ಗುರುವಾರ , ಜನವರಿ 23, 2020
28 °C
ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಸಚಿವ ಪ್ರಭು ಚವಾಣ್ ಸೂಚನೆ

ಜನವರಿ 10ರೊಳಗೆ ಬಜೆಟ್‌ ಪ್ರಸ್ತಾವನೆ ಸಲ್ಲಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: 2020-21ನೇ ಸಾಲಿನ ಬಜೆಟ್‍ನಲ್ಲಿ ಸೇರಿಸಲು ಜಿಲ್ಲೆಯ ಅಭಿವೃದ್ಧಿಗೆ ಅಗತ್ಯವಿರುವ ಕಾಮಗಾರಿಗಳ ಅನುದಾನದ ಬೇಡಿಕೆಗಾಗಿ ಜನವರಿ 10ರೊಳಗೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಬಿ.ಚವಾಣ್ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಶುಕ್ರವಾರ ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು, ಅನುದಾನಕ್ಕಾಗಿ ಈಗಾಗಲೇ ಸರ್ಕಾರದ ಹಂತದಲ್ಲಿರುವ ಪ್ರಸ್ತಾವನೆ ಮತ್ತು ಬಜೆಟ್‍ನಲ್ಲಿ ಸೇರಿಸಲು ಹೊಸ ಪ್ರಸ್ತಾವನೆಗಳನ್ನು ಸಲ್ಲಿಸಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ಜಿಲ್ಲೆಗೆ ಅತ್ಯವಶ್ಯವಾದ ಅನುದಾನದ ಪ್ರಸ್ತಾವನೆ ಆದ್ಯತೆ ಮೇರೆಗೆ ಸಲ್ಲಿಸಬೇಕು. ಹೊಸ ಪ್ರಸ್ತಾವನೆಗಳಿಗೆ ತಕ್ಕಂತೆ ಅಂದಾಜು ಪತ್ರಿಕೆ ಇರಲಿ. ಅಂದಾಜು ಪತ್ರಿಕೆ ಸರಿಯಾಗಿದ್ದಷ್ಟು ಬಜೆಟ್‍ನಲ್ಲಿ ಪರಿಗಣಿಸಲು ನೆರವಾಗುತ್ತದೆ ಎಂದು ಸಲಹೆ ನೀಡಿದರು.

ಜಿಲ್ಲಾ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ಕಾರ್ಯ ನಿರ್ವಹಿಸಬೇಕು. ತಾಲ್ಲೂಕು ಕಚೇರಿಗಳಿಗೆ ಭೇಟಿ ನೀಡಿ, ಪ್ರಗತಿ ಕಾಮಗಾರಿಗಳನ್ನು ಪರಿಶೀಲಿಸಬೇಕು. ನಗರದಲ್ಲಿ ಸ್ವಚ್ಛತೆ ಕಾಪಾಡಲು ಕ್ರಮ ಕೈಗೊಳ್ಳಬೇಕು ಮತ್ತು ಒಳಚರಂಡಿ ಕಾಮಗಾರಿ ಸಮಸ್ಯೆಯನ್ನು ಪರಿಹರಿಸಬೇಕು. ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ ಯಾದಗಿರಿ ನಗರದಲ್ಲಿ ಕುಡಿಯುವ ನೀರು ಸರಬರಾಜಿಗಾಗಿ ಜಾಕ್‍ವೆಲ್ ಸಮಸ್ಯೆ ಮತ್ತು ಒಳಚರಂಡಿ ಸಮಸ್ಯೆ ಇರುವ ಬಗ್ಗೆ ಸಚಿವರ ಗಮನ ಸೆಳೆದರು.

ಈ ವೇಳೆ ನಗರಸಭೆ ಪೌರಾಯುಕ್ತ ರಮೇಶ ಸುಣಗಾರ ಮಾತನಾಡಿ, ಯಾದಗಿರಿ ನಗರದ ಹೊಸ ಜಾಕ್‍ವೆಲ್ ಸ್ಥಳಾಂತರ ಮಾಡುವ ಕಾಮಗಾರಿಗೆ ₹13 ಕೋಟಿ ಅನುದಾನ ಕೊರತೆಯಿದ್ದು, ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ನೂತನ ನಗರಸಭೆ ಕಾರ್ಯಾಲಯದ ಕಟ್ಟಡ ನಿರ್ಮಾಣಕ್ಕೆ ₹7 ಕೋಟಿ ಒಳಚರಂಡಿ ಕಾಮಗಾರಿ ₹87 ಕೋಟಿ  ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಮಾತನಾಡಿ, 300 ಹಾಸಿಗೆಗಳ ಸುಸಜ್ಜಿತ ನೂತನ ಜಿಲ್ಲಾಸ್ಪತ್ರೆ ಕಟ್ಟಡ ಸಿದ್ಧವಾಗಿದೆ. ಜಿಲ್ಲಾಸ್ಪತ್ರೆಗೆ ಮಾನವ ಸಂಪನ್ಮೂಲ ವಾರ್ಷಿಕ ವೆಚ್ಚ ₹49.75 ಕೋಟಿ ಆಗಲಿದ್ದು, ಸರ್ಕಾರಕ್ಕೆ ಕಳೆದ ಸೆಪ್ಟೆಂಬರ್‌ನಲ್ಲಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಯಂತ್ರೋಪಕರಣ ಮತ್ತು ಪೀಠೋಪಕರಣಗಳಿಗೆ ₹30 ಕೋಟಿ ಅಗತ್ಯವಿದ್ದು, ಆಯುಕ್ತಾಲಯಕ್ಕೆ ಪ್ರಸ್ತಾವನೆ ಸಲ್ಲಿಸಿದೆ ಎಂದು ತಿಳಿಸಿದರು.

ಕಡೇಚೂರು ಕೈಗಾರಿಕಾ ಪ್ರದೇಶದಲ್ಲಿ ಫಾರ್ಮಾಸಿಟಿಕಲ್ ನಿರ್ಮಾಣ ಮಾಡುವ ಯೋಜನೆಗಾಗಿ ₹100 ಕೋಟಿ ಪ್ರಸ್ತಾವನೆಯು ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ಬಗ್ಗೆ ಮತ್ತು ಬಂದಳ್ಳಿಯ ಪರಿಶಿಷ್ಟ ವರ್ಗದ ಏಕಲವ್ಯ ಮಾದರಿ ವಸತಿ ಶಾಲೆಯನ್ನು 2020-21ನೇ ಸಾಲಿನ ಶೈಕ್ಷಣಿಕ ವರ್ಷದಿಂದ ಪ್ರಾರಂಭಿಸಲು ಆವರ್ತಕ ವೆಚ್ಚ ₹2 ಕೋಟಿ ಮತ್ತು ಅನಾವರ್ತಕ ವೆಚ್ಚ ₹1.50 ಕೋಟಿ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದರು.

ಪ್ರಾದೇಶಿಕ ಉಪ ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ ಎಸ್.ಎಸ್., ಮಾತನಾಡಿ, ಜಿಲ್ಲೆಯಲ್ಲಿ ಸುರಪುರ ತಾಲ್ಲೂಕಿನ ಬೋನಾಳ ಕೆರೆಯನ್ನು 2019-20ನೇ ಸಾಲಿಗೆ ಇಸ್ಟರ್ನ್ ಪ್ಲೇನ್ಸ್ ವಿಶೇಷ ಅಭಿವೃದ್ಧಿ ಅಡಿ ಅಭಿವೃದ್ಧಿ ಕಾಮಗಾರಿಗಳಿಗೆ ಯಾದಗಿರಿ ಪ್ರಾದೇಶಿಕ ವಿಭಾಗದ ಬೋನಾಳ ಕೆರೆ, ಚಿಂತನಪಲ್ಲಿ ಮೀಸಲು ಅರಣ್ಯ ಪ್ರದೇಶ ಮತ್ತು ಹತ್ತಿಕುಣಿ ಮೀಸಲು ಅರಣ್ಯ ಪ್ರದೇಶಗಳ ಅಭಿವೃದ್ಧಿಗೆ ₹1.80 ಕೋಟಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಬೋನಾಳ ಪಕ್ಷಿಧಾಮವನ್ನು ರಾಜ್ಯದ ದೊಡ್ಡ ಪಕ್ಷಿಧಾಮವೆಂದು ಘೋಷಿಸಲಾಗಿದೆ. ಇಲ್ಲಿ ಪಕ್ಷಿಗಳ ಸರ್ವೆ ಮಾಡಬೇಕಿದೆ. ಪ್ರವಾಸೋದ್ಯಮ ತಾಣ ಅಭಿವೃದ್ಧಿಯಾದಲ್ಲಿ ಸ್ಥಳೀಯರಿಗೆ ಉದ್ಯೋಗ ದೊರಕಲಿದೆ ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನವಣೆ, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ, ಸಹಾಯಕ ಆಯುಕ್ತ ಶಂಕರಗೌಡ ಎಸ್.ಸೋಮನಾಳ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಇದ್ದರು.

***

ಜಿಲ್ಲೆಗೆ ವಿಶೇಷ ಪ್ಯಾಕೇಜ್‌ ನೀಡಲು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜತೆ ಚರ್ಚಿಸುತ್ತೇನೆ. ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಲು ಮನವಿ ಮಾಡುತ್ತೇನೆ.

–ಪ್ರಭು ಬಿ.ಚವಾಣ್, ಜಿಲ್ಲಾ ಉಸ್ತುವಾರಿ ಸಚಿವ 

***

ಯಾದಗಿರಿಯಲ್ಲಿ ನೂತನವಾಗಿ 10 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲು ಒಂದು ಕಟ್ಟಡ ಕಾಮಗಾರಿಗೆ ₹1.75 ಕೋಟಿ ನಂತೆ ಒಟ್ಟು ₹17.05 ಕೋಟಿ ಬೇಕಿದೆ. ಸ್ಥಳಕ್ಕಾಗಿ ತಹಶೀಲ್ದಾರರಿಗೆ ಪತ್ರ ಬರೆಯಲಾಗಿದೆ.

–ಡಾ.ಎಂ.ಎಸ್.ಪಾಟೀಲ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು