ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ: ವಸತಿ ನಿಲಯಗಳ ಸಮಸ್ಯೆ ಬಗೆಹರಿಸಿ

ಕಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ
Last Updated 12 ಫೆಬ್ರುವರಿ 2020, 9:54 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲೆಯಲ್ಲಿರುವ ವಸತಿ ನಿಲಯಗಳಲ್ಲಿ ಬೆಡ್, ಕಾಟ್ ಹಾಗೂ ಕಾಂಪೌಂಡ್ ಸಮಸ್ಯೆಗಳಿದ್ದು, ಕೂಡಲೇ ಅಧಿಕಾರಿಗಳು ಭೇಟಿ ನೀಡಿ ಸಮಸ್ಯೆ ಪರಿಹರಿಸಬೇಕು ಎಂದು ಅಧಿಕಾರಿಗಳಿಗೆ ಜನಪ್ರತಿನಿಧಿಗಳು ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ (ಕೆಡಿಪಿ)ಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಚಾಟಿ ಬೀಸಿದ ಜನಪ್ರನಿಧಿಗಳು, ತಿಂಗಳಲ್ಲಿ ಕನಿಷ್ಠ ಐದು ಬಾರಿ ಆಯಾ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸುವಂತೆ ನಿರ್ದೇಶಿಸಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ರಾಜಶೇಖರಗೌಡ ಪಾಟೀಲ ವಜ್ಜಲ್ ಮಾತನಾಡಿ, ಜಿಲ್ಲೆಯಲ್ಲಿ ಅಭಿವೃದ್ಧಿ ಕಾಮಗಾರಿಗಳು ಆಮೆ ಗತಿಯಲ್ಲಿ ಸಾಗುತ್ತಿದ್ದು, ಎಲ್ಲಾ ಕಾಮಗಾರಿಗಳನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಕೆಆರ್‌ಐಡಿಎಲ್, ನಿರ್ಮಿತಿ ಕೇಂದ್ರ ಹಾಗೂ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ನಿರ್ಮಿತಿ ಕೇಂದ್ರದಿಂದ ನಡೆಯುವ ಕಾಮಗಾರಿಗಳು ಹಲವೆಡೆ ಪೂರ್ಣಗೊಂಡಿಲ್ಲ. ಸುರಪುರ ತಾಲ್ಲೂಕಿನಾದ್ಯಂತ ಅಂಗನವಾಡಿ ಕೇಂದ್ರಗಳು ಶಿಥಿಲಗೊಂಡಿದ್ದು, ಮರು ನಿರ್ಮಾಣದ ಕೆಲಸಗಳು ಆಗಿಲ್ಲ. ಶೀಘ್ರ ಇವುಗಳನ್ನು ಪೂರ್ಣಗೊಳಿಸಿ ಎಂದು ಸೂಚಿಸಿದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕಿ ದೇವಿಕಾ ಆರ್‌. ವರದಿ ಒಪ್ಪಿಸಿ, ರೈತರ ಆತ್ಮಹತ್ಯೆ, ಹಾವು ಕಡಿತ, ಆಕಸ್ಮಿಕ ಸಾವು, ಬಣವೆ ನಷ್ಟದ ಪರಿಹಾರ ನೀಡಲಾಗಿದೆ ಎಂದು ತಿಳಿಸಿದರು. ಮಧ್ಯಪ್ರವೇಶಿಸಿದ ಜಿಲ್ಲಾ ಪಂಚಾಯಿತಿ ಅಧ್ಯಕ್ಷರು, ಶೀಘ್ರ ಪರಿಹಾರ ಧನ ವಿತರಿಸಬೇಕು. ಬೇಸಿಗೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಮುಂಜಾಗ್ರತೆ ವಹಿಸಬೇಕು ಎಂದು ಸೂಚಿಸಿದರು.

ನಂತರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಸುಚೇತಾ ನೆಲವಗಿ ಕ್ರೀಡಾ ಸಾಧನೆಗಳ ಬಗ್ಗೆ ವಿವರಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಧ್ಯಕ್ಷರು, ಯುವಜನೋತ್ಸವ, ಯುವಜನ ಮೇಳದಂತಹ ಕಾರ್ಯಕ್ರಮಗಳನ್ನು ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸುವ ಬದಲು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡರೆ ಸಾರ್ವಜನಿಕರಿಗೆ ಗ್ರಾಮೀಣ ಕಲೆಗಳ ಪರಿಚಯವಾಗುತ್ತದೆ. ಸ್ಪರ್ಧೆಗಳನ್ನು ಮಾತ್ರ ಕ್ರೀಡಾಂಗಣದಲ್ಲಿ ಆಯೋಜಿಸಬೇಕು ಎಂದು ಸೂಚಿಸಿದರು.

ಗಂಗಾ ಕಲ್ಯಾಣ ಯೋಜನೆಯಲ್ಲಿ ಕೊಳವೆ ಬಾವಿ ಹಾಕಿಸಿದ ಫಲಾನುಭವಿಗಳಿಗೆ ಮೂರ್ನಾಲ್ಕು ವರ್ಷಗಳಿಂದ ವಿದ್ಯುತ್ ಸಂಪರ್ಕ ನೀಡಿಲ್ಲ ಎಂಬುದಾಗಿ ಸಾರ್ವಜನಿಕ ದೂರುಗಳು ಬರುತ್ತಿವೆ. ಶೀಘ್ರ ವಿದ್ಯುತ್ ಸಂಪರ್ಕ ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷರು ಸೂಚಿಸಿದರು.

ಸಾಲ ವಿತರಿಸಿ:ಸರ್ಕಾರದ ವಿವಿಧ ಯೋಜನೆಗಳಿಗೆ ಬ್ಯಾಂಕ್ ಅಧಿಕಾರಿಗಳು ಸಾಲ ವಿತರಣೆ ಮಾಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವುದು ಕಂಡುಬರುತ್ತಿದೆ. ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಜಿಲ್ಲೆಯ ವಿವಿಧ ಬ್ಯಾಂಕ್ ಅಧಿಕಾರಿಗಳಿಗೆ ಈ ಬಗ್ಗೆ ನಿರ್ದೇಶನ ನೀಡಿ ಸರ್ಕಾರಿ ಯೋಜನೆಗಳ ಅನುಷ್ಠಾನಕ್ಕೆ ಕೈಜೋಡಿಸಬೇಕು ಎಂದು ನಿರ್ದೇಶಿಸಿದರು.

ನಂತರ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನೆ ನಡೆಯಿತು.

ಈ ವೇಳೆ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮುಕ್ಕಣ ಕರಿಗಾರ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸುನೀಲ್ ಬಿಸ್ವಾಸ್, ಜಿಲ್ಲಾ ಪಂಚಾಯಿತಿ ಸದಸ್ಯರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

***

ಚೀನಾದಲ್ಲಿ ಕಾಣಿಸಿಕೊಂಡ ಕೊರೋನಾ ವೈರಸ್ ಬಗ್ಗೆ ಜಿಲ್ಲೆಯಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡು ಜನರಲ್ಲಿ ಸ್ವಚ್ಛತೆಯ ಅರಿವು ಮೂಡಿಸಬೇಕು
–ರಾಜಶೇಖರಗೌಡ ಪಾಟೀಲ ವಜ್ಜಲ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT