೋನ್ ತರುವಂತಿಲ್ಲ. ಪರೀಕ್ಷಾ ಗೌಪ್ಯ ಕಾರ್ಯಗಳಿಗೆ ಬಳಸುವ ವಾಹನಗಳಿಗೆ ಪರೀಕ್ಷೆಯ ಮುಂಚಿತವಾಗಿ ಜಿಪಿಎಸ್ ಅಳವಡಿಸಬೇಕು ಎಂದು ಸೂಚಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚಂದ್ರಕಾಂತ ಹಿಳ್ಳಿ, ಜಿಲ್ಲಾ ಖಜಾನೆ ಅಧಿಕಾರಿ ಬಿ. ಮಾಲಿಂಗರಾಯ, ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು, ಕಾಲೇಜಿನ ಉಪನ್ಯಾಸಕರು, ಶಿಕ್ಷಣಾಧಿಕಾರಿಗಳು, ತಹಶೀಲ್ದಾರರು, ಪೊಲೀಸ್ ಸಿಬ್ಬಂದಿ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.