ಶನಿವಾರ, ಅಕ್ಟೋಬರ್ 16, 2021
23 °C

ಯಾದಗಿರಿ: ಬಸ್‌ ಸೌಕರ್ಯಕ್ಕೆ ಒತ್ತಾಯಿಸಿ ವಿದ್ಯಾರ್ಥಿಗಳು ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ನಗರದ ಶಾಲಾ–ಕಾಲೇಜುಗಳಿಗೆ ಗ್ರಾಮೀಣ ಪ್ರದೇಶದಿಂದ ಆಗಮಿಸುವ ಬಡ ವಿದ್ಯಾರ್ಥಿಗಳಿಗೆ ಸೂಕ್ತ ಬಸ್ ಸೌಕರ್ಯ ಮಾಡಿಕೊಡುವಂತೆ ಆಗ್ರಹಿಸಿ ನೂರಾರು ವಿದ್ಯಾರ್ಥಿಗಳು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ತು ಜಿಲ್ಲಾ ಘಟಕದ ನೇತೃತ್ವದಲ್ಲಿ ಮಂಗಳವಾರ ಬೃಹತ್ ರ್‍ಯಾಲಿ ಪ್ರತಿಭಟನೆ ನಡೆಸಿದರು.

ಮಂಗಳವಾರ ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಿಂದ ಹೊರಟ ನೂರಾರು ವಿದ್ಯಾರ್ಥಿ ವಿದ್ಯಾರ್ಥಿನಿಯರು ಕೇಂದ್ರ ಬಸ್ ನಿಲ್ದಾಣಕ್ಕೆ ತೆರಳಿ ಸಮಸ್ಯೆ ಪರಿಹರಿಸುವಂತೆ ಅಧಿಕಾರಿಗಳಿಗೆ ಆಗ್ರಹಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಎಬಿವಿಪಿ ಜಿಲ್ಲಾ ಸಹ ಸಂಚಾಲಕ ಅಶೋಕ ಗುತ್ತೇದಾರ ಮನವಿ ಸಲ್ಲಿಸಿ ಮಾತನಾಡಿ, ಗ್ರಾಮೀಣ ಪ್ರದೇಶದಿಂದ ನಗರಕ್ಕೆ ಆಗಮಿಸುತ್ತಿರುವ ವಿದ್ಯಾರ್ಥಿಗಳಿಗೆ ಗಿರಿ ನಗರ ಸಾರಿಗೆ ಸಮರ್ಪಕವಾಗಿಲ್ಲದಿರುವುದರಿಂದ ಶಾಲಾ ಕಾಲೇಜುಗಳಿಗೆ 2 ರಿಂದ 3 ಕಿ.ಮೀ ದೂರ ನಡೆದುಕೊಂಡು ಶಾಲೆ ಕಾಲೇಜುಗಳಿಗೆ ಹೋಗುವ ಪರಿಸ್ಥಿತಿ ಇದೆ. ಲಾಕ್‌ಡೌನ್‌ಗಿಂತ ಮುಂಚಿತವಾಗಿ ನಗರ ಬಸ್ ಸೌಲಭ್ಯ ಇತ್ತು. ಕೂಡಲೇ ಆರಂಭಿಸಬೇಕು ಎಂದರು.

ಶ್ರೀರಕ್ಷಾ ಪದವಿ ಕಾಲೇಜು ಅಧ್ಯಕ್ಷ ಕೃಷ್ಣಮೂರ್ತಿ ಕುಲಕರ್ಣಿ ಮಾತನಾಡಿ, ಗ್ರಾಮೀಣ ಪ್ರದೇಶದಿಂದ ಬರಲು ಬಸ್‌ ವ್ಯವಸ್ಥೆ ಇಲ್ಲದಿರುವುದರಿಂದ ಸಮಯಕ್ಕೆ ಸರಿಯಾಗಿ ಬರಲು ಆಗದೇ ವಿದ್ಯಾರ್ಥಿಗಳು ತರಗತಿ ತಪ್ಪಿಸಿಕೊಂಡು ಸಂಕಷ್ಟ ಅನುಭವಿಸುತ್ತಿದ್ದಾರೆ. ಶೀಘ್ರ ಬಸ್‌ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಬಸು ಎಸ್. ನಕ್ಕಲ್, ಗವಿಲಿಂಗ, ವೀರೇಶ, ಹುಸೇನಪ್ಪ, ದೇವು, ಮೌಲಾಲಿ, ರಾಜು, ವಿಜಯ, ಬಾಲಕಿಯರ ಸರ್ಕಾರಿ ಪಿಯು ಕಾಲೇಜು ವಿದ್ಯಾರ್ಥಿನಿಯರಾದ ಸುನಿತಾ, ಶಿವಲೀಲಾ, ಪವಿತ್ರ, ಕವಿತಾ, ಸುಮಾ ಸೇರಿದಂತೆ ನೂರಾರು ಸಂಖ್ಯೆಯ ವಿದ್ಯಾರ್ಥಿನಿಯರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು